ಯೋಗೀಶ್‌ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್‌ ಕುಲಕರ್ಣಿ ವಿರುದ್ಧದ ನ್ಯಾಯಿಕ ಪ್ರಕ್ರಿಯೆಗೆ ತಡೆ ನೀಡಲು ಹೈಕೋರ್ಟ್‌ ನಕಾರ

ಧಾರವಾಡ ಉಪನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 2016ರ ಜೂನ್‌ 15ರಂದು ಯೋಗೀಶ್‌ಗೌಡ ಕೊಲೆ ನಡೆದಿತ್ತು. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜನವರಿ 29ರಿಂದ ಫೆಬ್ರವರಿ 1ರವರೆಗೆ ನಿಯಮಿತವಾಗಿ ಪ್ರಕರಣದ ವಿಚಾರಣೆ ಕೈಗೆತ್ತಿಕೊಳ್ಳಲಿದೆ.
Vinay Kulkarni and Karnataka HC
Vinay Kulkarni and Karnataka HC
Published on

ಧಾರವಾಡ ಜಿಲ್ಲೆಯ ಹೆಬ್ಬಳ್ಳಿ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಬಿಜೆಪಿ ಸದಸ್ಯರಾಗಿದ್ದ ಯೋಗೀಶ್‌ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ಶಾಸಕ ವಿನಯ್ ಕುಲಕರ್ಣಿ ವಿರುದ್ಧದ ವಿಚಾರಣಾಧೀನ ನ್ಯಾಯಾಲಯದ ನ್ಯಾಯಿಕ ಪ್ರಕ್ರಿಯೆಗಳಿಗೆ ತಡೆ ಕೋರಿದ್ದ ಮನವಿಯನ್ನು ಕರ್ನಾಟಕ ಹೈಕೋರ್ಟ್‌ ಶುಕ್ರವಾರ ತಳ್ಳಿ ಹಾಕಿದೆ.

ತನ್ನ ವಿರುದ್ಧದ ಆರೋಪಪಟ್ಟಿ ಮತ್ತು ವಿಶೇಷ ನ್ಯಾಯಾಲಯದಲ್ಲಿ ನಡೆಯಲಿರುವ ವಿಚಾರಣಾಧೀನ ನ್ಯಾಯಾಲಯದ ನ್ಯಾಯಿಕ ಪ್ರಕ್ರಿಯೆ ರದ್ದುಗೊಳಿಸಬೇಕು ಎಂದು ಕೋರಿ ವಿನಯ್ ಕುಲಕರ್ಣಿ ಸಲ್ಲಿಸಿರುವ ಕ್ರಿಮಿನಲ್‌ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಕೃಷ್ಣ ಎಸ್‌.ದೀಕ್ಷಿತ್‌ ಅವರ ನೇತೃತ್ವದ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.

ವಿನಯ್ ಕುಲಕರ್ಣಿ ಅವರನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಸಿ ವಿ ನಾಗೇಶ್‌ ಅವರು, ವಿಚಾರಣಾಧೀನ ನ್ಯಾಯಾಲಯ ತನ್ನ ಪ್ರಕ್ರಿಯೆ ಆರಂಭಿಸಲು ಜನವರಿ 29ಕ್ಕೆ ದಿನಾಂಕ ನಿಗದಿಗೊಳಿಸಿದೆ. ಇದಕ್ಕೆ ಮಧ್ಯಂತರ ತಡೆ ನೀಡಬೇಕು ಎಂದು ಕೋರಿದರು. ಇದನ್ನು ಸ್ಪಷ್ಟವಾಗಿ ನಿರಾಕರಿಸಿದ ಪೀಠವು ಪ್ರತಿವಾದಿ ಸಿಬಿಐಗೆ ನೋಟಿಸ್‌ ಜಾರಿಗೊಳಿಸಲು ಆದೇಶಿಸಿ, ವಿಚಾರಣೆಯನ್ನು ಜನವರಿ 19ಕ್ಕೆ ಮುಂದೂಡಿತು.

