
2025ರ ವಕ್ಫ್ (ತಿದ್ದುಪಡಿ) ಕಾಯಿದೆಯ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸುವ ಅರ್ಜಿಗಳನ್ನು ಮೇ 20ರಂದು ಮಧ್ಯಂತರ ಪರಿಹಾರದ ಸೀಮಿತ ಉದ್ದೇಶಕ್ಕಾಗಿ ವಿಚಾರಣೆ ನಡೆಸುವುದಾಗಿ ಸುಪ್ರೀಂ ಕೋರ್ಟ್ ಗುರುವಾರ ತಿಳಿಸಿದೆ.
ಬಳಕೆಯ ಕಾರಣದಿಂದಾದ ವಕ್ಫ್, ವಕ್ಫ್ ಸಮಿತಿ ಮತ್ತು ರಾಜ್ಯ ವಕ್ಫ್ ಮಂಡಳಿಗಳಿಗೆ ಮುಸ್ಲಿಮೇತರರ ನಾಮನಿರ್ದೇಶನ ಹಾಗೂ ವಕ್ಫ್ ಅಡಿಯಲ್ಲಿ ಸರ್ಕಾರಿ ಭೂಮಿ ಗುರುತಿಸುವಿಕೆಗೆ ಸಂಬಂಧಿಸಿದಂತೆ ಮಧ್ಯಂತರ ಪರಿಹಾರ ಅಗತ್ಯವಿದೆಯೇ ಎಂಬುದನ್ನು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಬಿ ಆರ್ ಗವಾಯಿ ಮತ್ತು ನ್ಯಾಯಮೂರ್ತಿ ಎ ಜಿ ಮಸೀಹ್ ಅವರ ಪೀಠ ನಿರ್ಧರಿಸಲಿದೆ.
ಕಾಯಿದೆಯ ಸೆಕ್ಷನ್‌ಗಳನ್ನು ಜಾರಿಗೆ ತರುವುದಿಲ್ಲ ಎಂದು ಕೇಂದ್ರ ಸರ್ಕಾರದ ಪರವಾಗಿ ಈ ಹಿಂದೆ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ನೀಡಿದ ಭರವಸೆ ಮುಂದುವರೆಯಬೇಕು ಎಂದು ನ್ಯಾಯಾಲಯ ಹೇಳಿದೆ.
"ನಾವು (ವಾದ ಮಂಡನೆಗೆ) ಎರಡೂ ಕಡೆಯವರಿಗೆ ಎರಡು ಗಂಟೆಗಳ ಕಾಲಾವಕಾಶ ನೀಡುತ್ತೇವೆ" ಎಂದು ನ್ಯಾಯಾಲಯ ಪ್ರಕರಣ ಮುಂದೂಡುವ ಮೊದಲು ತಿಳಿಸಿತು.
2025 ರ ವಕ್ಫ್ (ತಿದ್ದುಪಡಿ) ಕಾಯಿದೆಯ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸುವ ವಿವಿಧ ಅರ್ಜಿಗಳ ವಿಚಾರಣೆ ನಡೆಸಿದ ಪೀಠ ಈ ಆದೇಶ ನೀಡಿತು.
ವಕ್ಫ್ ತಿದ್ದುಪಡಿ ಕಾಯಿದೆ ಮುಸ್ಲಿಮ್ ಸಮುದಾಯವನ್ನು ತಾರತಮ್ಯದಿಂದ ಕಾಣುತ್ತದೆ ಮತ್ತು ಅವರ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸುತ್ತದೆ ಎಂದು ದೂರಿ ಸುಪ್ರೀಂ ಕೋರ್ಟ್‌ನಲ್ಲಿ ವಿವಿಧ ಅರ್ಜಿಗಳು ಸಲ್ಲಿಕೆಯಾಗಿವೆ. ವಿವಿಧ ವ್ಯಕ್ತಿಗಳು, ರಾಜಕೀಯ ಪಕ್ಷಗಳು ಈ ಸಂಬಂಧ ಅರ್ಜಿ ಸಲ್ಲಿಸಿದ್ದಾರೆ. ಕಾಯಿದೆ ಸಂಬಂಧ ಮಧ್ಯಂತರ ಪರಿಹಾರ ಕೋರಿಯೂ ಅರ್ಜಿಗಳು ಸಲ್ಲಿಕೆಯಾಗಿವೆ.