Vinay Kulkarni and Karnataka HC
Vinay Kulkarni and Karnataka HC

ಯೋಗೀಶ್‌ ಗೌಡ ಕೊಲೆ ಪ್ರಕರಣ: ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿ ಅರ್ಜಿ ಆದೇಶ ಕಾಯ್ದಿರಿಸಿದ ಹೈಕೋರ್ಟ್‌

ಆರೋಪ ನಿಗದಿಪಡಿಸುವಾಗ ಶಸ್ತ್ರಾಸ್ತ್ರ ಕಾಯಿದೆಯನ್ನೂ ಅಡಕಗೊಳಿಸಿರುವುದು‌ ತಪ್ಪು ಮತ್ತು ಕಾನೂನಿಗೆ ವಿರುದ್ಧ ಎಂದು ಆಕ್ಷೇಪಿಸಿದ ವಿನಯ ಕುಲಕರ್ಣಿ ಪರ ಹಿರಿಯ ವಕೀಲ ಸಿ ವಿ ನಾಗೇಶ್‌.

ಧಾರವಾಡ ಜಿಲ್ಲೆಯ ಹೆಬ್ಬಳ್ಳಿ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಬಿಜೆಪಿ ಸದಸ್ಯರಾಗಿದ್ದ ಯೋಗೀಶ್‌ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಿಗದಿಪಡಿಸಿರುವ ಆರೋಪ ನಿಗದಿಯಲ್ಲಿ ಸಾಕಷ್ಟು ದೋಷಗಳಿವೆ ಎಂದು ಆಕ್ಷೇಪಿಸಿ ಪ್ರಕರಣದ ಆರೋಪಿಯೂ ಆದ ಧಾರವಾಡದ ಕಾಂಗ್ರೆಸ್‌ ಶಾಸಕ ವಿನಯ್ ಕುಲಕರ್ಣಿ ಸಲ್ಲಿಸಿರುವ ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ಕರ್ನಾಟಕ ಹೈಕೋರ್ಟ್‌ ಶುಕ್ರವಾರ ತೀರ್ಪು ಕಾಯ್ದಿರಿಸಿದೆ.

ತಮ್ಮ ವಿರುದ್ಧದ ಆರೋಪ ನಿಗದಿ ಮತ್ತು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ (ಸತ್ರ) ನ್ಯಾಯಾಲಯದಲ್ಲಿ ನಡೆಯಲಿರುವ ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಎಂದು ಕೋರಿ ವಿನಯ ಕುಲಕರ್ಣಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್‌.ದೀಕ್ಷಿತ್‌ ಅವರ ನೇತೃತ್ವದ ಏಕಸದಸ್ಯ ಪೀಠವು ಆದೇಶ ಕಾಯ್ದಿರಿಸಿದೆ.

ಅರ್ಜಿದಾರ ವಿನಯ್‌ ಕುಲಕರ್ಣಿ ಪರ ವಾದಿಸಿದ ಹಿರಿಯ ವಕೀಲ ಸಿ ವಿ ನಾಗೇಶ್‌ ಅವರು, ಆರೋಪ ಪಟ್ಟಿಯಲ್ಲಿನ ಎಲ್ಲಾ ದಾಖಲೆಗಳನ್ನು ಆರೋಪಿಗೆ ಒದಗಿಸಿಲ್ಲ. ಪ್ರಕರಣದಲ್ಲಿ ಪ್ರಾಸಿಕ್ಯೂಷನ್‌, ಶಸ್ತ್ರಾಸ್ತ್ರ ಕಾಯಿದೆ–1959ರ ಪ್ರಕಾರ ಮೊದಲ ಆರೋಪಿ ಬಸವರಾಜ ಮುತ್ತಗಿ ಮೇಲೆ ಮಾತ್ರವೇ ಪೂರ್ವಾನುಮತಿ ಪಡೆದಿದೆ. ವಿನಯ ಕುಲಕರ್ಣಿ ಮೇಲೆ ಪಡೆದಿಲ್ಲ. ಪೂರ್ವಾನುಮತಿಯನ್ನು ಕೊಡುವುದು ಕೇವಲ ವ್ಯಕ್ತಿಗೆ ಮಾತ್ರ. ಇಡೀ ಕೇಸಿಗಲ್ಲ. ಆದ್ದರಿಂದ, ವಿನಯ ಕುಲಕರ್ಣಿ ವಿರುದ್ಧ ವಿಶೇಷ ನ್ಯಾಯಾಲಯ ಆರೋಪ ನಿಗದಿಪಡಿಸುವಾಗ ಶಸ್ತ್ರಾಸ್ತ್ರ ಕಾಯಿದೆಯನ್ನೂ ಅಡಕಗೊಳಿಸಿರುವುದು‌ ತಪ್ಪು ಮತ್ತು ಕಾನೂನಿಗೆ ವಿರುದ್ಧ ಎಂದರು. ಸಿಬಿಐ ಪರ ಹೆಚ್ಚುವರಿ ಸಾಲಿಸಿಟರ್‌ ಜನರಲ್‌ ಎಸ್‌ ವಿ ರಾಜು ಹಾಗೂ ವಿಶೇಷ ಸರ್ಕಾರಿ ಅಭಿಯೋಜಕರಾದ ಪಿ ಪ್ರಸನ್ನಕುಮಾರ್ ಹಾಜರಿದ್ದರು.

ಪ್ರಕರಣದ ಹಿನ್ನೆಲೆ: ಧಾರವಾಡ ಉಪನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 2016ರ ಜೂನ್‌ 15ರಂದು ಯೋಗೀಶ್‌ಗೌಡ ಅವರ ಕೊಲೆ ನಡೆದಿತ್ತು. ಈ ಪ್ರಕರಣವನ್ನು ಸಿಬಿಐ ತನಿಖೆ ನಡೆಸಿದ್ದು, ವಿಶೇಷ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದೆ. ಸಿಸಿಎಚ್‌–82ರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಒಟ್ಟು 21 ಆರೋಪಿಗಳ ವಿರುದ್ಧ ಆರೋಪ ನಿಗದಿಪಡಿಸಿ 2024ರ ಜನವರಿ 29ರಿಂದ ಫೆಬ್ರವರಿ 1ರವರೆಗೆ ನಿಯಮಿತವಾಗಿ ವಿಚಾರಣೆ ಕೈಗೆತ್ತಿಕೊಳ್ಳುವುದಾಗಿ ಆದೇಶಿಸಿತ್ತು. ಪ್ರಕರಣದ ಆರೋಪಿಯೂ ಆದ ವಿನಯ್‌ ಕುಲಕರ್ಣಿ, ಆರೋಪ ನಿಗದಿ ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ.

Related Stories

No stories found.
Kannada Bar & Bench
kannada.barandbench.com