ಪ್ರತಿಭಟನಾ ಮೆರವಣಿಗೆ: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಪ್ರಕರಣದ ವಿಚಾರಣೆಗೆ ಸುಪ್ರೀಂ ಕೋರ್ಟ್ ತಡೆ

ಕ್ರಿಮಿನಲ್ ಉದ್ದೇಶವಿಲ್ಲದೆ ಶಾಂತಿಯುತವಾಗಿ ನಡೆಸುವ ರಾಜಕೀಯ ಮೆರವಣಿಗೆಯನ್ನು ದಂಡದ ನಿಬಂಧನೆಗಳಿಂದ ಹತ್ತಿಕ್ಕಲು ಸಾಧ್ಯವಿಲ್ಲ ಎಂದು ಸರ್ವೋಚ್ಚ ನ್ಯಾಯಾಲಯದ ಮುಂದೆ ವಾದ.
ಸರ್ವೋಚ್ಚ ನ್ಯಾಯಾಲಯ
ಸರ್ವೋಚ್ಚ ನ್ಯಾಯಾಲಯ

ಪ್ರತಿಭಟನೆ ನಡೆಸಿದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರಾದ ರಾಮಲಿಂಗಾ ರೆಡ್ಡಿಎಂ ಬಿ ಪಾಟೀಲ್ ಹಾಗೂ ಎಐಸಿಸಿ ನಾಯಕ ರಣದೀಪ್ ಸಿಂಗ್ ಸುರ್ಜೇವಾಲಾ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣದ ವಿಚಾರಣೆಗೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. 

ವಿಚಾರಣೆಯನ್ನು ರದ್ದುಗೊಳಿಸಲು ನಿರಾಕರಿಸಿದ ಕರ್ನಾಟಕ ಹೈಕೋರ್ಟ್ ಆದೇಶದ ವಿರುದ್ಧ ಸಿದ್ದರಾಮಯ್ಯ ಹಾಗೂ ಇತರರು ಸಲ್ಲಿಸಿದ್ದ ಮನವಿಗೆ ಸಂಬಂಧಿಸಿದಂತೆ ನ್ಯಾಯಮೂರ್ತಿಗಳಾದ ಹೃಷಿಕೇಶ್ ರಾಯ್ ಮತ್ತು ಪ್ರಶಾಂತ್ ಕುಮಾರ್ ಮಿಶ್ರಾ ಅವರಿದ್ದ ಪೀಠ ಕರ್ನಾಟಕ ಸರ್ಕಾರ ಹಾಗೂ ಇತರ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿದೆ.

ನೋಟಿಸ್‌ಗೆ 6 ವಾರಗಳಲ್ಲಿ ಪ್ರತಿಕ್ರಿಯಿಸುವಂತೆ ಸೂಚಿಸಿರುವ ನ್ಯಾಯಾಲಯ ಮುಂದಿನ ಆದೇಶದವರೆಗೆ, ಅರ್ಜಿದಾರರ ವಿರುದ್ಧ ಕರ್ನಾಟಕ ಹೈಕೋರ್ಟ್‌ ನಡೆಸುತ್ತಿದ್ದ ವಿಚಾರಣೆಗೆ ತಡೆ ನೀಡಲಾಗಿದೆ ಎಂದಿತು.

ನ್ಯಾಯಮೂರ್ತಿಗಳಾದ ಹೃಷಿಕೇಶ್ ರಾಯ್‌, ಪ್ರಶಾಂತ್ ಕುಮಾರ್ ಮಿಶ್ರಾ
ನ್ಯಾಯಮೂರ್ತಿಗಳಾದ ಹೃಷಿಕೇಶ್ ರಾಯ್‌, ಪ್ರಶಾಂತ್ ಕುಮಾರ್ ಮಿಶ್ರಾ

ವಿಪಕ್ಷ ನಾಯಕರಾಗಿದ್ದಾಗ 2022ರಲ್ಲಿ ನಡೆದ ಪ್ರತಿಭಟನಾ ಮೆರವಣಿಗೆಗೆ ಸಂಬಂಧಿಸಿದಂತೆ ತಮ್ಮ ವಿರುದ್ಧ ದಾಖಲಾದ ಪ್ರಕರಣ ರದ್ದುಗೊಳಿಸಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದ್ದನ್ನು ಪ್ರಶ್ನಿಸಿ ಮುಖ್ಯಮಂತ್ರಿ, ಇತರ ಸಚಿವರು ಹಾಗೂ ಹಿರಿಯ ಕಾಂಗ್ರೆಸ್ ನಾಯಕರು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು.

ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಹಿನ್ನೆಲೆಯಲ್ಲಿ ಆಗ ಗ್ರಾಮೀಣಾಭಿವೃದ್ಧಿ ಸಚಿವರಾಗಿದ್ದ ಕೆ ಎಸ್‌ ಈಶ್ವರಪ್ಪ ಅವರ ರಾಜೀನಾಮೆಗೆ ಆಗ್ರಹಿಸಿ 2022ರ ಏಪ್ರಿಲ್ 14ರಂದು ಬೆಂಗಳೂರಿನ ರೇಸ್ ವ್ಯೂ ಹೋಟೆಲ್ ಬಳಿ ಕಾಂಗ್ರೆಸ್‌ ಪಕ್ಷದ ನಾಯಕರು ಪ್ರತಿಭಟನೆ ನಡೆಸಿದ್ದರು. ಈ ವೇಳೆ ಸಾರ್ವಜನಿಕರ ಮುಕ್ತ ಸಂಚಾರಕ್ಕೆ ಅಡ್ಡಿಪಡಿಸಿದ, ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟು ಮಾಡಿದ ಆರೋಪದ ಮೇಲೆ ನಗರದ ಹೈಗ್ರೌಂಡ್ಸ್‌ ಪೊಲೀಸರು ಅರ್ಜಿದಾರರ ವಿರುದ್ಧ ಐಪಿಸಿ ಸೆಕ್ಷನ್‌ 143 (ಕಾನೂನುಬಾಹಿರವಾಗಿ ಸಮಾವೇಶಗೊಳ್ಳುವುದು), ಕರ್ನಾಟಕ ಪೊಲೀಸ್‌ ಕಾಯಿದೆ ಸೆಕ್ಷನ್‌ 103ರ ಅಡಿ ಪ್ರಕರಣ ದಾಖಲಿಸಿದ್ದರು.

ಈ ಸಂಬಂಧ 42ನೇ ಎಸಿಎಂಎಂ ನ್ಯಾಯಾಲಯ (ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ) ಜಾರಿ ಮಾಡಿದ್ದ ಜಾಮೀನು ರಹಿತ ಬಂಧನ ವಾರೆಂಟ್‌ ಹಾಗೂ ವಿಶೇಷ ನ್ಯಾಯಾಲಯದ ವಿಚಾರಣಾ ಪ್ರಕ್ರಿಯೆ ರದ್ದುಪಡಿಸುವಂತೆ ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರಾದ ರಾಮಲಿಂಗಾರೆಡ್ಡಿ, ಎಂ ಬಿ ಪಾಟೀಲ ಮತ್ತು ಎಎಐಸಿಸಿ ಮುಖಂಡ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಅರ್ಜಿ ಸಲ್ಲಿಸಿದ್ದರು. ಇದನ್ನು ಮನ್ನಿಸದ ನ್ಯಾ. ಕೃಷ್ಣ ಎಸ್‌. ದೀಕ್ಷಿತ್‌ ಅವರಿದ್ದ ಏಕಸದಸ್ಯ ಪೀಠ ಅರ್ಜಿಗಳನ್ನು ವಜಾ ಮಾಡಿತ್ತು. ಈ ಹಿನ್ನೆಲೆಯಲ್ಲಿ ಸರ್ವೋಚ್ಚ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲಾಗಿತ್ತು.

