ಉಪಲೋಕಾಯುಕ್ತರ ನೇಮಕಾತಿ ಪ್ರಕರಣ: ರಾಜ್ಯ ಸರ್ಕಾರಕ್ಕೆ ನೋಟಿಸ್‌ ಜಾರಿ ಮಾಡಿದ ಕರ್ನಾಟಕ ಹೈಕೋರ್ಟ್‌

ಎರಡನೇ ಉಪ ಲೋಕಾಯುಕ್ತ ಹುದ್ದೆ ಭರ್ತಿ ಮಾಡಲು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಸಮಾಜ ಪರಿವರ್ತನಾ ಸಮುದಾಯ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ ನಡೆಸಿತು.
Lokayukta and Karnataka HC
Lokayukta and Karnataka HC

ರಾಜ್ಯದಲ್ಲಿ ಖಾಲಿಯಿರುವ ಎರಡನೇ ಉಪ ಲೋಕಾಯುಕ್ತ ಹುದ್ದೆಯನ್ನು ಭರ್ತಿ ಮಾಡುವ ವಿಚಾರ ಸಂಬಂಧ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ಗುರುವಾರ ನೋಟಿಸ್ ಜಾರಿ ಮಾಡಿದೆ.

ಎರಡನೇ ಉಪ ಲೋಕಾಯುಕ್ತ ಹುದ್ದೆ ಭರ್ತಿ ಮಾಡಲು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಸಮಾಜ ಪರಿವರ್ತನಾ ಸಮುದಾಯ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಅಶೋಕ್‌ ಎಸ್‌. ಕಿಣಗಿ ಅವರ ನೇತೃತ್ವದ ವಿಭಾಗೀಯ ಪೀಠವು ನಡೆಸಿತು.

ಕೆಲಕಾಲ ವಾದ ಆಲಿಸಿದ ಪೀಠವು ಪ್ರತಿವಾದಿಯಾಗಿರುವ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಗೆ ನೋಟಿಸ್ ಜಾರಿ ಮಾಡಿದ್ದು, ಆಕ್ಷೇಪಣೆ ಸಲ್ಲಿಸುವಂತೆ ಆದೇಶಿಸಿ ವಿಚಾರಣೆ ಮುಂದೂಡಿತು.

ನಿವೃತ್ತ ನ್ಯಾಯಮೂರ್ತಿ ಬಿ ಎಸ್ ಪಾಟೀಲ್ ಅವರು ಎರಡನೇ ಉಪ ಲೋಕಾಯುಕ್ತರಾಗಿ 2019ರ ನವೆಂಬರ್‌ 20ರಂದು ನೇಮಕಗೊಂಡಿದ್ದರು. ನಂತರ ಅವರೇ 2022ರ ಜೂನ್‌ 14ರಂದು ಲೋಕಾಯುಕ್ತರಾಗಿ ನೇಮಕಗೊಂಡರು. ಅಂದಿನಿಂದ ಎರಡನೇ ಉಪ ಲೋಕಾಯುಕ್ತರ ಹುದ್ದೆ ಖಾಲಿಯಿದ್ದು, ಈವರೆಗೂ ನೇಮಕ ಮಾಡಿಲ್ಲ ಎಂದು ಅರ್ಜಿಯಲ್ಲಿ ವಿವರಿಸಲಾಗಿದೆ.

ಕರ್ನಾಟಕ ಲೋಕಾಯುಕ್ತ ಕಾಯಿದೆ 1984ರ ಪ್ರಕಾರ ಎರಡನೇ ಉಪ ಲೋಕಾಯುಕ್ತ ಹುದ್ದೆಯನ್ನು ಭರ್ತಿ ಮಾಡುವುದು ಕಡ್ಡಾಯವಾಗಿದೆ. ಈ ಹುದ್ದೆ ಖಾಲಿ ಉಳಿದಿರುವುದರಿಂದ ಲೋಕಾಯುಕ್ತದಲ್ಲಿ ಇತ್ಯರ್ಥಕ್ಕೆ ಬಾಕಿಯಿರುವ ಪ್ರಕರಣಗಳ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಆದರೆ, 2022ರ ಡಿಸೆಂಬರ್ ಅಂತ್ಯಕ್ಕೆ ಲೋಕಾಯುಕ್ತದಲ್ಲಿ ಒಟ್ಟು 11,448 ಪ್ರಕರಣಗಳು ಇತ್ಯರ್ಥಕ್ಕೆ ಬಾಕಿ ಉಳಿದಿದ್ದವು. ಅದರಲ್ಲಿ ಎರಡನೇ ಉಪ ಲೋಕಾಯುಕ್ತರ ಮುಂದೆಯೇ ಒಟ್ಟು 4,232 ಪ್ರಕರಣಗಳು ವಿಲೇವಾರಿ ಬಾಕಿಯಿದೆ. ಆದ್ದರಿಂದ ಕೂಡಲೇ ಎರಡನೇ ಉಪ ಲೋಕಾಯುಕ್ತ ಹುದ್ದೆಯನ್ನು ಭರ್ತಿ ಮಾಡಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.

Related Stories

No stories found.
Kannada Bar & Bench
kannada.barandbench.com