ಜಿಲ್ಲಾ ಪಂಚಾಯತಿ ಹಾಗೂ ತಾಲ್ಲೂಕು ಪಂಚಾಯತಿ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಹಿಂದುಳಿದ ವರ್ಗಗಳಿಗೆ ರಾಜಕೀಯ ಮೀಸಲಾತಿಯನ್ನು ಏಪ್ರಿಲ್ 1ರೊಳಗೆ ನಿಗದಿಗೊಳಿಸಿ ಅಧಿಸೂಚನೆ ಪ್ರಕಟಿಸಲಾಗುವುದು. ಆನಂತರ ಆ ವರದಿಯನ್ನು ರಾಜ್ಯ ಚುನಾವಣಾ ಆಯೋಗಕ್ಕೆ ಕಳುಹಿಸಿಕೊಡಲಾಗುವುದು ಎಂದು ಕರ್ನಾಟಕ ಹೈಕೋರ್ಟ್‌ಗೆ ರಾಜ್ಯ ಸರ್ಕಾರವು ಗುರುವಾರ ತಿಳಿಸಿದೆ.
ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಕ್ಷೇತ್ರಗಳ ಗಡಿ ನಿರ್ಣಯ ಮತ್ತು ಮೀಸಲಾತಿ ನಿಗದಿಪಡಿಸುವ ಅಧಿಕಾರವನ್ನು ರಾಜ್ಯ ಚುನಾವಣಾ ಆಯೋಗದಿಂದ ವಾಪಸ್ ಪಡೆದು ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ ರಚಿಸಲು ‘ಕರ್ನಾಟಕ ಪಂಚಾಯತ್ ರಾಜ್ ಮತ್ತು ಗ್ರಾಮ ಸ್ವರಾಜ್ ಕಾಯಿದೆ’ಗೆ ತಿದ್ದುಪಡಿ ತಂದಿರುವುದನ್ನು ಪ್ರಶ್ನಿಸಿ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಅಶೋಕ್ ಎಸ್ ಕಿಣಗಿ ಅವರ ನೇತೃತ್ವದ ವಿಭಾಗೀಯ ಪೀಠವು ನಡೆಸಿತು.
ಅರ್ಜಿ ವಿಚಾರಣೆ ಆರಂಭಿಸಿದ ಪೀಠವು “ಕ್ಷೇತ್ರ ಪುನರ್ ವಿಂಗಡಣೆ ಅಂತಿಮ ಅಧಿಸೂಚನೆ ಪ್ರಕಟಿಸಲಾಗಿದೆ. ಚುನಾವಣಾ ಆಯೋಗಕ್ಕೆ ವರದಿಯನ್ನೂ ನೀಡಲಾಗಿದೆ. ಈಗ ಚೆಂಡು ನಿಮ್ಮ (ಆಯೋಗ) ಕೋರ್ಟ್‌ನಲ್ಲಿದೆ” ಎಂದಿತು.
ಆಗ ಆಯೋಗದ ಪರ ಹಿರಿಯ ವಕೀಲ ಕೆ ಎನ್ ಫಣೀಂದ್ರ ಅವರು “ಹಿಂದುಳಿದ ವರ್ಗಗಳಿಗೆ ರಾಜಕೀಯ ಮೀಸಲಾತಿ ನಿಗದಿಗೊಳಿಸಿಲ್ಲ. ಅದರ ವರದಿ ಬಂದಿಲ್ಲ” ಎಂದರು.
ಈ ವೇಳೆ ಅಡ್ವೊಕೇಟ್ ಜನರಲ್ ಪ್ರಭುಲಿಂಗ ನಾವದಗಿ ಅವರು “ಏಪ್ರಿಲ್ 1ರ ಒಳಗೆ ಹಿಂದುಳಿದ ವರ್ಗಗಳಿಗೆ ಮೀಸಲಾತಿ ನಿಗದಿಗೊಳಿಸಿ ಅಧಿಸೂಚನೆ ಪ್ರಕಟಿಸಲಾಗುವುದು. ಅದರ ವರದಿಯನ್ನು ಬಳಿಕ ಕ್ರಮಕ್ಕಾಗಿ ಆಯೋಗಕ್ಕೆ ಕಳುಹಿಸಿಕೊಡಲಾಗುವುದು” ಎಂದು ತಿಳಿಸಿದರು.
