

ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಮಾಜಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ ಒಂಭತ್ತು ಅಪರಾಧಿಗಳಿಗೆ ವಿಧಿಸಲಾಗಿದ್ದ ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸಿ ಜಾಮೀನು ನೀಡಿದ್ದ ಕರ್ನಾಟಕ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ಬುಧವಾರ ರದ್ದುಗೊಳಿಸಿದೆ.
ನ್ಯಾಯಮೂರ್ತಿಗಳಾದ ಪ್ರಶಾಂತ್ ಕುಮಾರ್ ಮಿಶ್ರಾ ಮತ್ತು ಶ್ರೀ ಚಂದ್ರಶೇಖರ್ ಅವರಿದ್ದ ವಿಭಾಗೀಯ ಪೀಠವು ಹೈಕೋರ್ಟ್ ಆದೇಶವನ್ನು ಬದಿಗೆ ಸರಿಸಿ, ವಿನಯ್ ಕುಲಕರ್ಣಿ ಸೇರಿದಂತೆ ಅಪರಾಧಿಗಳಿಗೆ ನೀಡಲಾಗಿದ್ದ ಜಾಮೀನನ್ನು ರದ್ದುಗೊಳಿಸಿದೆ.
ಅಲ್ಲದೆ, ಅಪರಾಧಿಗಳು ಎರಡು ವಾರಗಳ ಒಳಗಾಗಿ ಸಕ್ಷಮ ನ್ಯಾಯಾಲಯದ ಮುಂದೆ ಶರಣಾಗುವಂತೆ ಆದೇಶಿಸಿದೆ.
"ಈ ಕ್ರಿಮಿನಲ್ ಮೇಲ್ಮನವಿಯಲ್ಲಿ ಪ್ರಶ್ನಿಸಲಾಗಿರುವ ಆದೇಶಗಳನ್ನು ರದ್ದುಗೊಳಿಸಲಾಗಿದೆ. ಅಪರಾಧಿ ಪ್ರತಿವಾದಿಗಳು ಸಲ್ಲಿಸಿರುವ ಜಾಮೀನು ಬಾಂಡ್ಗಳನ್ನು ರದ್ದುಗೊಳಿಸಲಾಗಿದ್ದು, ಅವರು ಎರಡು ವಾರಗಳ ಒಳಗಾಗಿ ಸಕ್ಷಮ ನ್ಯಾಯಾಲಯದ ಮುಂದೆ ಶರಣಾಗಬೇಕು" ಎಂದು ಪೀಠ ಆದೇಶಿಸಿದೆ.
ಇದೇ ವೇಳೆ, ವಿಚಾರಣಾ ನ್ಯಾಯಾಲಯದ ಶಿಕ್ಷೆಯ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿರುವ ಮೇಲ್ಮನವಿಗಳನ್ನು ಕರ್ನಾಟಕ ಹೈಕೋರ್ಟ್ ವಿಚಾರಣೆ ನಡೆಸಲಿದೆ.
ಪ್ರಕರಣದ ಹಿನ್ನೆಲೆ: ಬಿಜೆಪಿ ಜಿಲ್ಲಾ ಪಂಚಾಯಿತಿ ಸದಸ್ಯರಾಗಿದ್ದ ಯೋಗೇಶ್ ಗೌಡ ಅವರನ್ನು 2016ರ ಜೂನ್ನಲ್ಲಿ ಧಾರವಾಡದ ತಮ್ಮದೇ ಜಿಮ್ನಲ್ಲಿ ಹತ್ಯೆ ಮಾಡಲಾಗಿತ್ತು. ಆರಂಭದಲ್ಲಿ ಸ್ಥಳೀಯ ಪೊಲೀಸರು ತನಿಖೆ ನಡೆಸಿದ್ದ ಪ್ರಕರಣವನ್ನು ಬಳಿಕ ಸಿಬಿಐಗೆ ವರ್ಗಾಯಿಸಲಾಗಿತ್ತು.
