
ಧಾರವಾಡ ಜಿಲ್ಲೆಯ ಹೆಬ್ಬಳ್ಳಿ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಬಿಜೆಪಿ ಸದಸ್ಯರಾಗಿದ್ದ ಯೋಗೀಶ್‌ಗೌಡ ಗೌಡರ್ ಕೊಲೆ ಪ್ರಕರಣದ ಆರೋಪಿಯಾಗಿರುವ ಧಾರವಾಡ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಶಾಸಕ ವಿನಯ ಕುಲಕರ್ಣಿ ಅವರು ಶುಕ್ರವಾರ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದೆದುರು ಶರಣಾದರು.
ಸುಪ್ರೀಂ ಕೋರ್ಟ್ ಆದೇಶದ ಅನುಸಾರ ಬೆಳಿಗ್ಗೆ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್ ಅವರ ಮುಂದೆ ಶರಣಾದ ವಿನಯ ಕುಲಕರ್ಣಿ ಅವರನ್ನು ನ್ಯಾಯಾಧೀಶರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶಿಸಿದರು.
ಪ್ರಕರಣದ ಸಾಕ್ಷಿಗಳಿಗೆ ಬೆದರಿಕೆ ಹಾಕಿರುವ ಆರೋಪದಡಿ ವಿನಯ ಕುಲಕರ್ಣಿ ಅವರ ಜಾಮೀನು ರದ್ದುಪಡಿಸಬೇಕು ಎಂದು ಸಿಬಿಐ ಕೋರಿತ್ತು. ಈ ಹಿನ್ನೆಲೆಯಲ್ಲಿ ಅವರ ಜಾಮೀನು ರದ್ದಾಗಿದೆ.
ಧಾರವಾಡ ಉಪನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 2016ರ ಜೂನ್ 15ರಂದು ಯೋಗೀಶ್‌ಗೌಡ ಗೌಡರ್ ಕೊಲೆ ನಡೆದಿತ್ತು. ಈ ಪ್ರಕರಣವನ್ನು ಸಿಬಿಐ ತನಿಖೆ ನಡೆಸಿದ್ದು, ವಿಶೇಷ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದೆ.
ಪ್ರಕರಣದಲ್ಲಿನ 16ನೇ ಆರೋಪಿ ಚಂದ್ರಶೇಖರ್ ಇಂಡಿಗೆ ಹೈಕೋರ್ಟ್ ನಿನ್ನೆ ಜಾಮೀನು ನಿರಾಕರಿಸಿತ್ತು.