ಇದನ್ನು ಆಲಿಸಿದ ಪೀಠವು ಫೆಬ್ರವರಿ 14ರ ಆದೇಶದ ಪ್ರಕಾರ ಅಡ್ವೊಕೇಟ್ ಜನರಲ್ ಅವರು ಮೀಸಲಾತಿ ಅಂತಿಮ ಅಧಿಸೂಚನೆಯ ಪ್ರಕಟಿಸದ ಬಳಿಕ ಅದನ್ನು ಮುಂದಿನ ಕ್ರಮಕ್ಕೆ ರಾಜ್ಯ ಚುನಾವಣಾ ಆಯೋಗಕ್ಕೆ ಕಳುಹಿಸಿಕೊಡಲಾಗುವುದು ಎಂದು ತಿಳಿಸಿದ್ದಾರೆ. ಸರ್ಕಾರದ ವಕೀಲರು ಬುಧವಾರ ಅನುಪಾಲನಾ ವರದಿ ಮತ್ತು ಮಾರ್ಚ್ 1ರಂದು ಪ್ರಕಟಿಸಿರುವ ಗೆಜೆಟ್ ಅಧಿಸೂಚನೆಯನ್ನು ಸಲ್ಲಿಸಿದ್ದಾರೆ. ಇದೇ ವರದಿಯನ್ನು ರಾಜ್ಯ ಚುನಾವಣಾ ಆಯೋಗಕ್ಕೆ ಮುಂದಿನ ಕ್ರಮಕ್ಕೆ ಕಳುಹಿಸಿಕೊಡಲಾಗಿದೆ. ಈ ಹಿಂದೆ ನ್ಯಾಯಾಲಯ ವಿಧಿಸಿರುವ ದಂಡವನ್ನು ಸರ್ಕಾರ ಪಾವತಿಸಿದೆ ಎಂದು ಆದೇಶದಲ್ಲಿ ದಾಖಲಿಸಲಾಗಿದೆ.
ಮುಂದುವರಿದು, ಚುನಾವಣಾ ಆಯೋಗವನ್ನು ಪ್ರತಿನಿಧಿಸಿದ್ದ ವಕೀಲರು ಕ್ಷೇತ್ರ ಪುನರ್ ವಿಂಗಡಣೆಯ ಗೆಜೆಟ್ ಅಧಿಸೂಚನೆ ಸಂಬಂಧಿಸಿದಂತೆ ಮುಂದಿನ ಕ್ರಮಕೈಗೊಳ್ಳಲು ಕಾಲಾವಕಾಶ ಕೋರಿದ್ದಾರೆ. ಹೀಗಾಗಿ, ಅರ್ಜಿ ವಿಚಾರಣೆಯನ್ನು ಏಪ್ರಿಲ್ 12ಕ್ಕೆ ಮುಂದೂಡಲಾಗಿದೆ ಎಂದಿತು.
ಫೆಬ್ರವರಿ 14ರಂದು ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿಗಳಿಗೆ ಚುನಾವಣೆ ನಡೆಸಲು ಇಂದಿನಿಂದ ಹತ್ತು ದಿನಗಳಲ್ಲಿ ಕ್ಷೇತ್ರ ಪುನರ್ ವಿಂಗಡಣೆ ಅಧಿಸೂಚನೆ ಪ್ರಕಟಿಸಲು ರಾಜ್ಯ ಸರ್ಕಾರಕ್ಕೆ ಗಡುವು ವಿಧಿಸಿತ್ತು. ಇದಕ್ಕೂ ಮುನ್ನ, 2022ರ ಡಿಸೆಂಬರ್ 14ರಂದು ರಾಜ್ಯದ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿಗಳಿಗೆ ಚುನಾವಣೆ ನಡೆಸುವ ನಿಟ್ಟಿನಲ್ಲಿ ಕ್ಷೇತ್ರಗಳ ಪುನರ್ ವಿಂಗಡಣೆ ಮತ್ತು ಹಿಂದುಳಿದ ವರ್ಗಗಳೂ ಸೇರಿದಂತೆ ಇತರೆ ಸಮುದಾಯಗಳಿಗೆ ಕಾಲಮಿತಿಯಲ್ಲಿ ಮೀಸಲಾತಿ ನಿಗದಿಪಡಿಸಲು ವಿಫಲವಾಗಿದ್ದ ರಾಜ್ಯ ಸರ್ಕಾರಕ್ಕೆ ₹5 ಲಕ್ಷ ದಂಡ ವಿಧಿಸಿ ಆದೇಶಿಸಿದ್ದನ್ನು ಸ್ಮರಿಸಬಹುದಾಗಿದೆ.
ನಿವೃತ್ತ ನ್ಯಾಯಮೂರ್ತಿ ಭಕ್ತವತ್ಸಲ ಆಯೋಗದ ವರದಿ ಆಧರಿಸಿ ಸ್ಥಳೀಯ ಸಂಸ್ಥೆಗಳಲ್ಲಿ ಹಿಂದುಳಿದ ವರ್ಗಗಳಿಗೆ (ಒಬಿಸಿ) ರಾಜಕೀಯ ಮೀಸಲಾತಿ ನಿಗದಿಪಡಿಸಲು 2023ರ ಮಾರ್ಚ್ 31ರವರೆಗೆ ಕಾಲಾವಕಾಶ ನೀಡಬೇಕು ಎಂಬ ರಾಜ್ಯ ಸರ್ಕಾರದ ಕೋರಿಕೆಯನ್ನು ಪೀಠವು ಮನ್ನಿಸಿತ್ತು. ಇದೇ ನೆಲೆಯಲ್ಲಿ ರಾಜ್ಯ ಸರ್ಕಾರವು ಇಂದು ಕಾಲಾವಕಾಶ ಕೋರಿತ್ತು.