ಜೈಲಿನಲ್ಲಿ ಕೈದಿಗಳು ಅಸಹಜವಾಗಿ ಸಾವನ್ನಪ್ಪಿದ ಪ್ರಕರಣಗಳಿಗೆ ಸಂಬಂಧಿಸಿದಂತೆ ಅಂತಿಮ ವಿಚಾರಣೆ ನಡೆಸಬೇಕಿದ್ದು, ಈ ವಿಚಾರದಲ್ಲಿ ನ್ಯಾಯಾಲಯಕ್ಕೆ ಸಹಾಯ ಮಾಡಲು ಅಮಿಕಸ್ ಕ್ಯೂರಿಯಾಗಿ ವಕೀಲೆ ಬಿ ವಿ ವಿದ್ಯುಲ್ಲತಾ ಅವರನ್ನು ನೇಮಕ ಮಾಡಲಾಗಿದೆ ಎಂದು ಕರ್ನಾಟಕ ಹೈಕೋರ್ಟ್ ಈಚೆಗೆ ಆದೇಶಿಸಿದೆ.
ಜೈಲಿನಲ್ಲಿ ಕೈದಿಗಳ ಅಸಹಜ ಸಾವಿಗೆ ಸಂಬಂಧಿಸಿದಂತೆ 2017ರ ಸುಪ್ರೀಂ ಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡಿರುವ ಸಾರ್ವಜನಿಕ ಹಿತಾಸಕ್ತಿ ಮನವಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಮತ್ತು ನ್ಯಾಯಮೂರ್ತಿ ಅಶೋಕ್ ಎಸ್.ಕಿಣಗಿ ಅವರ ನೇತೃತ್ವದ ವಿಭಾಗೀಯ ಪೀಠವು ನಡೆಸಿತು.
“ಪ್ರತಿವಾದಿಗಳಾದ ರಾಜ್ಯ ಸರ್ಕಾರ, ಗೃಹ ಇಲಾಖೆಯ ಪ್ರಧಾನ ಕಾರ್ಯದರ್ಶಿ, ಕಾರಾಗೃಹ ಇಲಾಖೆಯ ಮಹಾನಿರ್ದೇಶಕ, ಬೆಂಗಳೂರು ಪೊಲೀಸ್ ಆಯುಕ್ತ, ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ನಿರ್ದೇಶಕರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಲಿಖಿತ ಹೇಳಿಕೆ ಸಲ್ಲಿಸಿದ್ದು, ಪ್ರಕರಣದ ಅಂತಿಮ ವಿಚಾರಣೆ ನಡೆಸಬೇಕಿದೆ. ಹೀಗಾಗಿ, ನ್ಯಾಯಾಲಯಕ್ಕೆ ಸಹಾಯ ಮಾಡುವುದಕ್ಕಾಗಿ ವಕೀಲೆ ಬಿ ವಿ ವಿದ್ಯುಲ್ಲತಾ ಅವರನ್ನು ಅಮಿಕಸ್ ಕ್ಯೂರಿಯನ್ನಾಗಿ ನೇಮಕ ಮಾಡಲಾಗಿದೆ. ರಿಜಿಸ್ಟ್ರಿಯು ಎಲ್ಲಾ ದಾಖಲೆಗಳನ್ನು ಅಮಿಕಸ್ ಕ್ಯೂರಿಯವರಿಗೆ ಸಲ್ಲಿಸಬೇಕು” ಎಂದು ನ್ಯಾಯಾಲಯ ಆದೇಶ ಮಾಡಿದೆ. ವಿಚಾರಣೆಯನ್ನು ಜೂನ್ 15ಕ್ಕೆ ಮುಂದೂಡಿದೆ.
ಹಿಂದಿನ ವಿಚಾರಣೆಯಲ್ಲಿ ನ್ಯಾಯಾಲಯವು “ಅನುಪಾಲನಾ ವರದಿಯ ಪ್ರತಿಯನ್ನು ವಕೀಲರು ಕೆಎಸ್‌ಎಲ್‌ಎಸ್‌ಎಗೆ ಕಳುಹಿಸಿಕೊಡಬೇಕು. ಇದುವರೆಗೆ ಯಾರಿಗೆ, ಎಷ್ಟು ಮೊತ್ತದ ಪರಿಹಾರ ವಿತರಿಸಲಾಗಿದೆ ಎಂಬುದಕ್ಕೆ ಸಂಬಂಧಿಸಿದ ಸ್ಥಿತಿಗತಿ ವರದಿ ಸಲ್ಲಿಸಬೇಕು” ಎಂದು ಆದೇಶಿಸಿತ್ತು.