ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಂಚ್ರ ವರಾಳೆ ಅವರ ಹೆಸರನ್ನು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಹುದ್ದೆಗೆ ಶಿಫಾರಸ್ಸು ಮಾಡಿರುವ ಬೆನ್ನಿಗೇ, ಅವರ ಪದೋನ್ನತಿಯಿಂದ ತೆರವಾಗುವ ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಹುದ್ದೆಗೆ ನ್ಯಾ. ಪಿ ಎಸ್ ದಿನೇಶ್ ಕುಮಾರ್ ಅವರ ಹೆಸರನ್ನು ಕೊಲಿಜಿಯಂ ಶುಕ್ರವಾರ ಶಿಫಾರಸ್ಸು ಮಾಡಿದೆ.
ನ್ಯಾಯಮೂರ್ತಿ ದಿನೇಶ್ ಕುಮಾರ್ ಅವರು 2015ರಿಂದ ಕರ್ನಾಟಕ ಹೈಕೋರ್ಟ್‌ನ ನ್ಯಾಯಾಧೀಶರಾಗಿದ್ದು, 2024ರ ಫೆಬ್ರವರಿ 24ರಂದು ನಿವೃತ್ತರಾಗಲಿದ್ದಾರೆ.
"ಹೈಕೋರ್ಟ್ ನ್ಯಾಯಾಧೀಶರಾಗಿ ನ್ಯಾಯಾಂಗ ಮತ್ತು ಆಡಳಿತಾತ್ಮಕ ಭಾಗದಲ್ಲಿ ಸಾಕಷ್ಟು ಅನುಭವವನ್ನು ನ್ಯಾ. ದಿನೇಶ್ ಕುಮಾರ್ ಗಳಿಸಿದ್ದಾರೆ. ಫೆಬ್ರವರಿ 24, 2024 ರಂದು ನ್ಯಾ. ದಿನೇಶ್ ಕುಮಾರ್ ನಿವೃತ್ತರಾಗಲಿದ್ದು, ಮುಖ್ಯ ನ್ಯಾಯಮೂರ್ತಿಯಾಗಿ ಒಂದು ತಿಂಗಳಿಗಿಂತ ಸ್ವಲ್ಪ ಹೆಚ್ಚು ಅಧಿಕಾರಾವಧಿಯನ್ನು ಹೊಂದಿರುತ್ತಾರೆ. ಅವರು ಉತ್ಕೃಷ್ಟ ಸಮಗ್ರತೆ, ಪ್ರಾಮಾಣಿಕತೆ ಮತ್ತು ಸಾಮರ್ಥ್ಯಗಳಿಂದ ಗಮನಸೆಳೆದವರಾಗಿದ್ದಾರೆ. ನೇಮಕವಾದಾಗಿನಿಂದ ಕರ್ನಾಟಕ ಹೈಕೋರ್ಟ್‌ನಲ್ಲಿ ನ್ಯಾ. ದಿನೇಶ್ ಕುಮಾರ್ ಮಹತ್ತರ ಸೇವೆ ಸಲ್ಲಿಸಿದ್ದಾರೆ" ಎಂದು ಸುಪ್ರೀಂ ಕೋರ್ಟ್ ಕೊಲಿಜಿಯಂನ ನಿರ್ಣಯದಲ್ಲಿ ತಿಳಿಸಲಾಗಿದೆ.
ಕರ್ನಾಟಕ ಹೈಕೋರ್ಟ್‌ನ ನ್ಯಾಯಾಧೀಶರ ಹಿರಿತನದಲ್ಲಿ, ನ್ಯಾಯಮೂರ್ತಿ ದಿನೇಶ್ ಕುಮಾರ್ ಅವರು ಪ್ರಸ್ತುತ ಆಂಧ್ರಪ್ರದೇಶ ಹೈಕೋರ್ಟ್‌ನಲ್ಲಿ ಕರ್ತವ್ಯನಿರ್ವಹಿಸುತ್ತಿರುವ ನ್ಯಾಯಮೂರ್ತಿ ನರೇಂದರ್ ಜಿ ನಂತರ ಎರಡನೇ ಹಿರಿಯರಾಗಿದ್ದಾರೆ ಎಂಬ ಅಂಶವನ್ನು ಭಾರತದ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್, ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ಬಿ ಆರ್ ಗವಾಯಿ ಅವರನ್ನೊಳಗೊಂಡ ಕೊಲಿಜಿಯಂ ನಿರ್ಣಯದಲ್ಲಿ ಉಲ್ಲೇಖಿಸಲಾಗಿದೆ.
2015 ರಲ್ಲಿ ನ್ಯಾಯಪೀಠಕ್ಕೆ ಬಡ್ತಿ ಪಡೆಯುವ ಮೊದಲು, ನ್ಯಾಯಮೂರ್ತಿ ಕುಮಾರ್ ಅವರು 1990 ರಿಂದ ವಕೀಲರಾಗಿ ಅಭ್ಯಾಸ ಮಾಡುತ್ತಿದ್ದರು ಮತ್ತು ವಿವಿಧ ಹೈಕೋರ್ಟ್‌ಗಳು ಮತ್ತು ಸುಪ್ರೀಂ ಕೋರ್ಟ್‌ನಲ್ಲಿ ಹಲವಾರು ಪ್ರಮುಖ ಪ್ರಕರಣಗಳಲ್ಲಿ ಹಾಜರಾಗಿದ್ದರು.
[ನಿರ್ಣಯ ಓದಿ]