ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ಮತ್ತು ಕುಟುಂಬ ಸದಸ್ಯರ ವಿರುದ್ಧ ಹೇಳಿಕೆ ನೀಡದಂತೆ ಅಧೀನ ನ್ಯಾಯಾಲಯ ಮಾಡಿರುವ ಆದೇಶ ಉಲ್ಲಂಘಿಸಿರುವವರ ವಿರುದ್ಧ ಕ್ರಮಕೈಗೊಳ್ಳಲು ಪೊಲೀಸರಿಗೆ ನಿರ್ದೇಶಿಸಬೇಕು ಮತ್ತು ಸೌಜನ್ಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ರೀತಿಯ ತನಿಖೆಯನ್ನಾದರೂ ನಡೆಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ.
ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಪ್ರಾದೇಶಿಕ ನಿರ್ದೇಶಕ ಶೀನಪ್ಪ ಮತ್ತು ವೀರೇಂದ್ರ ಹೆಗ್ಗಡೆ ಅವರ ಸಹೋದರನ ಅಳಿಯ ನಂದೀಶ್ ಕುಮಾರ್ ಜೈನ್ ಅವರು ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯು ಇನ್ನಷ್ಟೇ ವಿಚಾರಣೆಗೆ ನಿಗದಿಯಾಗಬೇಕಿದೆ.
ರಾಜ್ಯ ಸರ್ಕಾರ, ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಪೊಲೀಸ್ ಮಹಾನಿರ್ದೇಶಕರು, ಬೆಂಗಳೂರು ಪೊಲೀಸ್ ಆಯುಕ್ತರು, ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ, ಬಂಟ್ವಾಳ ಉಪ ವಿಭಾಗದ ಡಿವೈಎಸ್‌ಪಿ, ಬೆಳ್ತಂಗಡಿ ಮತ್ತು ಧರ್ಮಸ್ಥಳಗಳ ಠಾಣಾಧಿಕಾರಿಗಳು ಹಾಗೂ ಮಹೇಶ್ ಶೆಟ್ಟಿ ಅಲಿಯಾಸ್ ರವಿ ಅಲಿಯಾಸ್ ಮಹೇಶ್ ತಿಮರೋಡಿ ಅವರನ್ನು ಅರ್ಜಿಯಲ್ಲಿ ಪ್ರತಿವಾದಿಗಳನ್ನಾಗಿ ಮಾಡಲಾಗಿದೆ.
ಸೌಜನ್ಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧೀನ ನ್ಯಾಯಾಲಯಗಳು ವೀರೇಂದ್ರ ಹೆಗ್ಗಡೆ ಮತ್ತು ಕುಟುಂಬ ಸದಸ್ಯರು, ಶ್ರೀಕ್ಷೇತ್ರ ಧರ್ಮಸ್ಥಳದ ವಿರುದ್ಧ ಯಾವುದೇ ಮಾನಹಾನಿ ಹೇಳಿಕೆ ನೀಡದಂತೆ ಹಾಗೂ ಅದನ್ನು ವರದಿ ಮಾಡದಂತೆ ಮಾಧ್ಯಮಗಳು ತಾತ್ಕಾಲಿಕ ಪ್ರತಿಬಂಧಕಾದೇಶ ಮಾಡಿದೆ. ಅದಾಗ್ಯೂ, ಮಹೇಶ್ ತಿಮರೋಡಿ ಅವರು ನಿರಾಧಾರ ಆರೋಪಗಳನ್ನು ವೀರೇಂದ್ರ ಹೆಗ್ಗಡೆ ಮತ್ತು ಕುಟುಂಬಸ್ಥರ ವಿರುದ್ಧ ಮಾಡುತ್ತಿದ್ದಾರೆ. ಭಾರತೀಯ ನ್ಯಾಯಾಂಗ ವ್ಯವಸ್ಥೆಯ ವಿರುದ್ಧವೂ ಆಕ್ಷೇಪಾರ್ಹವಾದ ಮಾತುಗಳನ್ನು ಆಡುವ ಮೂಲಕ ಅಗೌರವ ತೋರಿದ್ದಾರೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.
