ಭ್ರಷ್ಟಾಚಾರ ಪ್ರಕರಣದಲ್ಲಿ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ನೀಡಿರುವ ಮಧ್ಯಂತರ ನಿರೀಕ್ಷಣಾ ಜಾಮೀನು ಪ್ರಶ್ನಿಸಿ ಕರ್ನಾಟಕ ಲೋಕಾಯುಕ್ತ ಸಲ್ಲಿಸಿದ್ದ ಮೇಲ್ಮನವಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ವಿರೂಪಾಕ್ಷಪ್ಪ ಅವರ ಪ್ರತಿಕ್ರಿಯೆ ಕೇಳಿದೆ.
ಮಾರ್ಚ್ 7 ರಂದು ಕರ್ನಾಟಕ ಹೈಕೋರ್ಟ್ ವಿರೂಪಾಕ್ಷಪ್ಪ ಅವರಿಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿಗೆ ಸಂಬಂಧಿಸಿದಂತೆ ನ್ಯಾಯಮೂರ್ತಿಗಳಾದ ಅನಿರುದ್ಧ ಬೋಸ್ ಮತ್ತು ಸುಧಾಂಶು ಧುಲಿಯಾ ಅವರಿದ್ದ ಪೀಠ ಈ ಆದೇಶ ನೀಡಿತು.
ಈ ಹಿಂದೆ ಸರ್ಕಾರ ಬೇರೊಂದು ಪೀಠದೆದುರು ಪ್ರಕರಣ ಉಲ್ಲೇಖಿಸಿತ್ತು. ದಿನಾಂಕ ಸ್ಪಷ್ಟಪಡಿಸದ ಆ ಪೀಠ ಪ್ರಕರಣವನ್ನು ಆದಷ್ಟು ಬೇಗ ಪಟ್ಟಿ ಮಾಡಲಾಗುವುದು ಎಂದಿತ್ತು.
ಲೋಕಾಯುಕ್ತ ಪೊಲೀಸರು ತಮ್ಮ ವಿರುದ್ಧ ಹೂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿರೂಪಾಕ್ಷಪ್ಪ ಹೈಕೋರ್ಟ್ ಮೆಟ್ಟಿಲೇರಿದ್ದರು. ಮಾರ್ಚ್ 4ರಂದು ಬೆಂಗಳೂರಿನ ವಿಶೇಷ ನ್ಯಾಯಾಲಯವು ಲಂಚ ಸ್ವೀಕರಿಸಿದ ಆರೋಪದ ಮೇಲೆ ವಿರೂಪಾಕ್ಷಪ್ಪ ಅವರ ಪುತ್ರ ಪ್ರಶಾಂತ್ ಮಾಡಾಳ್ ಸೇರಿದಂತೆ ಐವರನ್ನು ಹದಿನಾಲ್ಕು ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು. ರಾಜ್ಯ ಲೆಕ್ಕಪತ್ರ ಇಲಾಖೆಯ ಜಂಟಿ ನಿಯಂತ್ರಕರಾಗಿರುವ ಪ್ರಶಾಂತ್ ಅವರು ಬೆಂಗಳೂರು ಜಲ ಮಂಡಳಿಯಲ್ಲಿ ಮುಖ್ಯ ಲೆಕ್ಕಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು.
ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆಗೆ (ಕೆಎಸ್‌ಡಿಎಲ್) ರಾಸಾಯನಿಕಗಳನ್ನು ಪೂರೈಸುವ ಗುತ್ತಿಗೆ ನೀಡಲು ₹40 ಲಕ್ಷ ಲಂಚ ಪಡೆಯುತ್ತಿದ್ದ ವೇಳೆ ಪ್ರಶಾಂತ್ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿಬಿದ್ದಿದ್ದರು.
ಬೆಂಗಳೂರಿನಲ್ಲಿ ಕೆಮಿಕಲ್ಸ್ ಕಾರ್ಪೊರೇಷನ್ ಎಂಬ ಪಾಲುದಾರಿಕೆ ಕಂಪನಿಯನ್ನು ಹೊಂದಿರುವ ಶ್ರೇಯಸ್ ಕಶ್ಯಪ್ ಎಂಬವವರು ದೂರು ದಾಖಲಿಸಿದ್ದರು. ಕಶ್ಯಪ್ ಅವರು ಕೆಎಸ್‌ಡಿಎಲ್‌ಗೆ ರಾಸಾಯನಿಕ ತೈಲ ಪೂರೈಸುವುದಕ್ಕಾಗಿ ಜನವರಿ 2023ರಲ್ಲಿ ಕರೆಯಲಾಗಿದ್ದ ಹರಾಜು ಪ್ರಕ್ರಿಯೆಯಲ್ಲಿ ಯಶಸ್ವಿಯಾಗಿ ಭಾಗಿಯಾಗಿದ್ದರು.
