
ಮುಂಬರುವ ವಿಧಾನಸಭಾ ಚುನಾವಣೆಗೆ ಮುನ್ನ ಬಿಹಾರದಲ್ಲಿ ಮತದಾರರ ಪಟ್ಟಿಯನ್ನು ಭಾರೀ ಪ್ರಮಾಣದಲ್ಲಿ ಪರಿಷ್ಕರಿಸಲು ಭಾರತೀಯ ಚುನಾವಣಾ ಆಯೋಗ ಕೈಗೊಂಡ ನಿರ್ಧಾರ ಪ್ರಶ್ನಿಸಿ ಸಲ್ಲಿಸಲಾಗಿರುವ ವಿವಿಧ ಅರ್ಜಿಗಳ ವಿಚಾರಣೆಯನ್ನು ಜುಲೈ 10ರಂದು ನಡೆಸುವುದಾಗಿ ಸುಪ್ರೀಂ ಕೋರ್ಟ್ ಸೋಮವಾರ ಹೇಳಿದೆ.
ಪ್ರಕರಣವನ್ನು ತುರ್ತಾಗಿ ಆಲಿಸುವಂತೆ ಹಿರಿಯ ವಕೀಲ ಕಪಿಲ್ ಸಿಬಲ್ ಅವರು ನ್ಯಾಯಮೂರ್ತಿ ಸುಧಾಂಶು ಧುಲಿಯಾ ಮತ್ತು ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಅವರಿದ್ದ ರಜಾಕಾಲೀನ ಪೀಠದೆದುರು ಪ್ರಸ್ತಾಪಿಸಿದರು.
ಆಗ ಈ ಗುರುವಾರ ಅಂದರೆ ಜು.10 ರಂದು ವಿಚಾರಣೆ ನಡೆಸುವುದಾಗಿ ನ್ಯಾಯಾಲಯ ತಿಳಿಸಿತು. ಸಿಬಲ್ ಅವರೊಂದಿಗೆಗೆ ಹಿರಿಯ ವಕೀಲರಾದ ಡಾ. ಅಭಿಷೇಕ್ ಮನು ಸಿಂಘ್ವಿ , ಗೋಪಾಲ್ ಶಂಕರನಾರಾಯಣನ್ ಹಾಗೂ ಶಾದನ್ ಫರಾಸತ್ ಕೂಡ ಈ ವೇಳೆ ಹಾಜರಿದ್ದರು.
ಬಿಹಾರದ ಬಹುತೇಕ ಮತಾದಾರರು ತಾವು ಮತದಾರರ ಪಟ್ಟಿಯಲ್ಲಿ ಉಳಿಯಬೇಕು ಎನ್ನುವುದಾದರೆ ಪೌರತ್ವಕ್ಕೆ ಸಂಬಂಧಿಸಿದ ದಾಖಲೆಗಳನ್ನು ಒದಗಿಸಬೇಕಾಗುತ್ತದೆ ಎಂದು ಆಯೋಗ ಜೂನ್ 24ರಂದು ಆದೇಶ ಹೊರಡಿಸಿತ್ತು.
ಈ ಆದೇಶಕ್ಕೆ ಆಕ್ಷೇಪ ವ್ಯಕ್ತಪಡಿಸಿ ಸರ್ಕಾರೇತರ ಸಂಸ್ಥೆಯಾದ ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್, ಸಂಸದರಾದ ಮಹುವಾ ಮೊಯಿತ್ರಾ, ಮನೋಜ್ ಝಾ ಹಾಗೂ ಹೋರಾಟಗಾರ ಯೋಗೇಂದ್ರ ಯಾದವ್ ಅವರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.