ಮಹಾಕುಂಭ ಕಾಲ್ತುಳಿತ ದುರಂತ: ಪಿಐಎಲ್ ತಿರಸ್ಕರಿಸಿದ ಸುಪ್ರೀಂ; ಅಲಾಹಾಬಾದ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲು ಸೂಚನೆ
ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ಮಹಾಕುಂಭ ಮೇಳದ ವೇಳೆ ಕಾಲ್ತುಳಿತ ದುರಂತ ಸಂಭವಿಸಿರುವ ಹಿನ್ನೆಲೆಯಲ್ಲಿ ಯಾತ್ರಾರ್ಥಿಗಳ ಸುರಕ್ಷತೆಗಾಗಿ ಕ್ರಮ ಕೈಗೊಳ್ಳುವಂತೆ ಮತ್ತು ಮಾರ್ಗಸೂಚಿ ರೂಪಿಸುವಂತೆ ಎಲ್ಲಾ ರಾಜ್ಯ ಸರ್ಕಾರಗಳಿಗೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ಸುಪ್ರೀಂ ಕೋರ್ಟ್ ಸೋಮವಾರ ತಿರಸ್ಕರಿಸಿದೆ.
ಮಹಾ ಕುಂಭಮೇಳ ನಡೆಯುತ್ತಿರುವ ಪ್ರಯಾಗ್‌ರಾಜ್‌ನ ಸಂಗಮ ಪ್ರದೇಶದಲ್ಲಿ ಜನವರಿ 29ರ ಬೆಳಿಗ್ಗೆ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ 30 ಮಂದಿ ಸಾವನ್ನಪ್ಪಿ 60 ಕ್ಕೂ ಹೆಚ್ಚು ಜನ ಗಾಯಗೊಂಡಿದ್ದರು. ಈ ಹಿನ್ನೆಲೆಯಲ್ಲಿ ವಕೀಲ ವಿಶಾಲ್ ತಿವಾರಿ ಅವರು ಅರ್ಜಿ ಸಲ್ಲಿಸಿದ್ದರು.
ಕಾಲ್ತುಳಿತ ದುರಂತ ದುರದೃಷ್ಟಕರ ಮತ್ತು ಕಳವಳಕಾರಿ ಸಂಗತಿ. ಆದರೆ ಅರ್ಜಿದಾರರು ಅಲಾಹಾಬಾದ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಬಹುದು ಎಂದು ಸಿಜೆಐ ಸಂಜೀವ್ ಖನ್ನಾ, ನ್ಯಾಯಮೂರ್ತಿಗಳಾದ ಪಿವಿ ಸಂಜಯ್ ಕುಮಾರ್ ಅವರಿದ್ದ ಪೀಠ ತಿಳಿಸಿತು.
ಉತ್ತರ ಪ್ರದೇಶ ಸರ್ಕಾರದ ಪರ ವಾದ ಮಂಡಿಸಿದ ಹಿರಿಯ ವಕೀಲ ಮುಕುಲ್ ರೋಹಟ್ಗಿ, ಘಟನೆಯ ಕುರಿತು ತನಿಖೆ ನಡೆಸಲು ಈಗಾಗಲೇ ನ್ಯಾಯಾಂಗ ಆಯೋಗ ರಚಿಸಲಾಗಿದೆ ಎಂದರು.
ಪ್ರಯಾಗ್‌ರಾಜ್‌ನಲ್ಲಿರುವ ತಮ್ಮ ರಾಜ್ಯಗಳ ಸೇವಾ ಕೇಂದ್ರಗಳಲ್ಲಿ ಸುರಕ್ಷತಾ ಕ್ರಮ ಮತ್ತು ಮಾರ್ಗಸೂಚಿಗಳ ಬಗ್ಗೆ ಮೂಲಭೂತ ಮಾಹಿತಿ ಒದಗಿಸುವಂತೆ ಎಲ್ಲಾ ರಾಜ್ಯ ಸರ್ಕಾರಗಳಿಗೆ ನಿರ್ದೇಶನ ನೀಡಬೇಕು. ಬೇರೆ ರಾಜ್ಯಗಳ ಜನ ಸಮಸ್ಯೆ ಎದುರಿಸದಂತೆ ಮತ್ತು ಸುಲಭವಾಗಿ ಸಹಾಯ ಪಡೆಯಲು ಅನುವಾಗುವ ನಿಟ್ಟಿನಲ್ಲಿ ಆಯಾ ರಾಜ್ಯಗಳ ಭಾಷೆಯಲ್ಲಿ ಪ್ರಕಟಣೆ, ನಿರ್ದೇಶನವುಳ್ಳ ಫಲಕ , ಇತ್ಯಾದಿಗಳನ್ನು ಅಳವಡಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿತ್ತು.
ಉತ್ತರ ಪ್ರದೇಶ ಸರ್ಕಾರದ ಸಮನ್ವಯದೊಂದಿಗೆ ಎಲ್ಲಾ ರಾಜ್ಯ ಸರ್ಕಾರಗಳು ವೈದ್ಯರು ಮತ್ತು ದಾದಿಯರನ್ನು ಒಳಗೊಂಡಿರುವ ತಮ್ಮದೇ ಆದ ಸಣ್ಣ ವೈದ್ಯಕೀಯ ತಂಡ ರಚಿಸಬೇಕು. ಇದರಿಂದ ವೈದ್ಯಕೀಯ ತುರ್ತು ಸಮಯದಲ್ಲಿ ಸಿಬ್ಬಂದಿ ಕೊರತೆ ಉಂಟಾಗುವುದಿಲ್ಲ. ಕಾಲ್ತುಳಿತಕ್ಕೆ ಕಾರಣವಾದ ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಕ್ರಮಕೈಗೊಳ್ಳಬೇಕು. ಘಟನೆಯ ಸ್ಥಿತಿಗತಿ ವರದಿ ಸಲ್ಲಿಸುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ನಿರ್ದೇಶನ ನೀಡಬೇಕು. ಜೊತೆಗೆ ಕಾಲ್ತುಳಿತಕ್ಕೆ ಕಾರಣವಾದ ವ್ಯಕ್ತಿಗಳು ಅಧಿಕಾರಿಗಳ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗುವಂತೆ ನಿರ್ದೇಶಿಸಬೇಕು ಎಂದು ಮನವಿ ಮಾಡಲಾಗಿತ್ತು.


