ಸಂತ್ರಸ್ತೆ ಅಪಹರಣ ಪ್ರಕರಣ: ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕರಿಸಿದ ವಿಶೇಷ ನ್ಯಾಯಾಲಯ

ಮೇ 29ರಂದು ವಿಚಾರಣೆ ಪೂರ್ಣಗೊಳಿಸಿ ಕಾಯ್ದಿರಿಸಿದ್ದ ಆದೇಶವನ್ನು ಜನಪ್ರತಿನಿಧಿಗಳ ವಿಶೇಷ ಸತ್ರ ನ್ಯಾಯಾಲಯ ಇಂದು ಪ್ರಕಟಿಸಿತು.
ಸಂತ್ರಸ್ತೆ ಅಪಹರಣ ಪ್ರಕರಣ: ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕರಿಸಿದ ವಿಶೇಷ ನ್ಯಾಯಾಲಯ
Published on

ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧದ ಅತ್ಯಾಚಾರ ಹಗರಣದ ಸಂತ್ರಸ್ತ ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ತಿರಸ್ಕರಿಸಿದೆ.

ವಿಶೇಷ ತನಿಖಾ ದಳದಿಂದ ಬಂಧನ ಭೀತಿ ಎದುರಿಸುತ್ತಿರುವುದರಿಂದ ನಿರೀಕ್ಷಣಾ ಜಾಮೀನು ಮಂಜೂರು ಮಾಡುವಂತೆ ಕೋರಿ ಭವಾನಿ ರೇವಣ್ಣ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಮೇ 29ರಂದು ಪೂರ್ಣಗೊಳಿಸಿ ಕಾಯ್ದಿರಿಸಿದ್ದ ಆದೇಶವನ್ನು ಜನಪ್ರತಿನಿಧಿಗಳ ವಿಶೇಷ ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್‌ ಗಜಾನನ ಭಟ್‌ ಇಂದು ಪ್ರಕಟಿಸಿದರು. ವಿಸ್ತೃತ ಆದೇಶ ಇನ್ನಷ್ಟೇ ಪ್ರಕಟವಾಗಬೇಕಿದೆ.

ವಿಶೇಷ ಸರ್ಕಾರಿ ಅಭಿಯೋಜಕ ಬಿ ಎನ್‌ ಜಗದೀಶ್‌ ಅವರು “ಪ್ರಕರಣದ ಅನೇಕ ಆರೋಪಿಗಳ ಜೊತೆ ಭವಾನಿ ಫೋನ್‌ ಸಂಭಾಷಣೆ ನಡೆಸಿರುವುದು ತನಿಖೆಯಲ್ಲಿ ಪತ್ತೆಯಾಗಿದೆ. ಈ ಸಂಭಾಷಣೆಯಲ್ಲಿ ಭವಾನಿಯವರ ಪಾತ್ರವನ್ನು ನಿರೂಪಿಸುವ ಹಲವು ಸ್ವಾರಸ್ಯಕರ ಅಂಶಗಳಿವೆ” ಎಂದಿದ್ದರು.

ಭವಾನಿ ಪರ ಹಿರಿಯ ವಕೀಲ ಸಂದೇಶ್‌ ಚೌಟ ಅವರು “ಭವಾನಿ ವಿರುದ್ಧದ ಆರೋಪಗಳು ರಾಜಕೀಯ ಷಡ್ಯಂತ್ರದಿಂದ ಕೂಡಿವೆ. ಅವರ ವಿರುದ್ಧ ಯಾವುದೇ ಸಾಕ್ಷ್ಯಾಧಾರ ಇಲ್ಲ. ಆರೋಪಿಯು ತನಿಖೆಗೆ ಸಂಪೂರ್ಣ ಸಹಕಾರ ನೀಡಲಿದ್ದಾರೆ. ಆದ್ದರಿಂದ, ನಿರೀಕ್ಷಣಾ ಜಾಮೀನು ಮಂಜೂರು ಮಾಡಬೇಕು” ಎಂದು ಕೋರಿದ್ದರು.

Also Read
ಸಂತ್ರಸ್ತೆ ಅಪಹರಣ ಪ್ರಕರಣ: ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ಆದೇಶ ಕಾಯ್ದಿರಿಸಿದ ವಿಶೇಷ ನ್ಯಾಯಾಲಯ

ಪ್ರಜ್ವಲ್‌ ಮತ್ತು ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ಅವರಿಗೆ ನೋಟಿಸ್‌ ಜಾರಿ ಮಾಡಲಾಗಿದೆ ಎಂದು ಮಾಧ್ಯಮಗಳು ಬಿಂಬಿಸಿವೆ. ಎಸ್‌ಐಟಿಯು ಮಾಧ್ಯಮಗಳು ಬಿಂಬಿಸಿದಂತೆ ಯಾವುದೇ ತೆರನಾದ ನೋಟಿಸ್‌ ಜಾರಿ ಮಾಡಿಲ್ಲ. ಮಾಧ್ಯಮಗಳ ವರದಿಯಿಂದ ತನಿಖಾ ಸಂಸ್ಥೆಯು ಬಂಧಿಸುವ ಸಾಧ್ಯತೆ ಹಿನ್ನೆಲೆಯಲ್ಲಿ ನಿರೀಕ್ಷಣಾ ಜಾಮೀನು ಕೋರುತ್ತಿರುವುದಾಗಿ ಭವಾನಿ ಪರ ವಕೀಲರು ವಿಚಾರಣೆಯ ವೇಳೆ ವಾದಿಸಿದ್ದರು.

ಪ್ರಕರಣದ ಹಿನ್ನೆಲೆ: ಸಂತ್ರಸ್ತ ಮಹಿಳೆಯನ್ನು ಅಪಹರಿಸಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಕೆ ಆರ್‌ ನಗರ ಠಾಣೆಯಲ್ಲಿ ಐಪಿಸಿ ಸೆಕ್ಷನ್‌ 364ಎ, 365 ಮತ್ತು 34ರ ಅಡಿ ಎಫ್‌ಐಆರ್‌ ದಾಖಲಿಸಲಾಗಿದೆ. ಇದರಲ್ಲಿ ಭವಾನಿ ಪತಿ ಎಚ್‌ ಡಿ ರೇವಣ್ಣ ಮೊದಲ ಆರೋಪಿಯಾಗಿದ್ದು, ಸತೀಶ ಬಾಬಣ್ಣ ಎರಡನೇ ಆರೋಪಿಯಾಗಿದ್ದಾರೆ.

Kannada Bar & Bench
kannada.barandbench.com