ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಸಿಬಿಐ ತಮ್ಮನ್ನು ಬಂಧಿಸಿರುವುದನ್ನು ರದ್ದುಗೊಳಿಸಿ ಜಾಮೀನಿನ ಮೇಲೆ ಬಿಡುಗಡೆ ಮಾಡುವಂತೆ ಕೋರಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಬುಧವಾರ ಸಿಬಿಐ ಪ್ರತಿಕ್ರಿಯೆ ಕೇಳಿದೆ [ಅರವಿಂದ್ ಕೇಜ್ರಿವಾಲ್ ಮತ್ತು ಸಿಬಿಐ ನಡುವಣ ಪ್ರಕರಣ].
ಮಧ್ಯಂತರ ಜಾಮೀನು ನೀಡಲು ನಿರಾಕರಿಸಿದ ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಉಜ್ಜಲ್ ಭುಯಾನ್ ಅವರಿದ್ದ ಪೀಠ ಆಗಸ್ಟ್ 23ಕ್ಕೆ ವಿಚಾರಣೆ ಮುಂದೂಡಿತು.
ಮುಂದಿನವಾರವೇ ಪ್ರಕರಣದ ವಿಚಾರಣೆ ನಡೆಸುವಂತೆ ಕೇಜ್ರಿವಾಲ್ ಪರ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿಗೆ ಸ್ಪಂದಿಸಿದ ನ್ಯಾಯಾಲಯ ಆಗಸ್ಟ್ 23ಕ್ಕೆ ಪ್ರಕರಣ ಪಟ್ಟಿ ಮಾಡುವಂತೆ ಸೂಚಿಸಿತು.
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಬಂಧನ ರದ್ದುಗೊಳಿಸಲು ಆಗಸ್ಟ್ 5 ರಂದು ನಿರಾಕರಿಸಿದ್ದ ದೆಹಲಿ ಹೈಕೋರ್ಟ್ ಜಾಮೀನಿಗಾಗಿ ವಿಚಾರಣಾ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸುವಂತೆ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ಕೇಜ್ರಿವಾಲ್ ಸುಪ್ರೀಂ ಕೋರ್ಟ್ ಕದ ತಟ್ಟಿದ್ದರು.
ಇ ಡಿ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಅವರಿಗೆ ಜಾಮೀನು ನೀಡಿದ್ದರೂ ಸಿಬಿಐ ಪ್ರಕರಣದಲ್ಲಿ ಇನ್ನೂ ಜಾಮೀನು ದೊರೆಯದೆ ಇರುವುದರಿಂದ ಅವರು ತಿಹಾರ್ ಜೈಲಿನಲ್ಲಿದ್ದಾರೆ.
ತಮ್ಮ ಬಂಧನ ರದ್ದುಗೊಳಿಸುವಂತೆ ಮತ್ತು ಜಾಮೀನು ನೀಡುವಂತೆ ಕೋರಿ ಕೇಜ್ರಿವಾಲ್ ಈ ಹಿಂದೆ ಹೈಕೋರ್ಟ್‌ಗೆ ಎರಡು ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಿದ್ದರು. ಬಂಧನ ರದ್ದತಿ ಮನವಿಯನ್ನು ಆಗಸ್ಟ್ 5 ರಂದು ತಿರಸ್ಕರಿಸಿದ್ದ ಹೈಕೋರ್ಟ್ ನ್ಯಾಯಮೂರ್ತಿ ನೀನಾ ಬನ್ಸಾಲ್ ಕೃಷ್ಣ ಕೇಜ್ರಿವಾಲ್ ಅವರನ್ನು ಬಂಧಿಸಲು ಸಾಕಷ್ಟು ಆಧಾರಗಳಿವೆ ಎಂದಿದ್ದರು.
ಜಾಮೀನಿಗೆ ಸಂಬಂಧಿಸಿದಂತೆ ಅರ್ಹತೆಯ ಆಧಾರದ ಮೇಲೆ ಅರ್ಜಿಯನ್ನು ನಿರ್ಧರಿಸಲು ನಿರಾಕರಿಸಿದ್ದ ಹೈಕೋರ್ಟ್ ವಿಚಾರಣಾ ನ್ಯಾಯಾಲಯಕ್ಕೆ ತೆರಳುವಂತೆ ತಿಳಿಸಿತ್ತು. ಕೇಜ್ರಿವಾಲ್ ಜಾಮೀನು ಕೋರಿ ನೇರವಾಗಿ ಹೈಕೋರ್ಟ್ ಮೊರೆ ಹೋಗಿದ್ದರು. ಈ ಎರಡೂ ಅಂಶಗಳನ್ನು ಕೇಜ್ರಿವಾಲ್ ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು.
ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಎಎಪಿ ನಾಯಕ ಹಾಗೂ ದೆಹಲಿಯ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ಸುಪ್ರೀಂ ಕೋರ್ಟ್ ಇತ್ತೀಚೆಗೆ ಜಾಮೀನು ನೀಡಿತ್ತು.
ಕ್ರಿಮಿನಲ್ ಪ್ರಕರಣಗಳಲ್ಲಿ ಹೈಕೋರ್ಟ್‌ಗಳು ಮತ್ತು ವಿಚಾರಣಾ ನ್ಯಾಯಾಲಯಗಳು ಜಾಮೀನು ನೀಡುವ ಬದಲು ಜಾಮೀನು ನಿರಾಕರಿಸುವ ವಾಡಿಕೆ ಅನುಸರಿಸುವ ಮೂಲಕ ಸುರಕ್ಷಿತ ಆಟ ಆಡುತ್ತಿರುವಂತೆ ತೋರುತ್ತದೆ ಎಂದು ಸುಪ್ರೀಂ ಕೋರ್ಟ್ ಟೀಕಿಸಿತ್ತು.