ಕೋವಿಡ್-19 ಹಿನ್ನೆಲೆಯಲ್ಲಿ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (ಎನ್‌ಇಇಟಿ) ಮತ್ತು ಜಂಟಿ ಪ್ರವೇಶ ಪರೀಕ್ಷೆ (ಜೆಇಇ) ಮುಂದೂವಡುವಂತೆ ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಜಾಗೊಳಿಸಿದೆ.
ದೇಶದ ವಿವಿಧ ರಾಜ್ಯಗಳ 11 ವಿದ್ಯಾರ್ಥಿಗಳು ಎನ್ಇಇಟಿ ಹಾಗೂ ಜೆಇಇ ಮುಂದೂಡಿಕೆ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಅರುಣ್ ಮಿಶ್ರಾ, ಬಿ ಆರ್ ಗವಾಯಿ ಮತ್ತು ಕೃಷ್ಣ ಮುರಾರಿ ಅವರಿದ್ದ ತ್ರಿಸದಸ್ಯ ಪೀಠ ಸೋಮವಾರ ನಡೆಸಿತು, ಕೋವಿಡ್-19 ಮುಗಿದ ನಂತರ ಪರೀಕ್ಷೆಗಳನ್ನು ನಡೆಸುವಂತೆ ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರಕ್ಕೆ (ಎನ್ ಟಿಎ) ಸೂಚಿಸುವಂತೆ ಅರ್ಜಿಯಲ್ಲಿ ಕೋರಲಾಗಿತ್ತು.
ಕೋವಿಡ್ ಹಿನ್ನೆಲೆಯಲ್ಲಿ ಹಲವು ಪರೀಕ್ಷೆಗಳು ಮುಂದೂಡಲ್ಪಟ್ಟಿರುವುದರ ಕುರಿತು ಅರ್ಜಿದಾರರ ಪರ ವಕೀಲ ಅಲಖ್ ಅಲೋಕ್ ಶ್ರೀವಾಸ್ತವ ಅವರು ನ್ಯಾಯಾಲಯದ ಗಮನ ಸೆಳೆಯುವ ಪ್ರಯತ್ನ ಮಾಡಿದರು. ಸಿಬಿಎಸ್ಇ ಮತ್ತು ಐಸಿಎಸ್ಇ ಪರೀಕ್ಷೆಗಳನ್ನು ರದ್ದುಪಡಿಸಲಾಗಿರುವುದು ಮತ್ತು ಎಐಬಿಇ ಪರೀಕ್ಷೆ ಮುಂದೂಡಲ್ಪಟ್ಟಿದೆ ಎಂದು ವಿವರಣೆ ನೀಡಿದ ಶ್ರೀವಾಸ್ತವ ಅವರು, “ನಾವು ಎನ್ಇಇಟಿ ಮತ್ತು ಜೆಇಇ ಯನ್ನು ಅನಿರ್ದಿಷ್ಟಾವಧಿಗೆ ಮುಂದೂಡುವಂತೆ ಕೋರುತ್ತಿಲ್ಲ” ಎಂದು ನ್ಯಾಯಪೀಠಕ್ಕೆ ವಿವರಿಸಿದರು.
ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರದ (ಎನ್ ಟಿಎ) ಪರ ವಾದಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಪರೀಕ್ಷೆ ನಡೆಸುವ ಸಂದರ್ಭದಲ್ಲಿ ಎಲ್ಲಾ ರೀತಿಯ ಸುರಕ್ಷಾ ಕ್ರಮಕೈಗೊಳ್ಳಲಾಗುವುದು ಎಂದರು.
ಇದೇ ಸೆಪ್ಟೆಂಬರ್ ನಲ್ಲಿ ನಿಗದಿಯಾಗಿರುವ ಎನ್ಇಇಟಿ ಮತ್ತು ಜೆಇಇ (ಮುಖ್ಯ) ಪರೀಕ್ಷೆಗಳನ್ನು ರದ್ದುಪಡಿಸಬೇಕು. ದೇಶಾದ್ಯಂತ ಎನ್ ಇಇಟಿ ಮತ್ತು ಜೆಇಇ ಪರೀಕ್ಷೆ ಕೇಂದ್ರಗಳನ್ನು ಹೆಚ್ಚಿಸಬೇಕು. ಪ್ರತಿ ಜಿಲ್ಲೆಯಲ್ಲಿ ಕನಿಷ್ಠ ಒಂದು ಪರೀಕ್ಷಾ ಕೇಂದ್ರ ಇರುವಂತೆ ನೋಡಿಕೊಳ್ಳಲು ಕೇಂದ್ರ ಸರ್ಕಾರಕ್ಕೆ ಸೂಚಿಸಬೇಕು ಎಂದು ಅರ್ಜಿದಾರರು ಸುಪ್ರೀಂ ಕೋರ್ಟ್ ಅನ್ನು ಕೋರಿದ್ದರು.
ಹೊಸಬರಿಗೆ ಪ್ರವೇಶಾತಿಗೆ ಅವಕಾಶ ಕಲ್ಪಿಸಲು ಸೂಚಿಸಬೇಕು ಎಂದು ನ್ಯಾಯಾಲಯವನ್ನು ಕೋರಿದ್ದ ಅರ್ಜಿದಾರರು, ಸೆಪ್ಟೆಂಬರ್ ನಲ್ಲಿ ಪರೀಕ್ಷೆ ನಡೆಸಲು ಉದ್ದೇಶಿಸಿರುವ ನಡುವೆಯೇ ಕೋವಿಡ್ ಪ್ರಕರಣಗಳು ವ್ಯಾಪಕವಾಗುತ್ತಿರುವುದರ ಬಗ್ಗೆ ಆತಂಕ ವ್ಯಕ್ತಪಡಿಸಿದ್ದರು.