ವಕೀಲರ ರಕ್ಷಣಾ ಕಾಯಿದೆಯನ್ನು ಜಾರಿಗೆ ತರಲು ನಾವು ಬದ್ದವಾಗಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಕೀಲ ಸಮುದಾಯಕ್ಕೆ ಭರವಸೆ ನೀಡಿದ್ದಾರೆ.
ಬೆಂಗಳೂರು ವಕೀಲರ ಸಂಘವು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಆಯೋಜಿಸಿದ್ದ ನ್ಯಾಯಮೂರ್ತಿ ಬಿ ವೀರಪ್ಪ ಅವರ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದ ಅವರು, “ವಕೀಲರ ರಕ್ಷಣಾ ಕಾಯಿದೆಯನ್ನು ಜಾರಿಗೆ ತರಲು ನಾವು ಬದ್ದವಾಗಿದ್ದೇವೆ. ನಾನು ವಿರೋಧ ಪಕ್ಷದ ನಾಯಕನಾಗಿದ್ದಾಗ ವಕೀಲ ಸಮೂಹ ಈ ಕಾಯಿದೆ ಜಾರಿಗೆ ಆಗ್ರಹಿಸಿ ಪ್ರತಿಭಟಿಸಿತ್ತು. ಇದಕ್ಕೆ ಬೆಂಬಲ ಸೂಚಿಸಿ ವಿಧಾನಸಭೆಯಲ್ಲಿ ವಕೀಲರ ಪರವಾಗಿ ಧ್ವನಿ ಎತ್ತಿದ್ದೆ. ಈಗ ನಾವೇ ಅಧಿಕಾರಕ್ಕೆ ಬಂದಿದ್ದೇವೆ. ಈ ಕಾಯಿದೆಯನ್ನು ಜಾರಿಗೆ ತರಲು ಬದ್ದವಾಗಿದ್ದೇವೆ” ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ವಕೀಲರ ಸಂಘ ವಕೀಲರಿಗೆ ವಿಮಾ ಯೋಜನೆ ಜಾರಿಗೆ ತರುವಂತೆ ಮಾಡಿದ ಮನವಿಗೆ ಪೂರಕವಾಗಿ ಸ್ಪಂದಿಸಿದ ಅವರು ಈ ಬಗ್ಗೆಯೂ ಸಮಗ್ರವಾಗಿ ಚರ್ಚಿಸಿ, ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದರು.