ರಾಜಧಾನಿ ಬೆಂಗಳೂರು ನಗರದಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಬಳ್ಳಾರಿ ರಸ್ತೆ ಅಗಲೀಕರಣ ಕಾಮಗಾರಿಯನ್ನು ಬಿಬಿಎಂಪಿಯ ಹಿರಿಯ ಅಧಿಕಾರಿಯ ಮೇಲ್ವಿಚಾರಣೆಯಲ್ಲಿ ನಡೆಸಬೇಕು ಎಂದು ಕರ್ನಾಟಕ ಹೈಕೋರ್ಟ್ ಶುಕ್ರವಾರ ಸೂಚಿಸಿದೆ.
ಬಳ್ಳಾರಿ ರಸ್ತೆ ಅಗಲೀಕರಣಕ್ಕೆ ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ನಗರದ ಸಮರ್ಪಣಾ ಸ್ವಯಂಸೇವಾ ಸಂಸ್ಥೆ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪಿ ಬಿ ವರಾಳೆ ಮತ್ತು ನ್ಯಾಯಮೂರ್ತಿ ಅಶೋಕ್ ಎಸ್. ಕಿಣಗಿ ಅವರ ನೇತೃತ್ವದ ಏಕಸದಸ್ಯ ಪೀಠವು ಬಿಬಿಎಂಪಿಗೆ ಸೂಚನೆ ನೀಡಿತು.
ಇದಕ್ಕೂ ಮುನ್ನ ಅರ್ಜಿದಾರರ ಪರ ವಕೀಲ ಜಿ ಆರ್ ಮೋಹನ್ ಅವರು “ಸದಾ ವಾಹನ ದಟ್ಟಣೆಯಿಂದ ಕೂಡಿರುವ ಬಳ್ಳಾರಿ ರಸ್ತೆ ಅಗಲೀಕರಣ ಮಾಡುವಂತೆ ಸುಪ್ರೀಂ ಕೋರ್ಟ್ ನಿರ್ದೇಶಿಸಿದೆ. ಹೀಗಿದ್ದರೂ, ಪಾಲಿಕೆ ಕಾಮಗಾರಿ ವಿಳಂಬ ಮಾಡುತ್ತಿದೆ” ಎಂದು ದೂರಿದರು.
ಬಿಬಿಎಂಪಿ ಪರ ವಕೀಲರು “ಈಗಾಗಲೇ ಮೇಖ್ರಿ ವೃತ್ತದಿಂದ ಕಾವೇರಿ ಜಂಕ್ಷನ್ ವರೆಗೆ ಕಾಮಗಾರಿ ಪ್ರಾರಂಭವಾಗಿದೆ. ಈ ಮಾರ್ಗದಲ್ಲಿ ವಾಹನ ಸಂಚಾರ ದಟ್ಟಣೆ ಹೆಚ್ಚಾಗಿದೆ. ಆದ್ದರಿಂದ, ಕಾಮಗಾರಿ ವಿಳಂಬವಾಗುತ್ತಿದೆ” ಎಂದು ಪೀಠಕ್ಕೆ ವಿವರಿಸಿದರು.
ಆಗ ಪೀಠವು ರಸ್ತೆ ಅಗಲೀಕರಣ ಕಾಮಗಾರಿಯನ್ನು ಪಾಲಿಕೆಯ ವಿಶ್ವಾಸಾರ್ಹ ಹಿರಿಯ ಅಧಿಕಾರಿಗಳು ಮೇಲ್ವಿಚಾರಣೆ ನಡೆಸಬೇಕು. ಆ ಅಧಿಕಾರಿಗಳು ಕಾಲಕಾಲಕ್ಕೆ ಪರಿಶೀಲನೆ ನಡೆಸುತ್ತ, ಕಾಮಗಾರಿ ವಿಳಂಬವಾಗದಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿತಲ್ಲದೆ, ಮುಂದಿನ ನಾಲ್ಕು ವಾರಗಳಲ್ಲಿ ಕಾಮಗಾರಿಯ ಪ್ರಗತಿ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ಪಾಲಿಕೆಗೆ ನಿರ್ದೇಶಿಸಿ, ವಿಚಾರಣೆ ಮುಂದೂಡಿತು.