ಸಿಬಿಐ ಪ್ರತಿನಿಧಿಸಿದ್ದ ವಿಶೇಷ ಸರ್ಕಾರಿ ಅಭಿಯೋಜಕ ಪಿ ಪ್ರಸನ್ನ ಕುಮಾರ್ ಅವರು ಈ ಪ್ರಕರಣದ ನ್ಯಾಯಿಕ ವಿಚಾರಣೆಯಲ್ಲಿ ಸಿಬಿಐ ಪರವಾದ ವಿಶೇಷ ಪ್ರಾಸಿಕ್ಯೂಟರ್‌ ಆಗಿ ಹಾಜರಾಗಲು ಗಂಗಾಧರ ಶೆಟ್ಟಿ ಅವರನ್ನು ನೇಮಕ ಮಾಡಲಾಗಿದೆ ಎಂಬ ಈ ಮೊದಲಿನ ಅಧಿಸೂಚನೆಯಲ್ಲಿ ಬದಲಾವಣೆ ಮಾಡಲಾಗಿದೆ. ನಾನೇ ಈ ಪ್ರಕರಣದಲ್ಲಿ ಮುಂದುವರಿಯುವಂತೆ ನನಗೆ ಬೆಂಗಳೂರು ವಿಭಾಗದ ಸಿಬಿಐ ಅಧಿಕಾರಿಗಳು ಮುಖ್ತಾರ್‌ ನಾಮೆ ನೀಡಿದ್ದಾರೆ. ಇದನ್ನು ಪರಿಗಣಿಸಿ ಹಾಜರಾಗಲು ಅನುಮತಿಸಬೇಕು ಎಂದು ಪೀಠಕ್ಕೆ ಮನವಿ ಮಾಡಿದರು.

ಆದರೆ, ಇದನ್ನು ಒಪ್ಪದ ಪೀಠವು ಈ ಕುರಿತ ಅಧಿಸೂಚನೆ ಎಲ್ಲಿದೆ ಎಂದು ಕೇಳಿತು. ಅಂತೆಯೇ, ಸಿ ವಿ ನಾಗೇಶ್‌ ಅವರೂ ಸಿಬಿಐನ ವಿವರಣೆಯನ್ನು ಬಲವಾಗಿ ಆಕ್ಷೇಪಿಸಿದರು. ಮುಂದಿನ ವಿಚಾರಣೆ ವೇಳೆಗೆ ಈ ಕುರಿತಂತೆ ಹೊಸ ಅಧಿಸೂಚನೆಯನ್ನು ಸಲ್ಲಿಸಿ ಹಾಜರಾಗಿ ಎಂದು ಪೀಠ ಸಿಬಿಐಗೆ ಆದೇಶಿಸಿತು.

ಪ್ರಕರಣದ ಹಿನ್ನೆಲೆ: ಧಾರವಾಡ ಉಪನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 2016ರ ಜೂನ್‌ 15ರಂದು ಯೋಗೀಶ್‌ಗೌಡ ಕೊಲೆ ನಡೆದಿತ್ತು. ಈ ಪ್ರಕರಣವನ್ನು ಸಿಬಿಐ ತನಿಖೆ ನಡೆಸಿದ್ದು, ವಿಶೇಷ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜನವರಿ 29ರಿಂದ ಫೆಬ್ರುವರಿ 1ರವರೆಗೆ ನಿಯಮಿತವಾಗಿ ವಿಚಾರಣೆ ಕೈಗೆತ್ತಿಕೊಳ್ಳಲಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ 2020ರ ನವೆಂಬರ್‌ನಲ್ಲಿ ವಿನಯ ಕುಲಕರ್ಣಿ ಅವರನ್ನು ಬಂಧಿಸಿ, ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿ ಒಂಬತ್ತು ತಿಂಗಳ ಕಾಲ ನ್ಯಾಯಾಂಗ ಬಂಧನದಲ್ಲಿ ಇರಿಸಲಾಗಿತ್ತು.

Kannada Bar & Bench
kannada.barandbench.com