ಸ್ವಾತಂತ್ರ್ಯ ದಿನದಂದು ತ್ರಿವರ್ಣ ಧ್ವಜ ಹಾರಿಸಲು ಪ್ರಯತ್ನಿಸುತ್ತಿದ್ದಾಗ ವಿದ್ಯುತ್ ಸ್ಪರ್ಶದಿಂದ ಮೃತಪಟ್ಟ ಬಾಲಕನ ಪೋಷಕರಿಗೆ ಪರಿಹಾರ ನೀಡುವುದನ್ನು ತಕ್ಷಣ ಪರಿಗಣಿಸುವಂತೆ ಕರ್ನಾಟಕ ಹೈಕೋರ್ಟ್ ಗುರುವಾರ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ.
ಎರಡು ವರ್ಷಗಳ ಹಿಂದೆ ಕೊಪ್ಪಳ ಜಿಲ್ಲೆಯಲ್ಲಿ ತ್ರಿವರ್ಣ ಧ್ವಜ ಹಾರಿಸಲು ಯತ್ನಿಸುತ್ತಿದ್ದಾಗ ಇಂಥದ್ದೇ ಘಟನೆ ನಡೆದಿದ್ದರ ಕುರಿತು ನ್ಯಾಯಾಲಯವು ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡಿದ್ದ ಸಾರ್ವಜನಿಕ ಹಿತಾಸಕ್ತಿ ಮನವಿಯ ವಿಚಾರಣೆ ನಡೆಸುತ್ತಿದ್ದಾಗ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ ಮತ್ತು ನ್ಯಾಯಮೂರ್ತಿ ಎನ್ ಎಸ್ ಸಂಜಯ್ ಗೌಡ ನೇತೃತ್ವದ ವಿಭಾಗೀಯ ಪೀಠಕ್ಕೆ ಈ ವಿಚಾರವನ್ನು ಅಮಿಕಸ್ ಕ್ಯೂರಿ ವಿವರಿಸಿದರು.
ತುಮಕೂರು ಜಿಲ್ಲೆಯ ಕರಿಕೆರೆ ಶಾಲೆಯಲ್ಲಿ ಘಟನೆ ನಡೆದಿದ್ದು, ತಕ್ಷಣ ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿಗೆ ಸೂಚಿಸುವಂತೆ ನ್ಯಾಯಾಲಯವು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ.
ಚಂದನ್, ಶಶಾಂಕ್ ಮತ್ತು ಪವನ್ ಎಂಬ ಮೂವರು ವಿದ್ಯಾರ್ಥಿಗಳು ಬಾವುಟ ಹಾರಿಸಲು ಯತ್ನಿಸುತ್ತಿದ್ದಾಗ ಅವರು ಹಿಡಿದಿದ್ದ ಧ್ವಜದ ಕಂಬವು ವಿದ್ಯುತ್ ತಂತಿಗೆ ಸ್ಪರ್ಶಿಸಿತ್ತು. ಇದರಿಂದ ಗಾಯಗೊಂಡ ವಿದ್ಯಾರ್ಥಿಗಳನ್ನು ಸಮೀಪದಲ್ಲಿದ್ದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಂದನ್ (16) ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದು, ಉಳಿದ ಇಬ್ಬರು ಬಾಲಕರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ನ್ಯಾಯಾಲಯಕ್ಕೆ ಮಾಹಿತಿ ನೀಡಲಾಯಿತು.
“ಬದುಕುಳಿದಿರುವ ಇಬ್ಬರು ಬಾಲಕರಿಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ ನೀಡಲು ಸರ್ಕಾರ ವ್ಯವಸ್ಥೆ ಮಾಡಬೇಕು. ಇಬ್ಬರಿಗೂ ಉತ್ತಮ ವೈದ್ಯಕೀಯ ಸೌಲಭ್ಯ ದೊರಕುತ್ತಿದೆ ಎಂಬುದನ್ನು ಜಿಲ್ಲಾಧಿಕಾರಿ ಖಾತರಿಪಡಿಸಬೇಕು. ವಿದ್ಯಾರ್ಥಿಗಳ ವೈದ್ಯಕೀಯ ವೆಚ್ಚ ಭರಿಸುವುದನ್ನು ಸರ್ಕಾರ ಪರಿಗಣಿಸಬೇಕು” ಎಂದು ನ್ಯಾಯಾಲಯ ಹೇಳಿತು. ಜೊತೆಗೆ ಸಾವನ್ನಪ್ಪಿದ ಬಾಲಕನ ಕುಟುಂಬಕ್ಕೆ ತಕ್ಷಣ ಪರಿಹಾರ ದೊರೆಯುವುದನ್ನು ಖಾತರಿಪಡಿಸುವಂತೆ ಸರ್ಕಾರಕ್ಕೆ ನಿರ್ದೇಶಿಸಿತು.
ಎರಡು ವರ್ಷಗಳ ಹಿಂದೆ ಕೊಪ್ಪಳದ ಹಾಸ್ಟೆಲ್ ಒಂದರ ವ್ಯಾಪ್ತಿಯಲ್ಲಿ ತ್ರಿವರ್ಣ ಧ್ವಜ ಹಾರಿಸಲು ಸಿದ್ಧತೆ ಮಾಡಿಕೊಳ್ಳುತ್ತಿದ್ದ ಮಕ್ಕಳಿಗೆ ವಿದ್ಯುತ್ ಸ್ಪರ್ಶಿಸಿದ್ದರಿಂದ ಐವರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದರು. ಇದನ್ನು ಆಧರಿಸಿ ನ್ಯಾಯಾಲಯ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿತ್ತು. ನ್ಯಾಯಾಲಯದ ನಿರ್ದೇಶನದಂತೆ ಸರ್ಕಾ ವಿದ್ಯಾರ್ಥಿಗಳ ಕುಟುಂಬಕ್ಕೆ ಒಟ್ಟಾರೆ 10 ಲಕ್ಷ ರೂಪಾಯಿ ಪರಿಹಾರ ಪಾವತಿಸಿತ್ತು. ಸರ್ಕಾರಿ ಹಾಸ್ಟೆಲ್‌ಗಳಲ್ಲಿ ವಿದ್ಯಾರ್ಥಿಗಳ ರಕ್ಷಣೆ ಖಾತರಿಪಡಿಸುವ ಸಂಬಂಧ ಸಮಿತಿ ರಚಿಸುವಂತೆಯೂ ನ್ಯಾಯಾಲಯ ನಿರ್ದೇಶನ ನೀಡಿತ್ತು.