ಮತದಾರರ ಮಾಹಿತಿ ಕಳವು ಪ್ರಕರಣ: ಐಎಎಸ್‌ ಅಧಿಕಾರಿ ಶ್ರೀನಿವಾಸ್‌ ನಿರೀಕ್ಷಣಾ ಜಾಮೀನು ಅರ್ಜಿ ವಜಾ ಮಾಡಿದ ನ್ಯಾಯಾಲಯ

ಚಿಲುಮೆ ಸರ್ಕಾರೇತರ ಸಂಸ್ಥೆಯ ಸಿಬ್ಬಂದಿಯಾದ ಜ್ಯೋತಿಲಕ್ಷ್ಮಿ ಮತ್ತು ಕೆಂಪೇಗೌಡ ಅವರ ನಿರೀಕ್ಷಣಾ ಜಾಮೀನು ಅರ್ಜಿಗಳನ್ನು ನ್ಯಾಯಾಲಯ ವಜಾ ಮಾಡಿದೆ.
ಮತದಾರರ ಮಾಹಿತಿ ಕಳವು ಪ್ರಕರಣ: ಐಎಎಸ್‌ ಅಧಿಕಾರಿ ಶ್ರೀನಿವಾಸ್‌ ನಿರೀಕ್ಷಣಾ ಜಾಮೀನು ಅರ್ಜಿ ವಜಾ ಮಾಡಿದ ನ್ಯಾಯಾಲಯ
Published on

ಮತದಾರರ ಮಾಹಿತಿ ದುರುಪಯೋಗ ಪ್ರಕರಣದಲ್ಲಿ ಲೋಪ ತಡೆಯಲು ವಿಫಲವಾದ ಆರೋಪದಲ್ಲಿ ಅಮಾನತುಗೊಂಡಿರುವ ಬೆಂಗಳೂರು ನಗರ ಜಿಲ್ಲಾಧಿಕಾರಿ ಮತ್ತು ಮಹದೇವಪುರ ವಿಧಾನಸಭಾ ಕ್ಷೇತ್ರದ ಹೆಚ್ಚುವರಿ ಜಿಲ್ಲಾ ಚುನಾವಣಾಧಿಕಾರಿಯಾಗಿದ್ದ ಕೆ ಶ್ರೀನಿವಾಸ್‌ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಗುರುವಾರ ಬೆಂಗಳೂರಿನ ನ್ಯಾಯಾಲಯವು ವಜಾ ಮಾಡಿದೆ.

ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಕೇಂದ್ರ ಚುನಾವಣಾ ಆಯೋಗದ ನಿರ್ದೇಶನದಂತೆ ಅಮಾನತುಗೊಂಡಿರುವ ಶ್ರೀನಿವಾಸ್‌ ಹಾಗೂ ಚಿಲುಮೆ ಸರ್ಕಾರೇತರ ಸಂಸ್ಥೆಯ ಸಿಬ್ಬಂದಿಯಾದ ಜ್ಯೋತಿಲಕ್ಷ್ಮಿ ಮತ್ತು ಕೆಂಪೇಗೌಡ ಅವರ ನಿರೀಕ್ಷಣಾ ಜಾಮೀನು ಅರ್ಜಿಗಳನ್ನು 65ನೇ ಹೆಚ್ಚುವರಿ ಸಿಟಿ ಸಿವಿಲ್‌ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಸಿ ಆರ್‌ ಹೇಮಂತ್‌ ಕುಮಾರ್‌ ಅವರು ವಜಾ ಮಾಡಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಹಾಜರಾಗುವಂತೆ ಶ್ರೀನಿವಾಸ್‌ ಅವರಿಗೆ ಡಿಸೆಂಬರ್‌ 2ರಂದು ಬೆಂಗಳೂರಿನ ಹಲಸೂರು ಗೇಟ್‌ ಪೊಲೀಸರು ನೋಟಿಸ್‌ ನೀಡಿದ್ದರು. ಈ ಮಧ್ಯೆ, ಅಮಾನತು ಆದೇಶಕ್ಕೆ ತಡೆ ನೀಡುವಂತೆ ಕೋರಿ ಶ್ರೀನಿವಾಸ್‌ ಅವರು ಕರ್ನಾಟಕ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ. ಆದರೆ, ನ್ಯಾಯಾಲಯವು ಅವರ ಕೋರಿಕೆಯನ್ನು ಇದುವರೆಗೂ ಪುರಸ್ಕರಿಸಿಲ್ಲ.

Also Read
ಮತದಾರರ ಮಾಹಿತಿ ಕಳವು ಪ್ರಕರಣ: ಶ್ರೀನಿವಾಸ್ ಅಮಾನತು ತಡೆಗೆ ನಕಾರ; ಹೈಕೋರ್ಟ್‌ ಕದ ತಟ್ಟಿದ ಮತ್ತೊಬ್ಬ ಐಎಎಸ್‌ ಅಧಿಕಾರಿ

ಶಿವಾಜಿನಗರ, ಚಿಕ್ಕಪೇಟೆ ಮತ್ತು ಮಹದೇವಪುರ ವಿಧಾನಸಭಾ ಕ್ಷೇತ್ರಗಳಲ್ಲಿ ಖಾಸಗಿ ವ್ಯಕ್ತಿಗಳಿಗೆ ಮತಗಟ್ಟೆ ಹಂತದ ಅಧಿಕಾರಿಗಳು (ಬಿಎಲ್‌ಒ/ಬಿಎಲ್‌ಸಿ) ಎಂದು ಗುರುತಿನ ಚೀಟಿ ವಿತರಿಸಿರುವುದು ಪೊಲೀಸ್‌ ತನಿಖೆಯಲ್ಲಿ ಪತ್ತೆಯಾಗಿದೆ. ಈ ಕ್ಷೇತ್ರಗಳಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ನಡೆದಿರುವ ಎಲ್ಲಾ ಪ್ರಕ್ರಿಯೆಗಳನ್ನು ಸಮಗ್ರವಾಗಿ ಪರಿಶೀಲನೆ ನಡೆಸಬೇಕು ಎಂದು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದ್ದ ಕೇಂದ್ರ ಚುನಾವಣಾ ಆಯೋಗವು ಲೋಪ ತಡೆಯುವಲ್ಲಿ ವಿಫಲರಾದ ಆರೋಪದಲ್ಲಿ ಶ್ರೀನಿವಾಸ್‌ ಮತ್ತು ಬಿಬಿಎಂಪಿ ವಿಶೇಷ ಆಯುಕ್ತರಾಗಿದ್ದ ಎಸ್‌ ರಂಗಪ್ಪ ಅವರ ಅಮಾನತಿಗೆ ಆದೇಶಿಸಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಅವರನ್ನು ಅಮಾನತು ಮಾಡಿದೆ.

Kannada Bar & Bench
kannada.barandbench.com