ಮಹಿಳೆ ಅಪಹರಣ ಪ್ರಕರಣ: ಜಾಮೀನು ಕೋರಿ ಜನಪ್ರತಿನಿಧಿಗಳ ನ್ಯಾಯಾಲಯದ ಕದತಟ್ಟಿದ ಮಾಜಿ ಶಾಸಕ ರೇವಣ್ಣ

ಎಚ್‌ ಡಿ ರೇವಣ್ಣ ಪರ ವಕೀಲ ಪವನ್‌ ಸಾಗರ್‌ ಸೋಮವಾರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್‌ ಮುಂದೆ ಪ್ರಕರಣ ಉಲ್ಲೇಖಿಸಿದರು.
ಮಹಿಳೆ ಅಪಹರಣ ಪ್ರಕರಣ: ಜಾಮೀನು ಕೋರಿ ಜನಪ್ರತಿನಿಧಿಗಳ ನ್ಯಾಯಾಲಯದ ಕದತಟ್ಟಿದ ಮಾಜಿ ಶಾಸಕ ರೇವಣ್ಣ
Published on

ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆಯೊಬ್ಬರ ಅಪಹರಣದ ಮತ್ತೊಂದು ಪ್ರಕರಣದಲ್ಲಿ ಮೊದಲ ಆರೋಪಿಯಾಗಿ ಸದ್ಯ ಎಸ್‌ಐಟಿ ಬಂಧನದಲ್ಲಿರುವ ಹೊಳೆನರಸೀಪುರ ಕ್ಷೇತ್ರದ ಜೆಡಿಎಸ್‌ ಶಾಸಕ ಎಚ್‌ ಡಿ ರೇವಣ್ಣ ಸಾಮಾನ್ಯ ಜಾಮೀನು ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.

ಎಚ್‌ ಡಿ ರೇವಣ್ಣ ಪರ ವಕೀಲ ಪವನ್‌ ಸಾಗರ್‌ ಸೋಮವಾರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್‌ ಮುಂದೆ ಪ್ರಕರಣ ಉಲ್ಲೇಖಿಸಿದರು. ಅರ್ಜಿ ಪರಿಶೀಲಿಸಿದ ನ್ಯಾಯಾಧೀಶರು ನಾಳೆಗೆ ಅರ್ಜಿಯನ್ನು ವಿಚಾರಣೆ ನಿಗದಿಪಡಿಸಿದ್ದಾರೆ.

ಬಂಧಿತ ರೇವಣ್ಣ ಅವರನ್ನು ಭಾನುವಾರ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯವು ಮೇ 8ರವರೆಗೆ ಎಸ್‌ಐಟಿ ವಶಕ್ಕೆ ನೀಡಿದೆ. ಶನಿವಾರ ಮಧ್ಯಂತರ ನಿರೀಕ್ಷಣಾ ಜಾಮೀನು ಕೋರಿ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಧೀಶರಾದ ಸಂತೋಷ್‌ ಗಜಾನನ ಭಟ್‌ ಅವರು ತಿರಸ್ಕರಿಸಿದ್ದರು. ಇದರ ಬೆನ್ನಿಗೇ ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದರು.

ಸಂತ್ರಸ್ತ ಮಹಿಳೆಯನ್ನು ಅಪಹರಿಸಿದ ಪ್ರಕರಣದಕ್ಕೆ ಸಂಬಂಧಿಸಿದಂತೆ ಆಕೆಯ ಪುತ್ರ ನೀಡಿದ ದೂರಿನ ಮೇರೆಗೆ ಮೈಸೂರು ಜಿಲ್ಲೆಯ ಕೆ ಆರ್‌ ನಗರ ಠಾಣೆಯಲ್ಲಿ ಐಪಿಸಿ ಸೆಕ್ಷನ್‌ಗಳಾದ 364(ಎ), 365 ಜೊತೆಗೆ 34ರ ಅಡಿ ಪ್ರಕರಣ ದಾಖಲಿಸಲಾಗಿದೆ. ಈ ಪ್ರಕರಣದಲ್ಲಿ ರೇವಣ್ಣ ಮೊದಲ ಆರೋಪಿಯಾಗಿದ್ದು, ಸತೀಶ್‌ ಬಾಬಣ್ಣ ಎರಡನೇ ಆರೋಪಿಯಾಗಿದ್ದಾರೆ.

Kannada Bar & Bench
kannada.barandbench.com