ಮುಂದುವರೆದು, ಮಹೇಶ್ ತಿಮರೋಡಿ ವಿರುದ್ಧ ಕ್ರಮಕೈಗೊಳ್ಳುವಂತೆ ಪೊಲೀಸ್ ಮಹಾನಿರ್ದೇಶಕರು, ಪೊಲೀಸ್ ಆಯುಕ್ತರು, ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ, ಬಂಟ್ವಾಳ ಉಪ ವಿಭಾಗದ ಡಿವೈಎಸ್‌ಪಿ, ಬೆಳ್ತಂಗಡಿ ಮತ್ತು ಧರ್ಮಸ್ಥಳಗಳ ಠಾಣಾಧಿಕಾರಿಗಳಿಗೆ 2023ರ ಆಗಸ್ಟ್ 5ರಂದು ಮನವಿ ಸಲ್ಲಿಸಲಾಗಿದೆ. ಆದರೆ, ಇದುವರೆಗೂ ಅವರ ವಿರುದ್ಧ ಯಾವುದೇ ಕ್ರಮವಾಗಿಲ್ಲ. ಈ ವಿಚಾರದಲ್ಲಿ ಪೊಲೀಸರು ದಯನೀಯವಾಗಿ ವಿಫಲರಾಗಿದ್ದಾರೆ. ಪ್ರತಿಭಟನೆಯ ನೆಪದಲ್ಲಿ ಸ್ಥಾಪಿತ ಹಿತಾಸಕ್ತಿಗಳು ವೀರೇಂದ್ರ ಹೆಗ್ಗಡೆ ಅವರ ಕುಟುಂಬಕ್ಕೆ ಧಕ್ಕೆಯಾಗುವ ರೀತಿಯಲ್ಲಿ ಅಪಪ್ರಚಾರ ನಡೆಸುವುದನ್ನು ಮುಂದುವರಿಸಿದ್ದಾರೆ. ಹೀಗಾಗಿ, ಪ್ರತಿವಾದಿಗಳಿಗೆ ಸಲ್ಲಿಸಿರುವ ಮನವಿಗೆ ಸಂಬಂಧಿಸಿದಂತೆ ಕ್ರಮಕೈಗೊಳ್ಳಲು ಆದೇಶಿಸಬೇಕು ಎಂದು ಕೋರಲಾಗಿದೆ.
ಸೌಜನ್ಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನಿನ ಅನ್ವಯ ಯಾವುದೇ ತೆರನಾದ ತನಿಖೆ ನಡೆಸಲು ರಾಜ್ಯ ಸರ್ಕಾರ, ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹಾಗೂ ಪೊಲೀಸ್ ಮಹಾನಿರ್ದೇಶಕರಿಗೆ ಆದೇಶಿಸಬೇಕು ಎಂದು ಕೋರಲಾಗಿದೆ. ಅಧೀನ ನ್ಯಾಯಾಲಯಗಳು ಮಾಡಿರುವ ತಾತ್ಕಾಲಿಕ ಪ್ರತಿಬಂಧಕಾದೇಶಗಳನ್ನು ಉಲ್ಲಂಘಿಸಿ, ನ್ಯಾಯಾಂಗ ಮತ್ತು ನ್ಯಾಯಾಧೀಶರ ವಿರುದ್ಧ ಆಧಾರರಹಿತ, ವಿವಾದಾತ್ಮಕ ಆರೋಪ ಮಾಡಿರುವ 9ನೇ ಪ್ರತಿವಾದಿ ಮಹೇಶ್ ತಿಮರೋಡಿ ವಿರುದ್ಧ ಸೂಕ್ತ ಕ್ರಮಕೈಗೊಳ್ಳಲು ಸರ್ಕಾರ ಮತ್ತು ಪೊಲೀಸರಿಗೆ ಆದೇಶಿಸಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ.
ಇದಕ್ಕೂ ಮುನ್ನ, ನ್ಯಾಯಾಂಗ ವ್ಯವಸ್ಥೆ, ಪೊಲೀಸರು ಮತ್ತು ತನಿಖಾ ಸಂಸ್ಥೆಗಳ ವಿರುದ್ಧ ಹಾಗೂ ಸೌಜನ್ಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವೀರೇಂದ್ರ ಹೆಗ್ಗಡೆ ಮತ್ತು ಅವರ ಕುಟುಂಬ ಸದಸ್ಯರ ವಿರುದ್ಧ ಮಹೇಶ್ ತಿಮರೋಡಿ ಅವರು ಆಧಾರರಹಿತ ಆರೋಪ ಮಾಡದಂತೆ ಹಾಗೂ ನ್ಯಾಯಾಲಯದ ಆದೇಶಗಳನ್ನು ಉಲ್ಲಂಘಿಸದಂತೆ ನಿರ್ಬಂಧಿಸಿ ಮಧ್ಯಂತರ ಆದೇಶ ಮಾಡಬೇಕು ಎಂದು ಕೋರಲಾಗಿದೆ.