ವರ್ಷಾಂತ್ಯಕ್ಕೆ 195 ಸ್ಥಳೀಯ ಸಂಸ್ಥೆಗಳ ಅವಧಿ ಮುಕ್ತಾಯ; ಮೀಸಲಿಗೆ ಬೇಕು 5 ತಿಂಗಳು: ಹೈಕೋರ್ಟ್‌ಗೆ ಸರ್ಕಾರದ ಮಾಹಿತಿ

ಆಡಳಿತಾಧಿಕಾರಿಗಳನ್ನು ನೇಮಕ ಮಾಡಿ ಸರ್ಕಾರ ಹೊರಡಿಸಿದ ಆದೇಶ ರದ್ದುಪಡಿಸುವಂತೆ ಕೋರಿ ಮಧ್ಯಂತರ ಅರ್ಜಿ ಸಲ್ಲಿಸಲಾಗುವುದು. ಅದಕ್ಕಾಗಿ ಮೂಲ ಅರ್ಜಿ ತಿದ್ದುಪಡಿಗೆ ಅವಕಾಶ ನೀಡಬೇಕು ಎಂದು ಕೋರಿದ ಅರ್ಜಿದಾರರು.
High Court of Karnataka
High Court of Karnataka
Published on

ವರ್ಷಾಂತ್ಯಕ್ಕೆ ರಾಜ್ಯದ 195 ನಗರ ಸ್ಥಳೀಯ ಸಂಸ್ಥೆಗಳ ಅವಧಿ ಮುಕ್ತಾಯವಾಗಲಿದ್ದು, ಇವುಗಳ ವಾರ್ಡ್ ವಾರು ಮೀಸಲಾತಿ ನಿಗದಿಪಡಿಸಿ ಅಂತಿಮ ಅಧಿಸೂಚನೆ ಹೊರಡಿಸಲು ರಾಜ್ಯ ಸರ್ಕಾರಕ್ಕೆ 150 ದಿನ ಬೇಕು ಎಂದು ರಾಜ್ಯ ಸರ್ಕಾರವು ಕರ್ನಾಟಕ ಹೈಕೋರ್ಟ್‌ಗೆ ಮಾಹಿತಿ ನೀಡಿದೆ.

ಎರಡನೇ ಅವಧಿಗೆ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲು ನಿಗದಿಪಡಿಸಲು ವಿಳಂಬವಾದ ಹಿನ್ನೆಲೆಯಲ್ಲಿ ವರ್ಷಕ್ಕೂ ಅಧಿಕ ಸಮಯ ಆಡಳಿತಾಧಿಕಾರಿಗಳನ್ನು ನೇಮಕ ಮಾಡಿದ್ದ ಅವಧಿಯನ್ನು ತಮ್ಮ ಐದು ವರ್ಷದ ಅಧಿಕಾರವಧಿಗೆ ಪರಿಗಣಿಸಬಾರದು ಹಾಗೂ ಅವಧಿ ಮುಗಿಯಲಿರುವ ನಗರ ಸ್ಥಳೀಯ ಸಂಸ್ಥೆಗಳಿಗೆ ಆಡಳಿತಾಧಿಕಾರಿಗಳ ನೇಮಕ ಮಾಡುವ ಕ್ರಮಕ್ಕೆ ಮುಂದಾಗದಂತೆ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ 70ಕ್ಕೂ ಅಧಿಕ ನಗರ ಸ್ಥಳೀಯ ಸಂಸ್ಥೆಗಳ ಚುನಾಯಿತ ಸದಸ್ಯರು ಪ್ರತ್ಯೇಕವಾಗಿ ಸಲ್ಲಿಸಿರುವ ಅರ್ಜಿಗಳನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸುನೀಲ್ ದತ್ ಯಾದವ್ ಅವರಿದ್ದ ಏಕಸದಸ್ಯ ಪೀಠಕ್ಕೆ ಮಂಗಳವಾರ ರಾಜ್ಯ ಸರ್ಕಾರ ಈ ಮಾಹಿತಿ ನೀಡಿದೆ.

ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ಮತದಾರರ ಪಟ್ಟಿ ಸಿದ್ದಪಡಿಸಿಕೊಳ್ಳಲು ರಾಜ್ಯ ಚುನಾವಣಾ ಆಯೋಗಕ್ಕೆ 60 ದಿನಗಳ ಕಾಲಾವಾಧಿ ಬೇಕು. ಈ ಮಧ್ಯೆ ಐದು ವರ್ಷ ಅವಧಿ ಮುಗಿದಿರುವ ರಾಜ್ಯದ 118 ನಗರ ಸ್ಥಳೀಯ ಸಂಸ್ಥೆಗಳಿಗೆ ಆಡಳಿತಾಧಿಕಾರಿಗಳನ್ನು ನೇಮಕ ಮಾಡಲಾಗಿದೆ ಎಂದು ಮಾಹಿತಿ ನೀಡಿದೆ.

ವಿಚಾರಣೆ ವೇಳೆ ರಾಜ್ಯ ಸರ್ಕಾರದ ಜ್ಧಾಪಕ ಪತ್ರವನ್ನು (ಮೆಮೊ) ನ್ಯಾಯಾಲಯಕ್ಕೆ ಸಲ್ಲಿಸಿದ ಹೆಚ್ಚುವರಿ ಅಡ್ವೋಕೇಟ್ ಜನರಲ್ ಪ್ರತಿಮಾ ಹೊನ್ನಾಪುರ ಅವರು ನ್ಯಾಯಾಲಯದ ಆದೇಶದಂತೆ ನವೆಂಬರ್ 5ರಂದು ನಗರಾಭಿವೃದ್ಧಿ ಇಲಾಖೆಯ ಅಧಿಕಾರಿಗಳೊಂದಿಗೆ ರಾಜ್ಯ ಚುನಾವಣಾ ಆಯೋಗದ ಕಚೇರಿಯಲ್ಲಿ ಸಭೆ ನಡೆಸಲಾಗಿದ್ದು, 2025ರ ಡಿಸೆಂಬರ್‌ನಲ್ಲಿ ರಾಜ್ಯದ ಒಟ್ಟು 195 ನಗರ ಸ್ಥಳೀಯ ಸಂಸ್ಥೆಗಳ ಅವಧಿ ಮುಕ್ತಾಯಗೊಳ್ಳಲಿದೆ. ಈ ಪೈಕಿ 50 ನಗರ ಸ್ಥಳೀಯ ಸಂಸ್ಥೆಗಳಿಗೆ ಮುಂದಿನ 15 ದಿನಗಳಲ್ಲಿ ವಾರ್ಡ್‌ವಾರು ಮೀಸಲಾತಿ ನಿಗದಿಪಡಿಸಿ ಚುನಾವಣಾ ಆಯೋಗಕ್ಕೆ ಸಲ್ಲಿಸಲಾಗುವುದು. ಉಳಿದ 145 ನಗರ ಸ್ಥಳೀಯ ಸಂಸ್ಥೆಗಳಿಗೆ ಜಿಲ್ಲಾಧಿಕಾರಿಗಳಿಂದ ಮಾಹಿತಿ ಪಡೆದು ವಾರ್ಡ್ ವಾರು ಮೀಸಲಾತಿ ನಿಗದಿಪಡಿಸಲು 150 ದಿನಗಳೊಳಗಾಗಿ ಅಂತಿಮ ಮೀಸಲಾತಿ ಅಧಿಸೂಚನೆ ಹೊರಡಿಸಲಾಗುವುದು ಎಂದು ನಗರಾಭಿವೃದ್ಧಿ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ ಎಂದು ವಿವರಿಸಿದರು.

