ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ (ಕೆಎಂವಿಎಸ್‌ಟಿಡಿಸಿಎಲ್) ಹಣ ದುರ್ಬಳಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಗಮದ ಮಾಜಿ ವ್ಯವಸ್ಥಾಪಕ ನಿರ್ದೇಶಕ ಜೆ ಜಿ ಪದ್ಮನಾಭ, ಹೈದರಾಬಾದ್‌ನ ಎಂ ಚಂದ್ರಮೋಹನ್, ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಜಿ ಕೆ ಜಗದೀಶ್, ಆಂಧ್ರಪ್ರದೇಶದ ಕೆ ಶ್ರೀನಿವಾಸ್ ರಾವ್ ಅವರು ಜಾಮೀನು ಕೋರಿ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿರುವ ಆರೋಪಿಗಳು ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಗಳು ಇಂದು ನ್ಯಾಯಮೂರ್ತಿ ಎಸ್ ವಿಶ್ವಜಿತ್ ಶೆಟ್ಟಿ ಅವರ ಏಕಸದಸ್ಯ ಪೀಠದ ಮುಂದೆ ವಿಚಾರಣೆಗೆ ನಿಗದಿಯಾಗಿದ್ದವು.
ವಿಚಾರಣೆಯಲ್ಲಿ ಭಾಗಿಯಾಗಿದ್ದ ರಾಜ್ಯ ಹೆಚ್ಚುವರಿ ವಿಶೇಷ ಸರ್ಕಾರಿ ಅಭಿಯೋಜಕರಾದ ಬಿ ಎನ್ ಜಗದೀಶ್ ಅವರು ಪ್ರಕರಣದಲ್ಲಿನ ಮತ್ತೊಬ್ಬ ಆರೋಪಿ ಜಾಮೀನು ಕೋರಿದ್ದಾರೆ. ಎಲ್ಲಾ ಅರ್ಜಿಗಳನ್ನು ಒಟ್ಟಿಗೆ ವಿಚಾರಣೆಗೆ ನಿಗದಿಗೊಳಿಸಬೇಕು ಎಂದರು.
ಇದನ್ನು ಆಲಿಸಿದ ಪೀಠವು ಎಲ್ಲಾ ಪ್ರಕರಣಗಳನ್ನು ಒಟ್ಟಾಗಿ ವಿಚಾರಣೆಗೆ ನಿಗದಿಗೊಳಿಸಲು ರಿಜಿಸ್ಟ್ರಿಗೆ ಆದೇಶಿಸಿ, ವಿಚಾರಣೆಯನ್ನು ನವೆಂಬರ್ 29ಕ್ಕೆ ಮುಂದೂಡಿತು.
ಆರೋಪಿ ಮಣಿಮೇಕಳೈ ಅವರ ಜಾಮೀನು ಅರ್ಜಿಯನ್ನು ಹೈಕೋರ್ಟ್ 11.09.2024ರಂದು ತಿರಸ್ಕರಿಸಿತ್ತು. ಪರಶುರಾಮ್ ದುರ್ಗಣ್ಣವರ್ ನಿರೀಕ್ಷಣಾ ಜಾಮೀನು ಅರ್ಜಿಯನ್ನು 22.08.2024ರಂದು ತಿರಸ್ಕರಿಸಿದ್ದ ಹೈಕೋರ್ಟ್, ಪ್ರಕರಣದಲ್ಲಿನ 12ನೇ ಆರೋಪಿ ನೆಕ್ಕುಂಟಿ ನಾಗರಾಜ್‌ಗೆ 05.09.2024ರಂದು ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು.
ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್‌ಗಳಾದ 149, 409, 420, 467, 468, 471 ಅಡಿ ಪ್ರಕರಣ ದಾಖಲಾಗಿದೆ. ಹಗರಣದ ತನಿಖೆಗಾಗಿ ಮೇ 31ರಂದು ರಾಜ್ಯ ಸರ್ಕಾರ ಎಸ್‌ಐಟಿ ರಚಿಸಿತ್ತು.
ವಿಚಾರಣಾಧೀನ ನ್ಯಾಯಾಲಯಕ್ಕೆ ವಿಶೇಷ ತನಿಖಾ ದಳವು (ಎಸ್‌ಐಟಿ) ಏಳು ಸಂಪುಟಗಳಲ್ಲಿ 3,072 ಪುಟಗಳ ಪ್ರಾಥಮಿಕ ಆರೋಪ ಪಟ್ಟಿ ಸಲ್ಲಿಸಿದೆ.