ಕೊಲೆ ಯತ್ನ ಪ್ರಕರಣ: ಕೇಂದ್ರ ಸಚಿವ ನಿಶಿತ್ ಪ್ರಾಮಾಣಿಕ್ ಬಂಧಿಸದಂತೆ ಸುಪ್ರೀಂ ಕೋರ್ಟ್ ಮಧ್ಯಂತರ ರಕ್ಷಣೆ

ನಿಶಿತ್‌ ಅವರ ಅಣತಿಯಂತೆ 2018ರಲ್ಲಿ ಕೂಚ್ ಬೆಹಾರ್ ನಿವಾಸಿಯೊಬ್ಬರ ಮೇಲೆ ಗುಂಡು ಹಾರಿಸಿದ್ದಕ್ಕೆ ಸಂಬಂಧಿಸಿದ ಪ್ರಕರಣ ಇದಾಗಿದೆ.
ಸುಪ್ರೀಂ ಕೋರ್ಟ್ ಮತ್ತು ನಿಶಿತ್ ಪ್ರಾಮಾಣಿಕ್
ಸುಪ್ರೀಂ ಕೋರ್ಟ್ ಮತ್ತು ನಿಶಿತ್ ಪ್ರಾಮಾಣಿಕ್

ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಕ್ರೀಡೆ ಮತ್ತು ಗೃಹ ಖಾತೆ ರಾಜ್ಯ ಸಚಿವ ನಿಶಿತ್ ಪ್ರಮಾಣಿಕ್ ಅವರಿಗೆ ಸುಪ್ರೀಂ ಕೋರ್ಟ್‌ ಶುಕ್ರವಾರ ಬಂಧನದಿಂದ ಮಧ್ಯಂತರ ರಕ್ಷಣೆ ನೀಡಿದೆ [ನಿಶಿತ್‌ ಪ್ರಾಮಾಣಿಕ್‌ ಮತ್ತು ಪ. ಬಂಗಾಳ ಸರ್ಕಾರ ನಡುವಣ ಪ್ರಕರಣ].

ಕಲ್ಕತ್ತಾ ಹೈಕೋರ್ಟ್‌ನಲ್ಲಿ ಸಚಿವರು ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿಯ ಮುಂದಿನ ವಿಚಾರಣೆ ದಿನದವರೆಗೆ ನಿಶಿತ್‌ ಅವರ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ನ್ಯಾಯಾಲಯ ಪಶ್ಚಿಮ ಬಂಗಾಳ ಸರ್ಕಾರಕ್ಕೆ ನಿರ್ದೇಶನ ನೀಡಿತು.

ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕಲ್ಕತ್ತಾ ಹೈಕೋರ್ಟ್ ಜನವರಿ 22 ರಂದು ನಡೆಸಲಿದೆ ಎಂಬುದನ್ನು ಗಮನಿಸಿದ ನ್ಯಾಯಮೂರ್ತಿಗಳಾದ ಬೇಲಾ ಎಂ ತ್ರಿವೇದಿ ಮತ್ತು ಪಂಕಜ್ ಮಿತ್ತಲ್‌ ಅವರಿದ್ದ ಪೀಠ ತ್ವರಿತವಾಗಿ ಅದನ್ನು ವಿಲೇವಾರಿ ಮಾಡುವಂತೆ ನಿರ್ದೇಶಿಸಿತು.

 ನ್ಯಾಯಮೂರ್ತಿ ಬೇಲಾ ಎಂ ತ್ರಿವೇದಿ ಮತ್ತು ನ್ಯಾಯಮೂರ್ತಿ ಪಂಕಜ್ ಮಿತ್ತಲ್‌
ನ್ಯಾಯಮೂರ್ತಿ ಬೇಲಾ ಎಂ ತ್ರಿವೇದಿ ಮತ್ತು ನ್ಯಾಯಮೂರ್ತಿ ಪಂಕಜ್ ಮಿತ್ತಲ್‌

ಕೇಂದ್ರ ಕ್ರೀಡಾ ಮತ್ತು ಗೃಹ ಖಾತೆ ರಾಜ್ಯ ಸಚಿವ ಮತ್ತು ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕ ನಿಶಿತ್‌ ಅವರ ಅಣತಿಯಂತೆ 2018ರಲ್ಲಿ ಕೂಚ್ ಬೆಹಾರ್ ನಿವಾಸಿಯೊಬ್ಬರ ಮೇಲೆ ಗುಂಡು ಹಾರಿಸಿದ್ದಕ್ಕೆ ಸಂಬಂಧಿಸಿದ ಪ್ರಕರಣ ಇದಾಗಿದೆ.