ಅಲ್ಲದೇ ಚಾಲ್ತಿಯಲ್ಲಿರುವ ವಿಧಾನಸಭಾ ಮತದಾರರ ಪಟ್ಟಿಯನ್ನು ಅಳವಡಿಸಿಕೊಂಡು ವಾರ್ಡವಾರು ಮತದಾರರ ಪಟ್ಟಿಯನ್ನು ಸಿದ್ದಪಡಿಸಬೇಕಾಗಿರುವುದರಿಂದ ನಗರಾಭಿವೃದ್ಧಿ ಇಲಾಖೆಯಿಂದ 50 ನಗರ ಸ್ಥಳೀಯ ಸಂಸ್ಥೆಗಳಿಗೆ ವಾರ್ಡವಾರು ಮೀಸಲಾತಿಯನ್ನು ನಿಗದಿಪಡಿಸಿ ಆಯೋಗಕ್ಕೆ ಅಧಿಸೂಚನೆ ಸಲ್ಲಿಸಿದ ಕೂಡಲೇ ಮತದಾರರ ಪಟ್ಟಿ ಸಿದ್ದತೆಗಾಗಿ ಆಯೋಗದಿಂದ ಕ್ರಮ ವಹಿಸಲಾಗುವುದು ಅಲ್ಲದೇ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ಮತದಾರರ ಪಟ್ಟಿ ಸಿದ್ದತಾ ಕಾರ್ಯಕ್ಕೆ ಆಯೋಗಕ್ಕೆ 60 ದಿನಗಳ ಕಾಲಾವಧಿ ಅಗತ್ಯವಿರುವುದಾಗಿ ರಾಜ್ಯ ಚುನಾವಣಾ ಆಯುಕ್ತರು ತಿಳಿಸಿದ್ದಾರೆ ಎಂದು ಸರ್ಕಾರ ತಿಳಿಸಿದೆ.

ಆಡಳಿತಾಧಿಕಾರಿ ನೇಮಕ: 2025ರ ಅಕ್ಟೋಬರ್ 18ರಿಂದ ನವೆಂಬರ್ 6ರವರೆಗೆ ಐದು ವರ್ಷದ ಅಧಿಕಾರವಧಿ ಮುಕ್ತಾಯಗೊಂಡಿರುವ 42 ನಗರಸಭೆ, 53 ಪುರಸಭೆ ಹಾಗೂ 23 ಪಟ್ಟಣ ಪಂಚಾಯಿತಿಗಳು ಸೇರಿ ರಾಜ್ಯದ ಒಟ್ಟು 118 ನಗರ ಸ್ಥಳೀಯ ಸಂಸ್ಥೆಗಳಿಗೆ ಆಡಳಿತಾಧಿಕಾರಿಗಳನ್ನು ನೇಮಕ ಮಾಡಿ ನವೆಂಬರ್ 6ಕ್ಕೆ ಅಧಿಸೂಚನೆ ಹೊರಡಿಸಲಾಗಿದೆ ಎಂದು ಸರ್ಕಾರದ ಪರ ವಕೀಲರು ಇದೇ ವೇಳೆ ಮಾಹಿತಿ ನೀಡಿದರು.

ಆಡಳಿತಾಧಿಕಾರಿಗಳನ್ನು ನೇಮಕ ಮಾಡಿ ಸರ್ಕಾರ ಹೊರಡಿಸಿದ ಆದೇಶ ರದ್ದುಪಡಿಸುವಂತೆ ಕೋರಿ ಮಧ್ಯಂತರ ಅರ್ಜಿ ಸಲ್ಲಿಸಲಾಗುವುದು. ಅದಕ್ಕಾಗಿ ಮೂಲ ಅರ್ಜಿ ತಿದ್ದುಪಡಿಗೆ ಅವಕಾಶ ನೀಡಬೇಕು ಎಂದು ಅರ್ಜಿದಾರರು ಕೋರಿದರು. ಇದನ್ನು ಮಾನ್ಯ ಮಾಡಿದ ಪೀಠವು ವಿಚಾರಣೆಯನ್ನು ನವೆಂಬರ್ 18ಕ್ಕೆ ಮುಂದೂಡಿತು.

Kannada Bar & Bench
kannada.barandbench.com