
ಉದ್ಯೋಗಕ್ಕಾಗಿ ಭೂಮಿ ಹಗರಣ ಪ್ರಕರಣದಲ್ಲಿ ತಮ್ಮ ವಿರುದ್ಧದ ವಿಚಾರಣಾ ನ್ಯಾಯಾಲಯ ನಡೆಸುತ್ತಿರುವ ವಿಚಾರಣೆ ಮುಂದೂಡುವಂತೆ ಕೋರಿ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಬುಧವಾರ ತಿರಸ್ಕರಿಸಿದೆ.
ಪ್ರಕರಣವನ್ನು ಸಂಪೂರ್ಣವಾಗಿ ರದ್ದುಗೊಳಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆಯನ್ನು ದೆಹಲಿ ಹೈಕೋರ್ಟ್ ಪೂರ್ಣಗೊಳಿಸುವವರೆಗೆ ವಿಚಾರಣೆ ಮುಂದೂಡಲು ವಿಚಾರಣಾ ನ್ಯಾಯಾಲಯಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ಯಾದವ್ ನ್ಯಾಯಾಲಯದ ಮೆಟ್ಟಿಲೇರಿದರು.
ಆದರೆ ಈ ಕುರಿತು ನಿರ್ದೇಶನ ನೀಡಲು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಎಂ ಎಂ ಸುಂದರೇಶ್ ಮತ್ತು ಎನ್ ಕೋಟಿಶ್ವರ್ ಸಿಂಗ್ ಅವರಿದ್ದ ಪೀಠ ನಿರಾಕರಿಸಿತು.
ಪ್ರಕರಣದಲ್ಲಿ ವಿಚಾರಣಾ ನ್ಯಾಯಾಲಯ ಆರೋಪ ನಿಗದಿಪಡಿಸಿರುವುದು ದೆಹಲಿ ಹೈಕೋರ್ಟ್‌ನಲ್ಲಿ ಪ್ರಕರಣ ರದ್ದತಿ ಕೋರಿ ಲಾಲು ಸಲ್ಲಿಸಿರುವ ಅರ್ಜಿಯನ್ನು ನಿಷ್ಫಲಗೊಳಿಸುವುದಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.
"ನಾವು ಯಾವುದೇ ಆದೇಶ ಹೊರಡಿಸುತ್ತಿಲ್ಲ. (ಲಾಲು ಅವರ) ಬಂಧನವನ್ನು ಗಮನದಲ್ಲಿಟ್ಟುಕೊಂಡು, ವಿಚಾರಣಾ ನ್ಯಾಯಾಲಯ ಆರೋಪಗಳನ್ನು ರೂಪಿಸುವುದರಿಂದ ಹೈಕೋರ್ಟ್ ಮುಂದೆ ಬಾಕಿ ಇರುವ ಅರ್ಜಿಯನ್ನು ನಿಷ್ಫಲಗೊಳಿಸುವುದಿಲ್ಲ" ಎಂದು ನ್ಯಾಯಾಲಯ ಹೇಳಿದೆ.
ಕನಿಷ್ಠ ಆಗಸ್ಟ್ 12 ರವರೆಗೆ ದೆಹಲಿ ಹೈಕೋರ್ಟ್ ಪ್ರಕರಣವನ್ನು ರದ್ದುಗೊಳಿಸುವಂತೆ ಯಾದವ್ ಸಲ್ಲಿಸಿರುವ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಳ್ಳುವವರೆಗೆ, ಪ್ರಕರಣದಲ್ಲಿ ವಿಚಾರಣಾ ನ್ಯಾಯಾಲಯ ನಡೆಸುತ್ತಿರುವ ವಿಚಾರಣೆ ಮುಂದೂಡುವಂತೆ ಯಾದವ್ ಕೋರಿದ್ದರು.
ಲಾಲು ಅವರ ಪರವಾಗಿ ಹಿರಿಯ ನ್ಯಾಯವಾದಿ ಕಪಿಲ್ ಸಿಬಲ್, ಸಿಬಿಐ ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್ ವಿ ರಾಜು ವಾದ ಮಂಡಿಸಿದರು.
ಲಾಲುಪ್ರಸಾದ್ ಅವರು 2004ರಿಂದ 2009ರವರೆಗೆ ಕೇಂದ್ರ ರೈಲ್ವೆ ಸಚಿವರಾಗಿದ್ದಾಗ ತಮ್ಮ ಕುಟುಂಬದ ಹೆಸರಿಗೆ ಭೂಮಿ ವರ್ಗಾಯಿಸಿಕೊಂಡು ರೈಲ್ವೆಯಲ್ಲಿ ನೇಮಕಾತಿ ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು. ಆಗಿನ ರೈಲ್ವೆ ನೇಮಕಾತಿ ಭಾರತೀಯ ರೈಲ್ವೆಯ ಮಾನದಂಡಗಳಿಗೆ ಅನುಗುಣವಾಗಿಲ್ಲ ಎಂಬುದು ಸಿಬಿಐ ವಾದವಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯ ಮಾರ್ಚ್ 2023ರಲ್ಲಿ ಲಾಲು ಯಾದವ್, ಅವರ ಪತ್ನಿ ರಾಬ್ಡಿ ದೇವಿ ಹಾಗೂ ಮಗಳು ಮಿಸಾ ಭಾರತಿ ಅವರಿಗೆ ಜಾಮೀನು ನೀಡಿತ್ತು.