ಹರಾಜಿನ ಆದೇಶ ನೀಡಲು ಹಾಗೂ ಹಣ ಬಿಡುಗಡೆ ಮಾಡಲು ಶಾಸಕ ವಿರೂಪಾಕ್ಷಪ್ಪ ಹಾಗೂ ಅವರ ಪುತ್ರ ಪ್ರಶಾಂತ್ ₹81 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಕಶ್ಯಪ್ ಅವರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು.
ಪ್ರಶಾಂತ್ ಮತ್ತು ವಿರೂಪಾಕ್ಷಪ್ಪ ವಿರುದ್ಧ ಭ್ರಷ್ಟಾಚಾರ ತಡೆ ಕಾಯಿದೆಯ ಸೆಕ್ಷನ್ 7(ಎ) ಮತ್ತು 7(ಬಿ) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದಲ್ಲಿ ಶಾಸಕ ವಿರೂಪಾಕ್ಷಪ್ಪ ಮೊದಲ ಆರೋಪಿಯಾಗಿದ್ದು, ಪುತ್ರ ಪ್ರಶಾಂತ್ ಎರಡನೇ ಆರೋಪಿಯಾಗಿದ್ದಾರೆ. ಲಂಚ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ಇತರ ನಾಲ್ವರನ್ನು ಕೂಡ ಬಂದಿಸಲಾಗಿತ್ತು. ಅವರನ್ನು ನ್ಯಾಯಾಧೀಶ ಬಿ ಜಯಂತಕುಮಾರ್ ಮಾರ್ಚ್ 2 ರಂದು ನ್ಯಾಯಾಂಗ ಬಂಧನಕ್ಕೆ ನೀಡಿದ್ದರು.
''ಶಾಸಕ ವಿರೂಪಾಕ್ಷಪ್ಪ ನಾಪತ್ತೆಯಾಗಿದ್ದಾರೆ. ಉಳಿದ ನಾಲ್ವರು ಆರೋಪಿಗಳ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯಿದೆಯ ಸೆಕ್ಷನ್ 8ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಬೆಂಗಳೂರು ಮತ್ತು ಚೆನ್ನಗಿರಿಯಲ್ಲಿರುವ ವಿರೂಪಾಕ್ಷಪ್ಪ ಅವರ ನಿವಾಸದ ಮೇಲೆ ನಡೆದ ದಾಳಿಯಲ್ಲಿ ₹ 40 ಲಕ್ಷ ಲಂಚದ ಹಣ ಸೇರಿದಂತೆ ಒಟ್ಟು ₹ 8.3 ಕೋಟಿ ಮೌಲ್ಯದ ಹಣ ಪತ್ತೆಯಾಗಿದೆ” ಎಂದು ಲೋಕಾಯುಕ್ತ ಕಚೇರಿ ಮೂಲಗಳು ತಿಳಿಸಿದ್ದವು. ಬಳಿಕ ವಿರೂಪಾಕ್ಷಪ್ಪ ಹೈಕೋರ್ಟ್‌ನಿಂದ ನಿರೀಕ್ಷಣಾ ಜಾಮೀನು ಪಡೆದಿದ್ದರು.
ಈ ಮಧ್ಯೆ, ಮಾರ್ಚ್ 8 ರಂದು, ಬೆಂಗಳೂರಿನ ಸಿವಿಲ್ ನ್ಯಾಯಾಲಯವು ಪ್ರಕರಣಕ್ಕೆ ಸಂಬಂಧಿಸಿದಂತೆ ವಿರೂಪಾಕ್ಷಪ್ಪ ಮತ್ತು ಅವರ ಪುತ್ರ ಪ್ರಶಾಂತ್ ಕುಮಾರ್ ಎಂ ವಿ ವಿರುದ್ಧ ಅವಹೇಳನಕಾರಿ ಸುದ್ದಿಗಳನ್ನು ಪ್ರಸಾರ ಮಾಡದಂತೆ 45 ಮಾಧ್ಯಮ ಸಂಸ್ಥೆಗಳಿಗೆ ತಾತ್ಕಾಲಿಕ ನಿರ್ಬಂಧ ವಿಧಿಸಿತ್ತು.