ರಾಜಕೀಯ ದ್ವೇಷವೇ ಕೊಲೆಗೆ ಕಾರಣ ಎಂದು ಆರೋಪಿಸಿ ಸಿಬಿಐ 2020ರಲ್ಲಿ ವಿನಯ್ ಕುಲಕರ್ಣಿ ಅವರನ್ನು ಬಂಧಿಸಿತ್ತು.
2021ರ ಆಗಸ್ಟ್ನಲ್ಲಿ ಸುಪ್ರೀಂ ಕೋರ್ಟ್ ಅವರಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. ಆದರೆ, ಪ್ರಕರಣದ ಸಾಕ್ಷಿಗಳ ಮೇಲೆ ಪ್ರಭಾವ ಬೀರಲು ಪ್ರಯತ್ನಿಸಿರುವುದಕ್ಕೆ ಮೇಲ್ನೋಟಕ್ಕೆ ಸಾಕಷ್ಟು ಆಧಾರಗಳಿವೆ ಎಂದು ಪರಿಗಣಿಸಿದ್ದ ಸುಪ್ರೀಂ ಕೋರ್ಟ್ 2025ರ ಜೂನ್ನಲ್ಲಿ ಅವರ ಜಾಮೀನನ್ನು ರದ್ದುಗೊಳಿಸಿತ್ತು.
2026ರ ಏಪ್ರಿಲ್ 15ರಂದು ಬೆಂಗಳೂರಿನ ವಿಶೇಷ ನ್ಯಾಯಾಲಯವು ವಿನಯ್ ಕುಲಕರ್ಣಿ ಸೇರಿದಂತೆ ಇತರರನ್ನು ಕೊಲೆ ಮತ್ತು ಕ್ರಿಮಿನಲ್ ಪಿತೂರಿ ಆರೋಪಗಳಲ್ಲಿ ದೋಷಿಗಳೆಂದು ತೀರ್ಪು ನೀಡಿತ್ತು. ಏಪ್ರಿಲ್ 17ರಂದು ಕುಲಕರ್ಣಿ ಸೇರಿದಂತೆ 16 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು.
ಈ ತೀರ್ಪನ್ನು ಪ್ರಶ್ನಿಸಿ ವಿನಯ್ ಕುಲಕರ್ಣಿ ಕರ್ನಾಟಕ ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದರು. ಜುಲೈ 31ರಂದು ಹೈಕೋರ್ಟ್ ಅವರ ಅಪರಾಧ ನಿರ್ಣಯವನ್ನು ಅಮಾನತುಗೊಳಿಸಿ, ಜೀವಾವಧಿ ಶಿಕ್ಷೆಯನ್ನು ಅಮಾನತಿನಲ್ಲಿಟ್ಟು ಜಾಮೀನು ಮಂಜೂರು ಮಾಡಿತ್ತು. ಇದೇ ಪ್ರಕರಣದ ಇತರ ಅಪರಾಧಿಗಳ ಶಿಕ್ಷೆಯನ್ನೂ ಹೈಕೋರ್ಟ್ ಅಮಾನತುಗೊಳಿಸಿತ್ತು.
ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು.
ಅಕ್ಟೋಬರ್ 9ರಂದು ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರದ ಅರ್ಜಿ ಸೇರಿದಂತೆ ಇತರ ಅಪರಾಧಿಗಳಿಗೆ ಶಿಕ್ಷೆ ಅಮಾನತುಗೊಳಿಸಿ ಜಾಮೀನು ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳ ಕುರಿತು ನೋಟಿಸ್ ಜಾರಿಗೊಳಿಸಿತ್ತು.
ಇದೀಗ ಸುಪ್ರೀಂ ಕೋರ್ಟ್ ಹೈಕೋರ್ಟ್ನ ಆದೇಶವನ್ನು ರದ್ದುಗೊಳಿಸಿದ್ದು, ವಿನಯ್ ಕುಲಕರ್ಣಿ ಸೇರಿದಂತೆ ಸಂಬಂಧಪಟ್ಟ ಅಪರಾಧಿಗಳು ಮತ್ತೆ ಜೈಲು ಸೇರಬೇಕಾಗಿದೆ.