ಪೊಲೀಸರು ಶಸ್ತ್ರಾಸ್ತ್ರ ಕಾಯಿದೆ ಮತ್ತು ಕೊಲೆ ಯತ್ನದ ಅಪರಾಧಗಳಿಗಾಗಿ ಅವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿದ್ದರು. ನಂತರ ನಿಶಿತ್‌ ಅವರು ಕಲ್ಕತ್ತಾ ಹೈಕೋರ್ಟ್‌ನಲ್ಲಿ ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದು ನ್ಯಾಯಾಲಯ ಜನವರಿ 4ರಂದು ಪ್ರಕರಣ ಮುಂದೂಡಿತ್ತು. ಈ ಹಿನ್ನೆಲೆಯಲ್ಲಿ ಸರ್ವೋಚ್ಚ ನ್ಯಾಯಾಲಯದೆದುರು ಪ್ರಸ್ತುತ ಮೇಲ್ಮನವಿ ಸಲ್ಲಿಸಲಾಗಿತ್ತು.

ಮನವಿಗೆ ಪ್ರತಿಕ್ರಿಯೆ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ನಿನ್ನೆ) ಪಶ್ಚಿಮ ಬಂಗಾಳ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು.

ಪ್ರಕರಣವನ್ನು ಕಲ್ಕತ್ತಾ ಹೈಕೋರ್ಟ್‌ನಲ್ಲಿ ಪಟ್ಟಿ ಮಾಡುವವರೆಗೆ ನಿಶಿತ್‌ ಅವರನ್ನು ಬಂಧಿಸದಂತೆ ರಕ್ಷಣೆ ನೀಡಬೇಕೆಂದು ನಿಶಿತ್‌ ಪರವಾಗಿ ಹಾಜರಾದ ಹಿರಿಯ ವಕೀಲ ಪಿ.ಎಸ್.ಪಟ್ವಾಲಿಯಾ ಮತ್ತು ವಕೀಲ ಬಾನ್ಸುರಿ ಸ್ವರಾಜ್ ಅವರು ಕೋರಿದರು.

ಪಶ್ಚಿಮ ಬಂಗಾಳ ಸರ್ಕಾರವನ್ನು ಪ್ರತಿನಿಧಿಸಿದ ಹಿರಿಯ ವಕೀಲ ಗೋಪಾಲ್ ಶಂಕರನಾರಾಯಣನ್ , ಅರ್ಜಿದಾರರು ಪರಿಹಾರಕ್ಕಾಗಿ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯವರನ್ನು ಸಂಪರ್ಕಿಸಬಹುದಿತ್ತು ಎಂದು ಗಮನಸೆಳೆದರು. ಭರವಸೆ ದಾಖಲಿಸದೆ ಇದ್ದರೂ ಯಾರನ್ನೂ ಬಂಧಿಸಲಾಗುವುದಿಲ್ಲ ಎಂದು ಅವರು ನ್ಯಾಯಾಲಯಕ್ಕೆ ಆಶ್ವಾಸನೆ ನೀಡಿದರು.

ಪ್ರಕರಣವನ್ನು ತ್ವರಿತವಾಗಿ ವಿಲೇವಾರಿ ಮಾಡಲು ನ್ಯಾಯಾಲಯ ನಿರ್ದೇಶಿಸಿದ ಹಂತದಲ್ಲಿ ಪ್ರಕರಣಗಳ ಸಂಖ್ಯೆಯನ್ನು ಗಮನಿಸಿದರೆ, ಪ್ರಾಮಾಣಿಕ್ ಅವರನ್ನು ಬಹಳ ಹಿಂದೆಯೇ ಬಂಧಿಸಬಹುದಿತ್ತು ಎಂದು ವಾದಿಸಿದಾಗ ಪಟ್ವಾಲಿಯಾ ಅವರು ಮಧ್ಯಂತರ ರಕ್ಷಣೆ ನೀಡುವಂತೆ ಒತ್ತಾಯಿಸಿದರು.

ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹೈಕೋರ್ಟ್‌ನಲ್ಲಿ ಪಟ್ಟಿ ಮಾಡುವವರೆಗೆ ಬಿಜೆಪಿ ಸಚಿವರ ವಿರುದ್ಧ ಯಾವುದೇ ಬಲವಂತದ ಕ್ರಮ ತೆಗೆದುಕೊಳ್ಳಬಾರದು ಎಂದು ನ್ಯಾಯಾಲಯ ಆದೇಶಿಸಿದೆ. ಪ್ರಕರಣದ ಅರ್ಹತೆ ಕುರಿತಂತೆ ತಾನು ಏನನ್ನೂ ಹೇಳಿಲ್ಲ ಎಂದು ಕೂಡ ಸುಪ್ರೀಂ ಕೋರ್ಟ್‌ ಸ್ಪಷ್ಟಪಡಿಸಿದೆ.

ವಕೀಲ ಸಿದ್ದೇಶ್ ಶಿರೀಶ್ ಕೊತ್ವಾಲ್ ಅವರ ಮೂಲಕ ಪ್ರಾಮಾಣಿಕ್ ಅವರು ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.

Related Stories

No stories found.
Kannada Bar & Bench
kannada.barandbench.com