ನಗರ ಸ್ಥಳೀಯ ಸಂಸ್ಥೆಗಳ ವಾರ್ಡ್‌ವಾರು ಮೀಸಲಾತಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌

ಸಕಾಲಕ್ಕೆ ಚುನಾವಣೆ ನಡೆಸದಿರುವುದು ಸಂವಿಧಾನದ 243-ಯು ವಿಧಿ ಉಲ್ಲಂಘನೆಯಾಗಿದ್ದು, ಈಗಾಗಲೇ ಕಲಬುರ್ಗಿ ಜಿಲ್ಲೆ ವಾಡಿಯ ಪಟ್ಟಣ ಪಂಚಾಯಿತಿ ಮತ್ತು ಬಾಗಲಕೋಟೆ ಮಹಾಲಿಂಗಪುರ ಪುರಸಭೆಯ ಅವಧಿ ಮುಕ್ತಾಯವಾಗಿದೆ ಎಂದು ಆಯೋಗ ಅರ್ಜಿಯಲ್ಲಿ ವಿವರಿಸಿದೆ.
Chief Justice Vibhu Bhakhru & Justice CM Poonacha
Chief Justice Vibhu Bhakhru & Justice CM Poonacha
Published on

ಪ್ರಸಕ್ತ ವರ್ಷಾಂತ್ಯಕ್ಕೆ ಅವಧಿ ಕೊನೆಗೊಳ್ಳಲಿರುವ ರಾಜ್ಯದ 47 ನಗರಸಭೆ, 91 ಪುರಸಭೆ, 49 ಪಟ್ಟಣ ಪಂಚಾಯಿತಿ ಸೇರಿ ಒಟ್ಟು 187 ನಗರ ಸ್ಥಳೀಯ ಸಂಸ್ಥೆಗಳ ವಾರ್ಡವಾರು ಮೀಸಲಾತಿ ಜೊತೆಗೆ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳ ಅಂತಿಮ ಮೀಸಲಾತಿ ಅಧಿಸೂಚನೆ ಹೊರಡಿಸುವ ಸಂಬಂಧ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೋಮವಾರ ನೋಟಿಸ್‌ ಜಾರಿಗೊಳಿಸಿದೆ.

ರಾಜ್ಯ ಚುನಾವಣಾ ಆಯೋಗ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಕ್ರು ಮತ್ತು ನ್ಯಾಯಮೂರ್ತಿ ಸಿ ಎಂ ಪೂಣಚ್ಚ ಅವರ ವಿಭಾಗೀಯ ಪೀಠವು ನಡೆಸಿತು.

ವಾದ ಆಲಿಸಿದ ಪೀಠವು ರಾಜ್ಯ ಸರ್ಕಾರ ಮತ್ತು ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ನೋಟಿಸ್‌ ಜಾರಿಗೊಳಿಸಿ, ವಿಚಾರಣೆಯನ್ನು ಡಿಸೆಂಬರ್‌ 11ಕ್ಕೆ ಮುಂದೂಡಿತು.

ಇದಕ್ಕೂ ಮುನ್ನ, ರಾಜ್ಯ ಚುನಾವಣಾ ಆಯೋಗದ ಪರ ವಕೀಲೆ ವೈಶಾಲಿ ಹೆಗ್ಡೆ ಅವರು “ನಗರ ಸ್ಥಳೀಯ ಸಂಸ್ಥೆಗಳ ಅವಧಿಯು ನವೆಂಬರ್‌ ಮತ್ತು ಡಿಸೆಂಬರ್‌ನಲ್ಲಿ ಮುಗಿಯಲಿದೆ” ಎಂದರು.

