ಮತದಾರರ ಮಾಹಿತಿ ಕಳವು ಪ್ರಕರಣ: ಶ್ರೀನಿವಾಸ್‌ಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದ ಹೈಕೋರ್ಟ್‌

ಶ್ರೀನಿವಾಸ್‌ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ನ್ಯಾಯಮೂರ್ತಿ ಎಸ್‌ ರಾಚಯ್ಯ ಅವರ ನೇತೃತ್ವದ ರಜಾಕಾಲೀನ ಏಕಸದಸ್ಯ ಪೀಠವು ಮಾನ್ಯ ಮಾಡಿದೆ.
ಮತದಾರರ ಮಾಹಿತಿ ಕಳವು ಪ್ರಕರಣ: ಶ್ರೀನಿವಾಸ್‌ಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದ ಹೈಕೋರ್ಟ್‌

ಮತದಾರರ ಮಾಹಿತಿ ದುರುಪಯೋಗ ಪ್ರಕರಣದಲ್ಲಿ ಲೋಪ ತಡೆಯಲು ವಿಫಲವಾದ ಆರೋಪದಲ್ಲಿ ಅಮಾನತುಗೊಂಡಿರುವ ಬೆಂಗಳೂರು ನಗರ ಜಿಲ್ಲಾಧಿಕಾರಿ ಮತ್ತು ಮಹದೇವಪುರ ವಿಧಾನಸಭಾ ಕ್ಷೇತ್ರದ ಹೆಚ್ಚುವರಿ ಜಿಲ್ಲಾ ಚುನಾವಣಾಧಿಕಾರಿಯಾಗಿದ್ದ ಕೆ ಶ್ರೀನಿವಾಸ್‌ ಅವರಿಗೆ ಗುರುವಾರ ಕರ್ನಾಟಕ ಹೈಕೋರ್ಟ್‌ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ಶ್ರೀನಿವಾಸ್‌ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ನ್ಯಾಯಮೂರ್ತಿ ಎಸ್‌ ರಾಚಯ್ಯ ಅವರ ನೇತೃತ್ವದ ರಜಾಕಾಲೀನ ಏಕಸದಸ್ಯ ಪೀಠವು ಮಾನ್ಯ ಮಾಡಿದೆ.

ವಿಚಾರಣೆಯಲ್ಲಿ ಅರ್ಜಿದಾರರು ಭಾಗವಹಿಸಿದ್ದು, ಅದರಲ್ಲಿ ಅವರ ಪಾತ್ರವಿಲ್ಲ ಎಂಬುದು ತಿಳಿದಿದೆ. ಮಾಧ್ಯಮ ಅಪಪ್ರಚಾರ ಮತ್ತು ಒತ್ತಡದಿಂದ ಅರ್ಜಿದಾರರನ್ನು ಬಂಧಿಸುವ ಸಾಧ್ಯತೆ ಇದೆ. ಅರ್ಜಿದಾರರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡುವುದರಿಂದ ನ್ಯಾಯಸಮ್ಮತ ತನಿಖೆಗೆ ಯಾವುದೇ ಹಿನ್ನಡೆಯಾಗುವುದಿಲ್ಲ. ಬಂಧನವಾದಲ್ಲಿ ಅರ್ಜಿದಾರರಿಗೆ ಕಿರುಕುಳ, ಅವಮಾನವಾಗಲಿದ್ದು, ವಶಕ್ಕೆ ಪಡೆಯುವುದು ಅಸಮರ್ಥನೀಯ ಎಂದು ವಾದಿಸಲಾಗಿದೆ.

ಮಾಧ್ಯಮಗಳಿಂದ ವಿಚಾರಣೆ ಮತ್ತು ಅಪಪ್ರಚಾರದ ಹಿನ್ನೆಲೆಯಲ್ಲಿ ಸೇವೆಯಿಂದ ಅಮಾನತು ಮಾಡಲಾಗಿದೆ. ಮತದಾರರ ಮಾಹಿತಿ ಸಂಗ್ರಹಿಸುವ ಚಟುವಟಿಕೆಯಲ್ಲಿ ತನ್ನ ಯಾವುದೇ ಪಾತ್ರವಿಲ್ಲ. ಇದಕ್ಕೆ ಸರ್ಕಾರೇತರ ಸಂಸ್ಥೆ ಚಿಲುಮೆಯ ಉದ್ಯೋಗಿಗಳು ಉತ್ತರಿಸಬೇಕಿದೆ ಎಂದು ಅರ್ಜಿದಾರರು ಮನವಿಯಲ್ಲಿ ಉಲ್ಲೇಖಿಸಿದ್ದಾರೆ.

