ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೆ ಒಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ಗೆ ಶುಕ್ರವಾರ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡುವ ಮೂಲಕ ಮಹತ್ವದ ತೀರ್ಪು ನೀಡಿದೆ.
ಜಾರಿ ನಿರ್ದೇಶನಾಲಯ ತಮ್ಮನ್ನು ಬಂಧಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕೇಜ್ರಿವಾಲ್ ಅವರು ಕೆಲವು ಕಾನೂನಾತ್ಮಕ ಪ್ರಶ್ನೆಗಳನ್ನು ಎತ್ತಿದ್ದಾರೆ. ಇದನ್ನು ಸುಪ್ರೀಂ ಕೋರ್ಟ್‌ನ ವಿಸ್ತೃತ ಪೀಠವು ಪರಿಗಣಿಸಬೇಕಿದೆ ಎಂದು ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ ಅವರ ವಿಭಾಗೀಯ ಪೀಠ ಹೇಳಿದೆ.
ಪ್ರಕರಣವನ್ನು ವಿಸ್ತೃತ ಪೀಠಕ್ಕೆ ಶಿಫಾರಸ್ಸು ಮಾಡುವುದರೊಂದಿಗೆ ಕೇಜ್ರಿವಾಲ್ ಅವರನ್ನು ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆ ಮಾಡುವುದು ಅಗತ್ಯ ಎಂದು ನ್ಯಾಯಾಲಯ ಪರಿಗಣಿಸಿದೆ.
“ಜೀವಿಸುವ ಹಕ್ಕಿಗೆ ಸಂಬಂಧಿಸಿರುವುದರಿಂದ ಹಾಗೂ ಪ್ರಕರಣವನ್ನು ವಿಸ್ತೃತ ಪೀಠಕ್ಕೆ ಶಿಫಾರಸ್ಸು ಮಾಡಿರುವುದರಿಂದ ಅರವಿಂದ್ ಕೇಜ್ರಿವಾಲ್ ಅವರನ್ನು ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಬೇಕು” ಎಂದು ಪೀಠ ಆದೇಶಿಸಿದೆ.
ಜಾರಿ ನಿರ್ದೇಶನಾಲಯದ ಪ್ರಕರಣದಲ್ಲಿ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ದೊರೆತರೂ ಅವರನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ಅದೇ ಪ್ರಕರಣದಲ್ಲಿ ವಶಕ್ಕೆ ಪಡೆದಿರುವುದರಿಂದ ಕೇಜ್ರಿವಾಲ್ ಜೈಲಿನಲ್ಲೇ ಉಳಿಯಲಿದ್ದಾರೆ.
ಇದಕ್ಕೂ ಮುನ್ನ, ಲೋಕಸಭಾ ಚುನಾವಣೆಯಲ್ಲಿ ಪ್ರಚಾರ ಮಾಡಲು ಕೇಜ್ರಿವಾಲ್‌ಗೆ ಸುಪ್ರೀಂ ಕೋರ್ಟ್ ಜೂನ್ 1ರವರೆಗೆ ಮಧ್ಯಂತರ ಜಾಮೀನು ನೀಡಿತ್ತು. ಆನಂತರ ಅವರು ನ್ಯಾಯಾಲಯದ ಆದೇಶದಂತೆ ಜೈಲಿಗೆ ಮರಳಿದ್ದರು.
ದೆಹಲಿ ಅಬಕಾರಿ ನೀತಿಯನ್ನು ಕೆಲವು ಮದ್ಯ ಮಾರಾಟಗಾರರಿಗೆ ಅನುಕೂಲ ಮಾಡಿಕೊಡಲು ರೂಪಿಸುವ ಮೂಲಕ ಪಿತೂರಿ ನಡೆಸಲಾಗಿದೆ ಎಂದು ಕೇಜ್ರಿವಾಲ್, ಮನೀಷ್ ಸಿಸೋಡಿಯಾ ಹಾಗೂ ಆಮ್ ಆದ್ಮಿ ಪಕ್ಷದ ಇತರೆ ಪದಾಧಿಕಾರಿಗಳ ವಿರುದ್ದ ಆರೋಪ ಮಾಡಲಾಗಿದೆ. ಈ ಹಿಂದೆ, ದೆಹಲಿ ಹೈಕೋರ್ಟ್ ಕೇಜ್ರಿವಾಲ್ ಅರ್ಜಿಯನ್ನು ವಜಾ ಮಾಡಿತ್ತು. ಹೀಗಾಗಿ, ಅವರು ಸುಪ್ರೀಂ ಕೋರ್ಟ್ ಕದತಟ್ಟಿದ್ದರು. ಈ ಅರ್ಜಿಯ ಆದೇಶವನ್ನು ಸುಪ್ರೀಂ ಕೋರ್ಟ್ ಮೇ 17ರಂದು ಕಾಯ್ದಿರಿಸಿತ್ತು.
ಈ ಮಧ್ಯೆ, ವಿಚಾರಣಾಧೀನ ನ್ಯಾಯಾಲಯಕ್ಕೆ ಜಾಮೀನು ಕೋರಿ ಪ್ರತ್ಯೇಕವಾಗಿ ಕೇಜ್ರಿವಾಲ್ ಅರ್ಜಿ ಸಲ್ಲಿಸಿದ್ದರು. ಇದನ್ನು ಜೂನ್ 20ರಂದು ವಿಚಾರಣಾಧೀನ ನ್ಯಾಯಾಲಯ ಪುರಸ್ಕರಿಸಿತ್ತು. ಆದರೆ, ಅದನ್ನು ಜೂನ್ 25ರಂದು ದೆಹಲಿ ಹೈಕೋರ್ಟ್ ತಡೆ ಹಿಡಿದಿತ್ತು.