ಕಾಂಗ್ರೆಸ್ ನಾಯಕರನ್ನು ಕೀಳಾಗಿ ಬಿಂಬಿಸಿ, ಧರ್ಮ, ಸಮುದಾಯಗಳ ನಡುವೆ ದ್ವೇಷ ಹುಟ್ಟಿಸುವ ರೀತಿಯಲ್ಲಿ ಅನಿಮೇಟೆಡ್ ವಿಡಿಯೋ ಪೋಸ್ಟ್ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿಯ ಐಟಿ ಸೆಲ್ ಸಂಚಾಲಕ ಪ್ರಶಾಂತ್ ಮಾಕನೂರ್‌ಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಗುರುವಾರ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ಬೆಂಗಳೂರಿನ ಪ್ರಶಾಂತ್ ಮಾಕನೂರ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಪುರಸ್ಕರಿಸಿದ್ದಾರೆ.
ಅರ್ಜಿದಾರರು 50 ಸಾವಿರ ರೂಪಾಯಿ ಮೌಲ್ಯದ ವೈಯಕ್ತಿಕ ಬಾಂಡ್, ಅಷ್ಟೇ ಮೊತ್ತದ ಒಬ್ಬರ ಭದ್ರತೆ ಒದಗಿಸಬೇಕು. ಸಾಕ್ಷ್ಯ ತಿರುಚಬಾರದು ಮತ್ತು ಬೆದರಿಕೆ ಒಡ್ಡಬಾರದು ಹಾಗೂ ತನಿಖಾಧಿಕಾರಿ ಸೂಚಿಸಿದಾಗ ವಿಚಾರಣೆಗೆ ಹಾಜರಾಗಬೇಕು ಎಂದು ನ್ಯಾಯಾಲಯ ಜಾಮೀನು ನೀಡುವ ವೇಳೆ ಷರತ್ತುಗಳನ್ನು ವಿಧಿಸಿದೆ.
ಅರ್ಜಿದಾರರ ವಿರುದ್ಧದ ಆರೋಪವು ಜಾಮೀನುರಹಿತವಾಗಿದ್ದು, ಪ್ರತಿವಾದಿ ಪೊಲೀಸರು ಅವರನ್ನು ಬಂಧಿಸಿದರೆ ನಿರೀಕ್ಷಣಾ ಜಾಮೀನು ಕೋರಿಕೆಯು ಅಸ್ತಿತ್ವ ಕಳೆದುಕೊಳ್ಳಲಿದೆ. ಅರ್ಜಿದಾರರ ಸ್ವಾತಂತ್ರ್ಯ ಮತ್ತು ಬದುಕು ರಕ್ಷಿಸುವುದು ಮಹತ್ವದ್ದಾಗಿದೆ. ಹೀಗಾಗಿ, ಅರ್ಜಿದಾರರು ನಿರೀಕ್ಷಣಾ ಜಾಮೀನು ಪಡೆಯುವ ಆಧಾರಗಳನ್ನು ನ್ಯಾಯಾಲಯಕ್ಕೆ ತೋರ್ಪಡಿಸಿದ್ದು, ಪ್ರಾಸಿಕ್ಯೂಷನ್‌ನಿಂದ ಬಂಧನ ಭೀತಿ ಎದುರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಷರತ್ತುಗಳನ್ನು ವಿಧಿಸಿ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಬಹುದಾಗಿದೆ ಎಂದು ನ್ಯಾಯಾಲಯ ಹೇಳಿದೆ.
ಪ್ರಕರಣದ ಹಿನ್ನೆಲೆ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ, ರಾಹ್ಯ ಘಟಕದ ಅಧ್ಯಕ್ಷ ಬಿ ವೈ ವಿಜಯೇಂದ್ರ ಮತ್ತು ರಾಷ್ಟ್ರೀಯ ಸಾಮಾಜಿಕ ಜಾಲತಾಣ ವಿಭಾಗದ ಮುಖ್ಯಸ್ಥ ಅಮಿತ್ ಮಾಳವಿಯಾ ಸೂಚನೆಯ ಮೇರೆಗೆ ಬಿಜೆಪಿಯ ಎಕ್ಸ್ ಖಾತೆಯಲ್ಲಿ ಕಾಂಗ್ರೆಸ್ ನಾಯಕರನ್ನು ಸಮಾಜಗಳ ನಡುವೆ ದ್ವೇಷ ಹರಡುವ ರೀತಿ ಬಿಂಬಿಸಿ ಆನಿಮೇಟೆಡ್ ವಿಡಿಯೊ ಪ್ರಸಾರ ಮಾಡಲಾಗಿದೆ ಎಂದು ಆಕ್ಷೇಪಿಸಿ ಕಾಂಗ್ರೆಸ್ ಮಾಧ್ಯಮ ಮತ್ತು ಸಂವಹನ ವಿಭಾಗದ ಮುಖ್ಯಸ್ಥ ರಮೇಶ್ ಬಾಬು ಮೇ 5ರಂದು ನೀಡಿದ ದೂರಿನ ಅನ್ವಯ ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 505(2) ಮತ್ತು ಪ್ರಜಾಪ್ರತಿನಿಧಿ ಕಾಯಿದೆ ಸೆಕ್ಷನ್ 125 ಅಡಿ ಪ್ರಕರಣ ದಾಖಲಿಸಲಾಗಿತ್ತು.
ಪರಿಶಿಷ್ಟ ವಿಶೇಷ ಘಟಕ ಹಾಗೂ ಗಿರಿಜನ ಉಪ ಯೋಜನೆ ಅಡಿ ಎರಡು ವರ್ಷಗಳಿಂದ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಜನರಿಗೆ ಅನುದಾನ ನೀಡಿಲ್ಲ. ಆದರೆ, ಈಚೆಗೆ ಹುಬ್ಬಳ್ಳಿಯಲ್ಲಿ ನಡೆದಿದ್ದ ಅಲ್ಪಸಂಖ್ಯಾತರ ಸಮಾವೇಶದಲ್ಲಿ ಮುಸ್ಲಿಮರಿಗೆ 10 ಸಾವಿರ ಕೋಟಿ ರೂಪಾಯಿ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಈ ಮೂಲಕ ತುಷ್ಟೀಕರಣ ರಾಜಕಾರಣ ಮಾಡುತ್ತಿದ್ದಾರೆ ಎಂದು ಬಿಂಬಿಸಿ ಬಿಜೆಪಿ ಆನಿಮೇಟೆಡ್ ವಿಡಿಯೊವನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿತ್ತು.