ಆಗ ಸರ್ಕಾರದ ಪರ ವಕೀಲೆ ನಿಲೋಫರ್‌ ಅಕ್ಬರ್‌ ಅವರು “ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಸಂಬಂಧಿಸಿದ ಅರ್ಜಿಯೊಂದು ಡಿಸೆಂಬರ್‌ 11ಕ್ಕೆ ನಿಗದಿಯಾಗಿದೆ. ಇದು ನಗರ ಸಭೆ ಮತ್ತು ಪುರಸಭೆಗೆ ಸಂಬಂಧಿಸಿದ್ದಾಗಿದೆ” ಎಂದರು. ಮುಂದಿನ ವರ್ಷ ಜನವರಿಯಲ್ಲಿ ಅವಧಿ ಮುಗಿಯಲಿರುವ ರಾಜ್ಯದ 5,950 ಗ್ರಾಮ ಪಂಚಾಯಿತಿಗಳಿಗೆ ಸಕಾಲದಲ್ಲಿ ಚುನಾವಣೆ ನಡೆಸಲು ಪೂರಕವಾಗಿ ಅಂತಿಮ ಮೀಸಲಾತಿ ಅಧಿಸೂಚನೆ ಹೊರಡಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ರಾಜ್ಯ ಚುನಾವಣಾ ಆಯೋಗ ಕೋರಿದೆ.

ಇದನ್ನು ಆಲಿಸಿದ ಪೀಠವು ರಾಜ್ಯ ಸರ್ಕಾರಕ್ಕೆ ನೋಟಿಸ್ ‌ಜಾರಿಗೊಳಿಸಿ, ವಿಚಾರಣೆ ಮುಂದೂಡಿತು.

Also Read
ಗ್ರಾಮ ಪಂಚಾಯಿತಿ ಚುನಾವಣೆ: ಅಂತಿಮ ಮೀಸಲಾತಿ ಅಧಿಸೂಚನೆ ಕೋರಿದ ಆಯೋಗ; ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌

ರಾಜ್ಯ ಚುನಾವಣಾ ಆಯೋಗವು ಜನವರಿ 27 ಮತ್ತು ಜೂನ್‌ 26ರಂದು ಅಂತಿಮ ಅಧಿಸೂಚನೆ ಹೊರಡಿಸುವಂತೆ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದೆ. ಆದರೆ, ಸರ್ಕಾರದಿಂದ ಯಾವುದೇ ಸ್ಪಂದನೆ ದೊರೆತಿಲ್ಲ ಎಂದು ಅರ್ಜಿಯಲ್ಲಿ ಆಕ್ಷೇಪಿಸಲಾಗಿದೆ.

ಸಕಾಲಕ್ಕೆ ಚುನಾವಣೆ ನಡೆಸದಿರುವುದು ಸಂವಿಧಾನದ 243-ಯು ವಿಧಿ ಉಲ್ಲಂಘನೆಯಾಗಿದ್ದು, ಈಗಾಗಲೇ ಕಲಬುರ್ಗಿ ಜಿಲ್ಲೆ ವಾಡಿಯ ಪಟ್ಟಣ ಪಂಚಾಯಿತಿ ಮತ್ತು ಬಾಗಲಕೋಟೆಯ ಮಹಾಲಿಂಗಪುರ ಪುರಸಭೆಯ ಅವಧಿ ಮುಕ್ತಾಯವಾಗಿದ್ದು, 185 ನಗರಸಭೆ/ಪುರಸಭೆಗಳ ಅವಧಿಯು ಅಕ್ಟೋಬರ್‌-ಡಿಸೆಂಬರ್‌ ಅವಧಿಯಲ್ಲಿ ಮುಗಿಯಲಿದೆ. ಚುನಾವಣೆ ವಿಳಂಬವಾದರೆ ಸರ್ಕಾರವು ಆಡಳಿತಾಧಿಕಾರಿ ನೇಮಕ ಮಾಡಲಿದೆ. ಇದು ಪ್ರಜಾಪ್ರಭುತ್ವ ವಿರೋಧಿ ನಡೆಯಾಗಲಿದೆ ಎಂದು ಆಯೋಗ ಆಕ್ಷೇಪ ವ್ಯಕ್ತಪಡಿಸಿದೆ.

Kannada Bar & Bench
kannada.barandbench.com