ಕೇಂದ್ರಾಡಳಿತ ಪ್ರದೇಶವಾಗಿರುವ ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧಾನ ಸಭಾ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಕ್ಷೇತ್ರ ಪುನರ್ ವಿಂಗಡಣೆ ಕುರಿತ ಅಧಿಸೂಚನೆ ಪ್ರಶ್ನಿಸಿರುವ ಮನವಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಶುಕ್ರವಾರ ಕೇಂದ್ರ ಸರ್ಕಾರಕ್ಕೆ ಅಭಿಪ್ರಾಯ ತಿಳಿಸಲು ಆದೇಶಿಸಿದೆ [ಹಾಜಿ ಅಬ್ದುಲ್ ಘನಿ ಖಾನ್ ಮತ್ತು ಇತರರು ಹಾಗೂ ಭಾರತ ಸರ್ಕಾರ ಮತ್ತು ಇತರರು].
ಕೇಂದ್ರಾಡಳಿತ ಪ್ರದೇಶದಲ್ಲಿನ ವಿಧಾನಸಭಾ ಕ್ಷೇತ್ರಗಳ ಸಂಖ್ಯೆಯನ್ನು 107 ರಿಂದ 114ಕ್ಕೆ ಏರಿಕೆ ಮಾಡಿರುವುದು ಸಂವಿಧಾನದ 81, 82, 170, 330 ಮತ್ತು 332ನೇ ವಿಧಿ ಹಾಗೂ ಜಮ್ಮು ಮತ್ತು ಕಾಶ್ಮೀರ ಪುನರ್ ವಿಂಗಡಣಾ ಕಾಯಿದೆ 2019ರ ಸೆಕ್ಷನ್ 63ಕ್ಕೆ ವಿರುದ್ಧವಾಗಿದೆ ಎಂದು ಶ್ರೀನಗರದ ನಿವಾಸಿಗಳಾದ ಹಾಜಿ ಅಬ್ದುಲ್ ಘನಿ ಖಾನ್ ಮತ್ತು ಡಾ. ಮೊಹಮ್ಮದ್ ಆಯೂಬ್ ಮಟ್ಟೂ ಅವರು ಸಲ್ಲಿಸಿರುವ ಮನವಿಯ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್ ಮತ್ತು ಎಂ ಎಂ ಸುಂದರೇಶ್ ಅವರ ನೇತೃತ್ವದ ವಿಭಾಗೀಯ ಪೀಠವು ವಿಚಾರಣೆ ನಡೆಸಿತು.
ಸಂವಿಧಾನದ 370ನೇ ವಿಧಿ ರದ್ದುಪಡಿಸಿದ ಕುರಿತು ಮನವಿಯಲ್ಲಿ ಉಲ್ಲೇಖಿಸಿರುವ ವಿಚಾರಕ್ಕೆ ಹೋಗುವುದಿಲ್ಲ ಎಂದು ಸ್ಪಷ್ಟಪಡಿಸಿರುವ ಪೀಠವು ಆಕ್ಷೇಪಣೆ ಸಲ್ಲಿಸಲು ಪ್ರತಿವಾದಿಗಳಿಗೆ ನಿರ್ದೇಶಿಸಿದೆ.
“ಸಂವಿಧಾನದ 370ನೇ ವಿಧಿ ರದ್ದುಪಡಿಸಿರುವುದನ್ನು ನೀವು ಪ್ರಶ್ನಿಸುತ್ತಿದ್ದೀರಾ? ಇಲ್ಲ ಎಂದು ಹೇಳಿ? ನೀವು ಏನನ್ನು ಪ್ರಶ್ನೆ ಮಾಡುತ್ತಿದ್ದೀರಿ. ನ್ಯಾಯಾಲಯದ ವಿಚಾರಣೆಗೆ ಒಳಪಟ್ಟಿರುವ (370ನೇ ವಿಧಿ ರದ್ದತಿ ವಿಚಾರ) ಪ್ರಕರಣಗಳ ಕುರಿತ ಅರ್ಹತೆಯ ವಿಚಾರಕ್ಕೆ ಸಂಬಂಧಿಸಿದಂತೆ ನಾವು ಸಿಲುಕ ಬಯಸುವುದಿಲ್ಲ” ಎಂದು ನ್ಯಾಯಮೂರ್ತಿ ಕೌಲ್ ಹೇಳಿದರು.
ಜಮ್ಮು ಮತ್ತು ಕಾಶ್ಮೀರದಲ್ಲಿ ಕ್ಷೇತ್ರ ಪುನರ್ ವಿಂಗಡಣೆ ನಡೆಸಲು ಕ್ಷೇತ್ರ ಪುನರ್ ವಿಂಗಡಣಾ ಆಯೋಗ ರಚಿಸಿರುವುದು ಸಂವಿಧಾನದ 14ನೇ ವಿಧಿಯ ಉಲ್ಲಂಘನೆಯಾಗಿದೆ ಎಂದು ಆದೇಶಿಸಬೇಕು ಎಂದು ಮನವಿಯಲ್ಲಿ ಕೋರಲಾಗಿದೆ.
ಕ್ಷೇತ್ರ ಪುನರ್ ವಿಂಗಡಣಾ ಕಾಯಿದೆಯ ಸೆಕ್ಷನ್ 3ರ ಪ್ರಕಾರ ಪುನರ್ ವಿಂಗಡಣಾ ಆಯೋಗ ರಚಿಸುವ ಅಧಿಕಾರ ಕೇಂದ್ರ ಸರ್ಕಾರಕ್ಕೆ ಇಲ್ಲ. ಸಂಸದೀಯ ಮತ್ತು ವಿಧಾನ ಸಭಾ ಕ್ಷೇತ್ರಗಳ ಪುನರ್ ವಿಂಗಡಣಾ ಆದೇಶ 2008ರ ಪ್ರಕಾರ ಚುನಾವಣಾ ಆಯೋಗವು ಮಾತ್ರ ಕ್ಷೇತ್ರ ಪುನರ್ ವಿಂಗಡಣೆ ಮಾಡಬಹುದಾಗಿದೆ ಎಂದು ವಾದಿಸಲಾಗಿದೆ.