ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಜಾಮೀನು ಅರ್ಜಿಯ ವಿಚಾರಣೆಯನ್ನು ಮತ್ತೊಬ್ಬ ನ್ಯಾಯಾಧೀಶರಿಗೆ ವರ್ಗಾವಣೆ ಮಾಡಿರುವುದನ್ನು ಪ್ರಶ್ನಿಸಿ ದೆಹಲಿ ಸರ್ಕಾರದ ಸಚಿವ, ಆಮ್ ಆದ್ಮಿ ಪಕ್ಷದ ನಾಯಕ ಸತ್ಯೇಂದರ್ ಜೈನ್ ಅವರು ಸಲ್ಲಿಸಿರುವ ಮನವಿ ಕುರಿತಂತೆ ಸುಪ್ರೀಂ ಕೋರ್ಟ್ ಮಂಗಳವಾರ ಜಾರಿ ನಿರ್ದೇಶನಾಲಯದ (ಇ ಡಿ) ಪ್ರತಿಕ್ರಿಯೆ ಕೇಳಿದೆ [ಸತ್ಯೇಂದ್ರ ಕುಮಾರ್ ಜೈನ್ ಮತ್ತು ಜಾರಿ ನಿರ್ದೇಶನಾಲಯ ನಡುವಣ ಪ್ರಕರಣ].
ನ್ಯಾಯಮೂರ್ತಿಗಳಾದ ಎಂ ಆರ್ ಶಾ ಮತ್ತು ಕೃಷ್ಣ ಮುರಾರಿ ಅವರಿದ್ದ ಪೀಠ ಜಾರಿ ನಿರ್ದೇಶನಾಲಯಕ್ಕೆ ನೋಟಿಸ್ ಜಾರಿ ಮಾಡಿದ್ದು, ಅಕ್ಟೋಬರ್ 31ಕ್ಕೆ ಪ್ರಕರಣ ಮುಂದೂಡಿದೆ.
ತಾನು ಪ್ರಕರಣದ ವರ್ಗಾವಣೆ ಕುರಿತು ಮಾತ್ರ ವಿಚಾರಣೆ ನಡೆಸುತ್ತಿದ್ದು ಅದರ ಅರ್ಹತೆ ಮತ್ತಿತರ ವಿಚಾರಗಳ ಬಗ್ಗೆ ಅಲ್ಲ ಎಂದು ಸ್ಪಷ್ಟಪಡಿಸಿರುವ ನ್ಯಾಯಾಲಯ ಔಪಚಾರಿಕ ನೋಟಿಸ್ ನೀಡುತ್ತಿರುವುದಾಗಿ ತಿಳಿಸಿದೆ.
ಜೈನ್ ಪರ ಹಿರಿಯ ವಕೀಲ ಕಪಿಲ್ ಸಿಬಲ್ ವಾದ ಮಂಡಿಸಿದರೆ, ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಇ ಡಿಯನ್ನು ಪ್ರತಿನಿಧಿಸಿದ್ದರು. ತಮ್ಮ ಅರ್ಜಿ ವಜಾಗೊಳಿಸಿದ್ದ ದೆಹಲಿ ಹೈಕೋರ್ಟ್ ಆದೇಶ ಪ್ರಶ್ನಿಸಿ ಜೈನ್, ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.