ಸುಪ್ರೀಂ ಕೋರ್ಟ್‌ನಲ್ಲಿ ಇಂದು ನಡೆದ ವಿಚಾರಣೆ ವೇಳೆ ರಾಜಕೀಯ ನಾಯಕರ ಪರವಾಗಿ ಹಿರಿಯ ವಕೀಲರಾದ ಕಪಿಲ್ ಸಿಬಲ್, ಅಭಿಷೇಕ್ ಮನು ಸಿಂಘ್ವಿ, ದೇವದತ್ ಕಾಮತ್ ಮತ್ತು ಸಿದ್ಧಾರ್ಥ್ ಲೂತ್ರಾ ಅವರು ಹಾಜರಿದ್ದರು.

ಪ್ರತಿಭಟನೆಯ ಹಕ್ಕನ್ನು ಚಲಾಯಿಸಿದ್ದಕ್ಕಾಗಿ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದ್ದು ಇದು ಸಂವಿಧಾನದ 19 (1) ನೇ ವಿಧಿಯ ಅಡಿಯಲ್ಲಿ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕಿಗೆ ಸಂಪೂರ್ಣ ವಿರುದ್ಧವಾಗಿದೆ ಎಂದು ಸಿಂಘ್ವಿ ವಾದಿಸಿದರು.

ಇದಕ್ಕೆ ಪ್ರತಿಯಾಗಿ ನ್ಯಾಯಮೂರ್ತಿ ಮಿಶ್ರಾ ಅವರು, ಮೂಲಭೂತ ಹಕ್ಕುಗಳ ಅಡಿಯಲ್ಲಿ ಇರುವ ಸಮಂಜಸವಾದ ನಿರ್ಬಂಧಗಳನ್ನು ಗಮನದಲ್ಲಿರಿಸಿಕೊಂಡು ಈ ಪ್ರಕರಣದಲ್ಲಿ ಅನ್ವಯಿಸಲಾದ ಅಪರಾಧಗಳನ್ನು ಕಾನೂನು ಪುಸ್ತಕಗಳಲ್ಲಿ ಅಳವಡಿಸಲಾಗಿದೆ ಎಂದರು.

"ಇಲ್ಲದೇ ಹೋದರೆ ರಸ್ತೆಗಳಲ್ಲಿ ಬೇರೆ ಯಾರೇ ತೊಂದರೆ ಉಂಟು ಮಾಡಿದರೂ , ನಾವೇ (ನ್ಯಾಯಾಲಯವೇ) ಅದನ್ನು ರದ್ದುಗೊಳಿಸಬೇಕಾಗುತ್ತದೆ. ನಿಮ್ಮ ವಾದ ರಾಜಕಾರಣಿಗಳು ಮಾಡಿದರೆ ಮಾತ್ರ ನಾವು ಪ್ರಕರಣವನ್ನು ರದ್ದುಗೊಳಿಸಬೇಕು ಎನ್ನುವಂತಿದೆ" ಎಂದು ನ್ಯಾಯಾಲಯ ಆಕ್ಷೇಪಿಸಿತು.

ಪ್ರತಿಭಟನಾ ಮೆರವಣಿಗೆಗೆ ಅನುಮತಿ ಕೋರಲಾಗಿತ್ತೇ ಎಂದು ನ್ಯಾಯಮೂರ್ತಿ ಮಿಶ್ರಾ ಪ್ರಶ್ನಿಸಿದರು. "ನೀವು ಬೆಳ್ಳಂಬೆಳಿಗೆ ಹೋಗಿ ಸಾವಿರಾರು ಜನರೊಟ್ಟಿಗೆ ಸೇರಿ ನಾವು ಪ್ರತಿಭಟಿಸುತ್ತಿರುವುದರಿಂದ ನಮಗೇನೂ ಆಗಬಾರದು ಎಂದು ಹೇಳಲಾಗದು" ಎಂದರು.

ಇದಕ್ಕೆ ಪ್ರತಿಕ್ರಿಯಿಸಿದ ಸಿಬಲ್‌ ಮೂಲಭೂತ ಹಕ್ಕನ್ನು ನಿರಾಕರಿಸಲು ಕಾನೂನು ಸುವ್ಯವಸ್ಥೆ ವಿಚಾರ ಆಧಾರವಾಗಬಾರದು ಎಂದರು. ಅರ್ಜಿದಾರರಿಗೆ ಸಾಂವಿಧಾನಿಕ ಹಕ್ಕು ಇದೆ, ಮೂಲಭೂತ ಹಕ್ಕು ಇದೆ ಎಂಬುದಾಗಿ ಪ್ರತಿಪಾದಿಸಿದರು.

