ಕೋಲ್ಕತ್ತಾದ ಸರ್ಕಾರಿ ಸ್ವಾಮ್ಯದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ತರಬೇತಿ ಪಡೆಯುತ್ತಿದ್ದ 31 ವರ್ಷದ ಸ್ಥಾನಿಕ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಸುಪ್ರೀಂ ಕೋರ್ಟ್ ಶೀಘ್ರದಲ್ಲೇ ಸ್ವಯಂ ಪ್ರೇರಿತವಾಗಿ ವಿಚಾರಣೆ ನಡೆಸಲಿದೆ [ಆರ್ ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ತರಬೇತಿ ನಿರತ ಸ್ಥಾನಿಕ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಸ್ವಯಂ ಪ್ರೇರಿತ ವಿಚಾರಣೆ].
ಪ್ರಕರಣವನ್ನು ಆಗಸ್ಟ್ 20ರಂದು ಸಿಜೆಐ ಡಿ ವೈ ಚಂದ್ರಚೂಡ್ ನ್ಯಾಯಮೂರ್ತಿಗಳಾದ ಜೆ ಬಿ ಪರ್ದಿವಾಲಾ ಹಾಗೂ ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠ ವಿಚಾರಣೆ ನಡೆಸಲಿದೆ.
ಗಮನಾರ್ಹವಾಗಿ ಇದೇ ಪ್ರಕರಣದ ಸಂಬಂಧ ಕಲ್ಕತ್ತಾ ಹೈಕೋರ್ಟ್ ಈಗಾಗಲೇ ವಿಚಾರಣೆ ನಡೆಸುತ್ತಿದ್ದು ಅಪರಾಧ ನಡೆದ ಸ್ಥಳದಲ್ಲಿ ನವೀಕರಣ ಕಾಮಗಾರಿ ಕೈಗೆತ್ತಿಕೊಳ್ಳುವಂತಹ ತುರ್ತು ಇತ್ತೆ ಎಂದು ಅದು ಪ. ಬಂಗಾಳ ಸರ್ಕಾರವನ್ನು ಶುಕ್ರವಾರ ತರಾಟೆಗೆ ತೆಗೆದುಕೊಂಡಿತ್ತು.
ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಸಾಕ್ಷ್ಯಗಳನ್ನು ನಾಶಪಡಿಸುವುದಕ್ಕಾಗಿಯೇ ಘಟನಾ ಸ್ಥಳದಲ್ಲಿ ನವೀಕರಣ ಕಾಮಗಾರಿ ನಡೆಸಲಾಗಿದೆ ಎಂಬ ಆರೋಪಗಳಿಗೆ ಪ್ರತಿಕ್ರಿಯೆ ಸಲ್ಲಿಸುವಂತೆ ಮುಖ್ಯ ನ್ಯಾಯಮೂರ್ತಿ ಟಿ ಎಸ್ ಶಿವಜ್ಞಾನಂ ಮತ್ತು ನ್ಯಾಯಮೂರ್ತಿ ಹಿರಣ್ಮಯ್ ಭಟ್ಟಾಚಾರ್ಯ ಅವರನ್ನೊಳಗೊಂಡ ಪೀಠ ತಾಕೀತು ಮಾಡಿತ್ತು.
ಆಗಸ್ಟ್ 9ರಂದು ಆಸ್ಪತ್ರೆಯ ಸೆಮಿನಾರ್ ಸಭಾಂಗಣದಲ್ಲಿ ಕಿರಿಯ ವೈದ್ಯೆಯೊಬ್ಬರ ಮೇಲೆ ಅತ್ಯಾಚಾರ ಎಸಗಿ ಆಕೆಯನ್ನು ಕೊಲೆ ಮಾಡಿದ್ದ ಘಟನೆ ದೇಶಾದ್ಯಂತ ಆಕ್ರೋಶ, ಪ್ರತಿಭಟನೆಗಳಿಗೆ ಕಾರಣವಾಗಿತ್ತು. ಈಗಾಗಲೇ ಕಲ್ಕತ್ತಾ ಹೈಕೋರ್ಟ್ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿದೆ.
ಪ್ರಕರಣದ ಸಂಬಂಧ ಸಿಕಂದರಾಬಾದ್‌ನ ಆರ್ಮಿ ಕಾಲೇಜ್ ಆಫ್ ಡೆಂಟಲ್ ಸೈನ್ಸಸ್‌ನ ಡಾ ಮೋನಿಕಾ ಸಿಂಗ್ ಅವರು ಈ ಹಿಂದೆ ಸುಪ್ರೀಂ ಕೋರ್ಟ್‌ಗೆ ಪತ್ರ ಅರ್ಜಿ ಸಲ್ಲಿಸಿದ್ದರು. ವೈದ್ಯಕೀಯ ವೃತ್ತಿಪರರ ಮೇಲಿನ ದಾಳಿ ಕುರಿತು ಸರಣಿ ಘಟನೆಗಳು ನಡೆಯುತ್ತಿದ್ದು ನ್ಯಾಯಾಲಯ ತುರ್ತಾಗಿ ಮಧ್ಯಪ್ರವೇಶಿಸಬೇಕು ಎಂದು ವಕೀಲ ಸತ್ಯಂ ಸಿಂಗ್ ಮೂಲಕ ಸಲ್ಲಿಸಲಾದ ಮನವಿಯಲ್ಲಿ ಕೋರಲಾಗಿತ್ತು.
ಪ್ರಕರಣವನ್ನು ಸಂಪೂರ್ಣ ಸ್ವತಂತ್ರವಾಗಿ ತನಿಖೆ ನಡೆಸಬೇಕು ಮತ್ತು ಆರ್‌ಜಿ ಕರ್ ಕಾಲೇಜಿನಲ್ಲಿ ಕೇಂದ್ರ ಪಡೆಗಳನ್ನು ನಿಯೋಜಿಸಬೇಕು. ಮತ್ತು ಮೃತ ವೈದ್ಯ ವಿದ್ಯಾರ್ಥಿನಿಯ ಸಂಬಂಧಿಕರಿಗೆ ಪರಿಹಾರವನ್ನೂ ನೀಡಬೇಕು ಎಂದು ಪತ್ರದಲ್ಲಿ ತಿಳಿಸಲಾಗಿತ್ತು.
ವೈದ್ಯಕೀಯ ಸಂಸ್ಥೆಗಳಲ್ಲಿ ಭದ್ರತಾ ಕ್ರಮಗಳನ್ನು ಹೆಚ್ಚಿಸುವ ಸಂಬಂಧ ಮಾರ್ಗಸೂಚಿಗಳನ್ನು ರೂಪಿಸಬೇಕು ಮತ್ತು ಅದರ ಮೇಲ್ವಿಚಾರಣೆಗೆ ಸಮಿತಿ ರಚಿಸಬೇಕು ಎಂದು ಮನವಿ ಮಾಡಲಾಗಿತ್ತು.