Also Read
ಮತದಾರರ ಮಾಹಿತಿ ಕಳವು ಪ್ರಕರಣ: ಐಎಎಸ್‌ ಅಧಿಕಾರಿ ಶ್ರೀನಿವಾಸ್‌ ನಿರೀಕ್ಷಣಾ ಜಾಮೀನು ಅರ್ಜಿ ವಜಾ ಮಾಡಿದ ನ್ಯಾಯಾಲಯ

ಶ್ರೀನಿವಾಸ್‌ ಅವರು ಮಹದೇವಪುರ ವಿಧಾನಸಭಾ ಕ್ಷೇತ್ರದ ಹೆಚ್ಚುವರಿ ಜಿಲ್ಲಾ ಚುನಾವಣಾಧಿಕಾರಿಯಾಗಿದ್ದರು. ಇವರನ್ನು ಸೇವೆಯಿಂದ ಅಮಾನತು ಮಾಡಿ, ಇಲಾಖಾ ವಿಚಾರಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಚುನಾವಣಾ ಆಯೋಗವು ನಿರ್ದೇಶಿಸಿತ್ತು. ಈ ಹಿನ್ನೆಲೆಯಲ್ಲಿ ಶ್ರೀನಿವಾಸ್‌ ಅವರನ್ನು ಅಮಾನತು ಮಾಡಿದ್ದು, ಲಿಖಿತ ಅನುಮತಿ ಇಲ್ಲದೆ ಕೇಂದ್ರಸ್ಥಾನ ತೊರೆಯದಂತೆ ಸರ್ಕಾರವು ನಿರ್ಬಂಧ ವಿಧಿಸಿದೆ.

Also Read
ಮತದಾರರ ಮಾಹಿತಿ ಕಳವು ಪ್ರಕರಣ: ಶ್ರೀನಿವಾಸ್ ಅಮಾನತು ತಡೆಗೆ ನಕಾರ; ಹೈಕೋರ್ಟ್‌ ಕದ ತಟ್ಟಿದ ಮತ್ತೊಬ್ಬ ಐಎಎಸ್‌ ಅಧಿಕಾರಿ

ಶಿವಾಜಿನಗರ, ಚಿಕ್ಕಪೇಟೆ ಮತ್ತು ಮಹದೇವಪುರ ವಿಧಾನಸಭಾ ಕ್ಷೇತ್ರಗಳಲ್ಲಿ ಖಾಸಗಿ ವ್ಯಕ್ತಿಗಳಿಗೆ ಮತಗಟ್ಟೆ ಹಂತದ ಅಧಿಕಾರಿಗಳು (ಬಿಎಲ್‌ಒ/ಬಿಎಲ್‌ಸಿ) ಎಂದು ಗುರುತಿನ ಚೀಟಿ ವಿತರಿಸಿರುವುದು ಪೊಲೀಸ್‌ ತನಿಖೆಯಲ್ಲಿ ಪತ್ತೆಯಾಗಿದೆ. ಈ ಕ್ಷೇತ್ರಗಳಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ನಡೆದಿರುವ ಎಲ್ಲಾ ಪ್ರಕ್ರಿಯೆಗಳನ್ನು ಸಮಗ್ರವಾಗಿ ಪರಿಶೀಲನೆ ನಡೆಸಬೇಕು ಎಂದು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದ್ದ ಕೇಂದ್ರ ಚುನಾವಣಾ ಆಯೋಗವು ಲೋಪ ತಡೆಯುವಲ್ಲಿ ವಿಫಲರಾದ ಆರೋಪದಲ್ಲಿ ಶ್ರೀನಿವಾಸ್‌ ಮತ್ತು ರಂಗಪ್ಪ ಅವರ ಅಮಾನತಿಗೆ ಸೂಚಿಸಿತ್ತು.

Related Stories

No stories found.
Kannada Bar & Bench
kannada.barandbench.com