ವಾದ ದಾಖಲಿಸಿಕೊಂಡ ಸುಪ್ರೀಂ ಕೋರ್ಟ್‌, ವಿಚಾರಣಾ ನ್ಯಾಯಾಲಯದ ಎದುರು ನಡೆಯುತ್ತಿದ್ದ ವಿಚಾರಣೆಗೆ ತಡೆ ನೀಡಿತು.

ಪ್ರಕರಣದಲ್ಲಿ ಐಪಿಸಿ ಸೆಕ್ಷನ್‌ 141ನ್ನು (ಕಾನೂನುಬಾಹಿರ ಸಭೆ) ಉಲ್ಲಂಘಿಸಿಲ್ಲ ಎಂದು ಸಿದ್ದರಾಮಯ್ಯ ಅವರ ಮನವಿಯಲ್ಲಿ ತಿಳಿಸಲಾಗಿತ್ತು. "ಐದು ಅಥವಾ ಅದಕ್ಕಿಂತ ಹೆಚ್ಚು ಜನರ ಸಭೆ ಸಾಮಾನ್ಯ ಉದ್ದೇಶವನ್ನು ಹೊಂದಿದ್ದರೆ ಮಾತ್ರ ಕಾನೂನುಬಾಹಿರವಾಗುತ್ತದೆ. ಈ ಉದ್ದೇಶವು ಐಪಿಸಿಯ ಸೆಕ್ಷನ್ 141 ರಲ್ಲಿ ಒಂದರಿಂದ ಐದು ಎಂದು ಉಲ್ಲೇಖಿಸಲಾದ ವರ್ಗಗಳಲ್ಲಿ ಬರುತ್ತದೆ. ಸಭೆಯ ಸಾಮಾನ್ಯ ಉದ್ದೇಶವು ಸೆಕ್ಷನ್ 141 ರಲ್ಲಿ ನಿರ್ದಿಷ್ಟಪಡಿಸಿದ ಐದು ವಿಭಾಗಗಳಲ್ಲಿ ಯಾವುದರಲ್ಲೂ ಸೇರದೆ ಇರುವಾಗ, ಸದರಿ ಸಭೆಯನ್ನು ಕಾನೂನುಬಾಹಿರ ಸಭೆ ಎಂದು ಹೇಳಲಾಗುವುದಿಲ್ಲ" ಎಂದು ಮನವಿಯಲ್ಲಿ ತಿಳಿಸಲಾಗಿತ್ತು.

ಸಭೆಯಿಂದ ಹಿಂಸಾಚಾರ ಉಂಟಾಯಿತು ಎಂಬ ಆರೋಪಗಳಿಲ್ಲ ಎಂದು ಸಿದ್ದರಾಮಯ್ಯ ಪರ ವಕೀಲರು ವಾದಿಸಿದರು.

ಆತ್ಮಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದ ಸಚಿವರ (ಕೆ ಎಸ್‌ ಈಶ್ವರಪ್ಪ) ರಾಜೀನಾಮೆಗೆ ಒತ್ತಾಯಿಸಲು ಮಾತ್ರ ಸಭೆ ಸೇರಲಾಗಿತ್ತು. ಯಾವುದೇ ಕ್ರಿಮಿನಲ್ ಬಲ ಬಳಸುವ ಅಥವಾ ಪ್ರದರ್ಶಿಸುವ ಸಾಮಾನ್ಯ ಉದ್ದೇಶ ಸಿದ್ದರಾಮಯ್ಯ ಅಥವಾ ಪ್ರಕರಣದಲ್ಲಿ ಭಾಗಿಯಾಗಿದ್ದ ಇತರ ಅರ್ಜಿದಾರರಿಗೆ ಇರಲಿಲ್ಲ ಎಂದು ಮನವಿಯಲ್ಲಿ ತಿಳಿಸಲಾಗಿತ್ತು.

Related Stories

No stories found.
Kannada Bar & Bench
kannada.barandbench.com