ವಾಲ್ಮೀಕಿ ನಿಗಮದ ಹಣ ದುರ್ಬಳಕೆ ಪ್ರಕರಣ: ಮಾಜಿ ಸಚಿವ ನಾಗೇಂದ್ರ 14 ದಿನ ನ್ಯಾಯಾಂಗ ಬಂಧನಕ್ಕೆ

ಆರೋಪಿ ನಾಗೇಂದ್ರ ಅವರನ್ನು ಬಿಗಿ ಪೊಲೀಸ್ ಭದ್ರತೆಯಲ್ಲಿ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್‌ ಅವರ ಮುಂದೆ ಹಾಜರುಪಡಿಸಲಾಯಿತು.
B Nagendra
B Nagendra
Published on

ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬ್ಯಾಂಕ್ ಖಾತೆಯಿಂದ ₹95 ಕೋಟಿ ಮೊತ್ತವನ್ನು ಅಕ್ರಮವಾಗಿ ವರ್ಗಾವಣೆ ಮಾಡಲಾಗಿದೆ ಎನ್ನಲಾದ ಹಗರಣದ ಆರೋಪಿಯಾಗಿ ಜಾರಿ ನಿರ್ದೇಶನಾಲಯದ (ಇ ಡಿ) ಕಸ್ಟಡಿಯಲ್ಲಿದ್ದ ಮಾಜಿ ಸಚಿವ ಬಿ ನಾಗೇಂದ್ರ ಅವರನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸೋಮವಾರ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿದೆ.

ಆರೋಪಿ ನಾಗೇಂದ್ರ ಅವರನ್ನು ಬಿಗಿ ಪೊಲೀಸ್ ಭದ್ರತೆಯಲ್ಲಿ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್‌ ಅವರ ಮುಂದೆ ಹಾಜರುಪಡಿಸಲಾಯಿತು.

ಜಾರಿ ನಿರ್ದೇಶನಾಲಯದ ಪರ ವಕೀಲ ಪಿ ಪ್ರಸನ್ನ ಕುಮಾರ್ ಅವರು, ಪ್ರಕರಣದ ಮತ್ತೊಬ್ಬ ಆರೋಪಿಯಾಗಿ ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಹೈದರಾಬಾದ್‌ನ ಸತ್ಯ ನಾರಾಯಣ ವರ್ಮ ಅವರನ್ನು ಬಾಡಿ ವಾರಂಟ್ ಮುಖಾಂತರ ವಶಕ್ಕೆ ನೀಡುವಂತೆ ಕೋರಿ ಅರ್ಜಿ ಸಲ್ಲಿಸಿದರು.

ಈ ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಾಧೀಶರು ಆರೋಪಿ ಸತ್ಯನಾರಾಯಣ ವರ್ಮ ಅವರನ್ನು ಮಂಗಳವಾರ (ಜುಲೈ 23) ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಆದೇಶಿಸಿದರು.

ಮೊದಲಿಗೆ ಆರು ದಿನ ಮತ್ತು ಆನಂತರ ಐದು ದಿನ ನಾಗೇಂದ್ರ ಅವರನ್ನು ಜನಪ್ರತಿನಿಧಿಗಳ ನ್ಯಾಯಾಲಯವು ಇ ಡಿ ಕಸ್ಟಡಿಗೆ ತನಿಖೆಗಾಗಿ ನೀಡಿತ್ತು.

ಜಾರಿ ನಿರ್ದೇಶನಾಲಯವು ನಾಗೇಂದ್ರ ಸೇರಿ ಹಲವರ ವಿರುದ್ಧ ಅಕ್ರಮ ಹಣ ವರ್ಗಾವಣೆ ಕಾಯಿದೆ ಸೆಕ್ಷನ್‌ 3 ಮತ್ತು 4ರ ಅಡಿ ಪ್ರಕರಣ ದಾಖಲಿಸಿ, ವಿಚಾರಣೆ ನಡೆಸುತ್ತಿದೆ.

ನಿಗಮದ ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡಿದ ಹಗರಣದ ಕುರಿತು ರಾಜ್ಯ ಸರ್ಕಾರ ರಚಿಸಿರುವ ವಿಶೇಷ ತನಿಖಾ ದಳ ಮತ್ತು ಸಿಬಿಐ ಪ್ರತ್ಯೇಕವಾಗಿ ತನಿಖೆ ನಡೆಸುತ್ತಿವೆ. ಅಕ್ರಮ ಹಣ ವರ್ಗಾವಣೆ ತಡೆ ಕಾಯಿದೆ ಅಡಿಯಲ್ಲಿ ಪ್ರಕರಣ ದಾಖಲಿಸಿರುವ ಜಾರಿ ನಿರ್ದೇಶನಾಲಯವು ಪ್ರತ್ಯೇಕವಾಗಿ ತನಿಖೆ ನಡೆಸುತ್ತಿದೆ.

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಿಂದಿನ ವ್ಯವಸ್ಥಾಪಕ ನಿರ್ದೇಶಕ ಜೆ ಬಿ ಪದ್ಮನಾಭ ಮತ್ತು ಹಿಂದಿನ ಲೆಕ್ಕಾಧಿಕಾರಿ ಪರಶುರಾಮ ದುರ್ಗಣ್ಣವರ ಅವರು ಎಸ್‌ಐಟಿ ಕಸ್ಟಡಿಯಲ್ಲಿದ್ದಾರೆ. ಬೆಂಗಳೂರಿನ ಹೈಗ್ರೌಂಡ್ಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದ್ದು, ಅದರ ತನಿಖೆಯನ್ನು ಎಸ್‌ಐಟಿ ನಡೆಸುತ್ತಿದೆ.

Kannada Bar & Bench
kannada.barandbench.com