ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ (ಕೆಎಂವಿಎಸ್‌ಟಿಡಿಸಿಎಲ್) ಬ್ಯಾಂಕ್ ಖಾತೆಯಿಂದ ಅಕ್ರಮವಾಗಿ ₹95 ಕೋಟಿ ವರ್ಗಾವಣೆ ಮಾಡಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಪ್ರಕರಣದದಲ್ಲಿ ಜನಪ್ರತಿನಿಧಿಗಳ ವಿಶೇಷ ಸತ್ರ ನ್ಯಾಯಾಲಯ ಜಾಮೀನು ಮಂಜೂರು ಮಾಡಿರುವುದನ್ನು ಪ್ರಶ್ನಿಸಿ ಜಾರಿ ನಿರ್ದೇಶನಾಲಯ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಮೊದಲನೇ ಆರೋಪಿ ಮಾಜಿ ಸಚಿವ ಬಿ ನಾಗೇಂದ್ರಗೆ ಕರ್ನಾಟಕ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಜಾರಿ ನಿರ್ದೇಶನಾಲಯ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.
ಜಾರಿ ನಿರ್ದೇಶನಾಲಯದ ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್ ವಿ ರಾಜು ಅವರು “ನಾಗೇಂದ್ರ ಅವರಿಗೆ ಜಾಮೀನು ಮಂಜೂರು ಮಾಡುವಾಗ ಸತ್ರ ನ್ಯಾಯಾಲಯ ಪ್ರಮಾದವೆಸಗಿದೆ” ಎಂದರು.
ಇದನ್ನು ಆಲಿಸಿದ ಪೀಠವು ಮಾಜಿ ಸಚಿವ ಬಿ ನಾಗೇಂದ್ರಗೆ ತುರ್ತು ನೋಟಿಸ್ ಜಾರಿ ಮಾಡಿ, ವಿಚಾರಣೆಯನ್ನು ನವೆಂಬರ್ 15ಕ್ಕೆ ಮುಂದೂಡಿತು.
ವಿಶೇಷ ಸತ್ರ ನ್ಯಾಯಾಲಯವು ಅಕ್ಟೋಬರ್ 14ರಂದು ನಾಗೇಂದ್ರ ಅವರಿಗೆ ಜಾಮೀನು ಮಂಜೂರು ಮಾಡಿದೆ.
ಇ ಡಿ ಆರೋಪ: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಖಾತೆಯಿಂದ ಒಟ್ಟಾರೆ 84 ಕೋಟಿಯ ಅಕ್ರಮವಾಗಿ ಬಳಕೆ ಮಾಡಲಾಗಿದೆ. ಮಾಜಿ ಸಚಿವ ನಾಗೇಂದ್ರ ಅವರು ನಕಲಿ ಖಾತೆ ಸೃಷ್ಟಿಸಲು ಸೂಚಿಸಿ, ಹಣ ವರ್ಗಾವಣೆ ಮಾಡಲು ನಿರ್ದೇಶಿಸಿದ್ದಾರೆ. ನಾಗೇಂದ್ರ ಸೂಚನೆಯಂತೆ ಪದ್ಮನಾಭ ಅವರಿಂದ ಹಣ ವರ್ಗಾವಣೆಯಾಗಿದೆ. ಈ ಪ್ರಕರಣದಲ್ಲಿ ನಾಗೇಂದ್ರ ಒಳಸಂಚು ರೂಪಿಸಿದ್ದು, ಆನಂತರ ಸಾಕ್ಷ್ಯ ನಾಶಕ್ಕೆ ಪ್ರಯತ್ನಿಸಿದ್ದಾರೆ. ಆನಂತರ ವಸಂತ ನಗರದ ಶಾಂಗ್ರಿಲಾ ಹೋಟೆಲ್‌ನಲ್ಲಿ ನಾಗೇಂದ್ರ ಸಭೆ ನಡೆಸಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮನಕ್ಕೆ ಪದ್ಮನಾಭ ಅವರನ್ನು ನಾಗೇಂದ್ರ ಆಪ್ತನಾದ ನೆಕ್ಕಂಟಿ ನಾಗರಾಜ್ ಮೂಲಕ ನೇಮಕ ಮಾಡಲಾಗಿತ್ತು ಎಂದು ನಾಗೇಂದ್ರ ವಿರುದ್ಧ ಇ ಡಿ ಆರೋಪಿಸಿದೆ.
ಲೋಕಸಭಾ ಚುನಾವಣೆಯಲ್ಲಿ ಬಳ್ಳಾರಿ ಕ್ಷೇತ್ರದಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣವನ್ನು ಬಳಕೆ ಮಾಡಲಾಗಿದೆ. ನಾಗೇಂದ್ರನ ಆಪ್ತ ಸಹಾಯಕನಾದ 8ನೇ ಆರೋಪಿ ವಿಜಯ್ ಕುಮಾರ್ ಮೊಬೈಲಿನಲ್ಲಿ ಹಣದ ಮೊತ್ತ, ಯಾರಿಗೆಲ್ಲಾ ಪೂರೈಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ ಎಂದು ಆರೋಪ ಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ. ಬಳ್ಳಾರಿ ಲೋಕಸಭಾ ಚುನಾವಣೆಗೆ 20.19 ಕೋಟಿ ರೂಪಾಯಿ ಬಳಕೆ ಮಾಡಲಾಗಿದೆ ಎಂದು ವಿವರಿಸಲಾಗಿದೆ. ಈ ಸಂಬಂಧ ಎಲ್ಲಾ ಆರೋಪಿಗಳ ಹೇಳಿಕೆ ದಾಖಲಿಸಲಾಗಿದೆ ಎನ್ನಲಾಗಿದೆ.